ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಧನೂರು | 'ಜೆಡಿಎಸ್-ಬಿಜೆಪಿ ಮೈತ್ರಿ ಬಹಿರಂಗ ಸಭೆ ನಾಳೆ'

ಕುಮಾರಸ್ವಾಮಿ, ವಿಜಯೇಂದ್ರ ಭಾಗಿ: ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ನಾಡಗೌಡ ಹೇಳಿಕೆ
Published 1 ಮೇ 2024, 14:50 IST
Last Updated 1 ಮೇ 2024, 14:50 IST
ಅಕ್ಷರ ಗಾತ್ರ

ಸಿಂಧನೂರು: ‘ನಗರದ ಪಿಡಬ್ಲ್ಯೂಡಿ ಕ್ಯಾಂಪಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಮೇ 3ರಂದು ಮಧ್ಯಾಹ್ನ 2 ಗಂಟೆಗೆ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಪರ ಬಹಿರಂಗ ಪ್ರಚಾರ ಸಭೆ ಹಮ್ಮಿಕೊಳ್ಳಲಾಗಿದೆ’ ಎಂದು ಮಾಜಿ ಸಚಿವ ವೆಂಕಟರಾವ್ ನಾಡಗೌಡ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಹನುಮಂತಪ್ಪ ಆಲ್ಕೋಡ್ ಹಾಗೂ ಮತ್ತಿತರ ಮುಖಂಡರು ಭಾಗವಹಿಸಲಿದ್ದಾರೆ’ ಎಂದು ಹೇಳಿದರು.

‘ಪೆನ್‌ ಡ್ರೈವ್ ಪ್ರಕರಣ ಸಾಬೀತಾದರೆ ಶಿಕ್ಷೆಯಾಗಲಿ’: ‘ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊಗಳ ಪೆನ್‌ ಡ್ರೈವ್ ಪ್ರಕರಣದ ತನಿಖೆಗಾಗಿ ಈಗಾಗಲೇ ರಾಜ್ಯ ಸರ್ಕಾರ ಎಸ್‍ಐಟಿ ರಚನೆ ಮಾಡಿದೆ. ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡಲಾಗಿದೆ. ಆರೋಪ ಸಾಬೀತಾದರೆ ಈ ನೆಲದ ಕಾನೂನಿನ ಅಡಿಯಲ್ಲಿ ಶಿಕ್ಷೆಯಾಗಲಿ’ ಎಂದು ಹೇಳಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬಕ್ಕೆ ಮಸಿ ಬಳಿಯುವ ಕೆಲಸವನ್ನು ಕಾಂಗ್ರೆಸ್ಸಿಗರು ಮಾಡುತ್ತಿದ್ದಾರೆ. ಇದರ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಕೈವಾಡವಿದ್ದು, ಇಷ್ಟು ಕೀಳುಮಟ್ಟದ ರಾಜಕಾರಣ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ನಾಡಗೌಡ ಟೀಕಿಸಿದರು.

ಜೆಡಿಎಸ್ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಹನುಮಂತಪ್ಪ ಆಲ್ಕೋಡ್ ಮಾತನಾಡಿ,‘ಜೆಡಿಎಸ್ ಅಧಿಕಾರದಲ್ಲಿದ್ದಾಗ ಜಾರಿ ಮಾಡಿದ್ದ ಭಾಗ್ಯಜ್ಯೋತಿಯನ್ನೇ ಕಾಂಗ್ರೆಸ್ ಗೃಹಜ್ಯೋತಿ ಮಾಡಿ ಹಳೆ ಬಾಟಲಿಗೆ ಹೊಸ ಸಾರಾಯಿ ಹಾಕಿದೆ. ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ರಾಜ್ಯದ ಅಭಿವೃದ್ಧಿ ನಿಂತಿದೆ. ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಜನರನ್ನು ಹಾಳು ಮಾಡುತ್ತಿದೆ’ ಎಂದರು.

ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳಿಗೆ ಮತ ಹಾಕಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಜೆಡಿಎಸ್ ರಾಜ್ಯ ಘಟಕದ ಕಾರ್ಯದರ್ಶಿ ಅನೀಲಕುಮಾರ, ನಗರಸಭೆ ಸದಸ್ಯ ಚಂದ್ರಶೇಖರ ಮೈಲಾರ, ಮುಖಂಡರಾದ ಅಶೋಕಗೌಡ ಗದ್ರಟಗಿ, ಅಲ್ಲಮಪ್ರಭು ಪೂಜಾರ, ಎಸ್.ಪಿ.ಟೈಲರ್, ಸಣ್ಣ ವೀರಭದ್ರಪ್ಪ ಕುರಕುಂದಿ, ಸುಮಿತ್ ತಡಕಲ್, ನಿರುಪಾದಿ ನಾಗಲಾಪುರ ಹಾಗೂ ಸೈಯದ್ ಆಸೀಫ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT