ಶನಿವಾರ, ಅಕ್ಟೋಬರ್ 23, 2021
20 °C
ಮಟಮಾರಿಯಲ್ಲಿ ಜನಸ್ಪಂದನೆ ಸಭೆ: ಶಾಸಕ ಬಸನಗೌಡ ದದ್ದಲ ಹೇಳಿಕೆ

ಗ್ರಾಮಗಳಲ್ಲಿಯೇ ಸಮಸ್ಯೆಗಳಿಗೆ ಇತ್ಯರ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಜನಸಾಮಾನ್ಯರು ಸರ್ಕಾರಿ ಕಚೇರಿ ಅಲೆದಾಡುವದನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರದಿಂದ ವಿನೂತನ ಕಾರ್ಯಕ್ರಮ ಹಾಕಿಕೊಂಡಿದೆ. ಕಷ್ಟದಲ್ಲಿ ಇರುವವರಿಗೆ ಸ್ಪಂದಿಸಲು ಜನ ಸ್ಪಂದನ ಕಾರ್ಯಕ್ರಮದ ಮೂಲಕ ಗ್ರಾಮಸ್ಥರಿಗೆ ಗ್ರಾಮದಲ್ಲಿಯೇ ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗಳಲಾಗುವುದು ಎಂದು ಶಾಸಕ ಬಸನಗೌಡ ದದ್ದಲ್ ಹೇಳಿದರು.

ತಾಲ್ಲೂಕಿನ ಮಟಮಾರಿ ಗ್ರಾಮದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಇತರೆ ಇಲಾಖೆಗಳಿಂದ ಗುರುವಾರ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ಸೌಲಭ್ಯ ಬಳಸಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಜನ ಸಾಮಾನ್ಯರು ಸಮಸ್ಯೆ ಮಾಹಿತಿ ಕೇಂದ್ರ ಆರಂಭಿಸಲಾಗಿದೆ. ಸಮಸ್ಯೆಯ ಕುರಿತು ಅರ್ಜಿ ಸಲ್ಲಿಸಿದ ನಂತರ ಸ್ಥಳದಲ್ಲಿ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ಜನ ಸ್ಪಂದನ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು. ಗ್ರಾಮ ಮಟ್ಟದಲ್ಲಿ ಇರುವ ಯೋಜನೆ ಸರಿಯಾಗಿ ಅನುಷ್ಠಾನ ಮಾಡಿದಲ್ಲಿ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

ರಾಯಚೂರು ತಹಶೀಲ್ದಾರ್ ಡಾ. ಹಂಪಣ್ಣ ಸಜ್ಜನ್ ಮಾತನಾಡಿ, ಸರ್ಕಾರಿ ಸೌಲಭ್ಯ ಬಳಸಿಕೊಂಡು ಸಾಮಾಜಿಕ ಮತ್ತು ಆರ್ಥಿಕ ಬೆಳವಣಿಗೆ ಹೊಂದಬೇಕು. ಸರ್ಕಾರದಿಂದ ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕೆ ತರಲು ಶ್ರಮ ವಹಿಸಲಾಗುತ್ತಿದೆ. ಪ್ರತಿಯೊಬ್ಬರೂ ಕೋವಿಡ್-19ರ ಲಸಿಕೆ ಪಡೆಯಬೇಕು ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮರೆಡ್ಡಿ ಮಾತನಾಡಿ, ಆಯುಷ್ಮಾನ್‌ ಭಾರತ ಆರೋಗ್ಯ ಕಾರ್ಡ್ ನೀಡಲಾಗುತ್ತಿದ್ದು, ಅರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳು ಆರೋಗ್ಯ ಕಾರ್ಡ್ ಪಡೆಯಬೇಕು. ಅಲ್ಲದೆ ಸಾರ್ವಜನಿಕ ಮತ್ತು ವೈಯಕ್ತಿಕ ಸಮಸ್ಯೆ ಇದ್ದಲ್ಲಿ ಸಂಬಂಧಿಸಿದ ಇಲಾಖೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಶಕೀರ್ ಮಾತನಾಡಿ, ಲಸಿಕೆ ಬಗ್ಗೆ ಇರುವ ವದಂತಿಗೆ ಕಿವಿಗೊಡದೆ. ಅರ್ಹ ಫಲಾನುಭವಿಗಳು ಮೊದಲ ಮತ್ತು ಎರಡನೇ ಲಸಿಕೆ ಪಡೆಯಬೇಕು. ಡೆಂಗಿ ಮತ್ತು ಚಿಕುನ್ ಗುನ್ಯ ತಡೆಗಟ್ಟಲು ಸ್ವಚ್ಛತೆಗೆ ಆದ್ಯತೆ ನೀಡಿ ಎಂದರು.

ಜಿಲ್ಲಾ ಪಂಚಾಯಿತಿ ಯೋಜನೆ ಅಧಿಕಾರಿ ಡಾ.ಟಿ ರೋಣಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಗುರಿ ಇಟ್ಟುಕೊಂಡು ಅಭ್ಯಾಸ ಮಾಡಿದಲ್ಲಿ ಯಶಸ್ವಿ ಸಾಧ್ಯ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಅಧ್ಯತೆ ನೀಡಿ ಎಂದು ಹೇಳಿದರು.

ರಾಯಚೂರು ಕ್ಷೇತ್ರ ಶಿಕ್ಷಣ ಅಧಿಕಾರಿ ಚಂದ್ರಶೇಖರ್, ಕೃಷಿ ಇಲಾಖೆ ಅಧಿಕಾರಿ ದೀಪಾ ಕುಲಕರ್ಣಿ, ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ ರಾಜೇಂದ್ರ ಜಲ್ದಾರ್, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸಾಬಯ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನ ಪ್ರತಿನಿಧಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.