ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಿತ್ಯ, ಸಂಸ್ಕೃತಿಯಿಂದ ದೇಶ ಶ್ರೀಮಂತ

ಕರ್ನಾಟಕ ರಾಜ್ಯೋತ್ಸವದಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ
Last Updated 1 ನವೆಂಬರ್ 2020, 11:16 IST
ಅಕ್ಷರ ಗಾತ್ರ

ರಾಯಚೂರು: ಯಾವುದೇ ದೇಶದ ಶ್ರೀಮಂತಿಕೆಯನ್ನು ಅಳೆಯುವುದಕ್ಕೆ ಜಿಡಿಪಿ ಮಾತ್ರ ಮಾನದಂಡ ಆಗಿರುವುದಿಲ್ಲ. ಆ ದೇಶದಲ್ಲಿನ ಕಲೆ, ಸಾಹಿತ್ಯ, ಸಂಸ್ಕೃತಿ ಗಟ್ಟಿಯಾಗಿರಬೇಕು. ಈ ನಿಟ್ಟಿನಲ್ಲಿ ನಮ್ಮ ದೇಶ ಸಾಹಿತ್ಯ, ಸಂಸ್ಕೃತಿಯಿಂದ ಶ್ರೀಮಂತವಾಗಿದೆ ಎಂದು ಜಿಲ್ಲಾ ಉಸ್ತುವರೂ ಆಗಿರುವ ಉಪಮುಖ್ಯಮಂತ್ರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.

ನಗರದ ಜಿಲ್ಲಾ ಪೊಲೀಸ್‌ ಮೈದಾನದಲ್ಲಿ ಭಾನುವಾರ ನಡೆದ 65ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

‘ಸಂಸ್ಕೃತಿ, ಮಾನವೀಯತೆ, ಉದಾತ್ತ ಗುಣಗಳ ಕೊರತೆಯಾಗಿ ಯಾವುದೇ ದೇಶದ ಸಾರ್ವಜನಿಕರ ಬದುಕಿನಲ್ಲಿ ಖಿನ್ನತೆ ಹೆಚ್ಚಾಗುತ್ತಿದೆ, ಮಾನವೀಯ ಸಂಬಂಧ ಕಡಿಮೆಯಾಗುತ್ತಿದೆ ಎಂಬುದನ್ನು ಮನಃಶಾಸ್ತ್ರಜ್ಞರು ಸಂಶೋಧಿಸಿದ್ದಾರೆ. ಆದರೆ ನಾವು ಸುದೈವಿಗಳು. ನಮ್ಮ ರಾಷ್ಟ್ರವು ಸಂಸ್ಕೃತಿ ಮತ್ತು ಕಲೆಗಳಲ್ಲಿ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಬದುಕಿನಲ್ಲಿ ಉತ್ತಮ ಸಂಸ್ಕೃತೊ ಮೈಗೂಡಿಸಿಕೊಂಡರೆ ನಮ್ಮ ವ್ಯಕ್ತಿತ್ವಕ್ಕೆ ಮತ್ತಷ್ಟು ಮಹತ್ವ ಸಿಗುವುದು ಸಾಧ್ಯ. ನಮ್ಮ ಸಂಸ್ಕೃತಿ ಗಟ್ಟಿಯಾಗಿರುವುದರಿಂದಲೇ ಮಾನವೀಯ ಸಂಬಂಧಗಳೂ ಅತ್ಯಂತ ಜೀವಂತವಾಗಿವೆ ಎಂದು ತಿಳಿಸಿದರು.

ಕನ್ನಡ ಭಾಷೆ ಸಮೃದ್ಧವಾಗಿದೆ ಎಂದು ಕೈಕಟ್ಟಿ ಕುಳಿತುಕೊಳ್ಳಬಾರದು. ಇಂಗ್ಲಿಷ್ ಸೇರಿದಂತೆ ಕೆಲವು ಭಾಷೆಗಳ ಅತಿಯಾದ ದಾಳಿ ಕನ್ನಡದ ಮೇಲಾಗುತ್ತಿದೆ. ಆಧುನಿಕ ಶಿಕ್ಷಣ ಕ್ರಮದಿಂದ ಕನ್ನಡ ಕಲಿಕೆಯ ಬಗ್ಗೆ ಯುವಜನಾಂಗದಲ್ಲಿ ಮತ್ತು ಮಕ್ಕಳಲ್ಲಿ ಇನ್ನಷ್ಟು ಪ್ರೀತಿ ಮತ್ತು ಕಾಳಜಿ ಮೂಡುವಂತೆ ನಾವು ಪಾಲಕರು ಗಮನಹರಿಸಬೇಕು. ಕನ್ನಡವನ್ನು ಹೆಚ್ಚೆಚ್ಚು ಜನರು ಮಾತನಾಡಿದಾಗ ಮತ್ತು ಬಳಸಿದಾಗ ಮಾತ್ರ ಕನ್ನಡದ ಬೆಳವಣಿಗೆ ಸಾಧ್ಯ. ಕನ್ನಡದ ಲಿಪಿಯನ್ನು ಮುಂದಿನ ಜನಾಂಗಕ್ಕೂ ಬರೆಯಲು ಕಲಿಸಿದಾಗ ಮಾತ್ರ ಈ ಭಾಷೆಯನ್ನು ಜತನದಿಂದ ಉಳಿಸಿಕೊಳ್ಳಲು ಸಾಧ್ಯವಾಗುತ್ತದ ಎಂದು ಹೇಳಿದರು.

ಹರಿದು ಹಂಚಿ ಹೋಗಿದ್ದ ಕರ್ನಾಟಕವನ್ನು ಏಕೀಕರಣ ಚಳವಳಿ ಮೂಲಕ ಹಲವು ವರ್ಷಗಳವರೆಗೆ ನಿರಂತರ ಹೋರಾಟ ನಡೆಸಿದ ಪ್ರತಿಫಲವಾಗಿ 1956ರ ನ.1ರಂದು ನಮ್ಮ ರಾಜ್ಯ ಉದಯವಾಯಿತು. ಇದಕ್ಕಾಗಿ ಹೋರಾಡಿದ ಅನೇಕ ಮಹನೀಯರನ್ನು, ಸಾಹಿತಿಗಳನ್ನು, ಸಂಘ ಸಂಸ್ಥೆಗಳನ್ನು, ಪತ್ರಿಕೋದ್ಯಮಿಗಳನ್ನು ಸ್ಮರಿಸುವುದು ಎಲ್ಲರ ಆದ್ಯ ಕರ್ತವ್ಯ ಎಂದು ಅಭಿಪ್ರಾಯಪಟ್ಟರು.

ಭಾವೈಕ್ಯತೆಯ ಸ್ವರ್ಗವಾಗಿರುವ ಕರ್ನಾಟಕದಲ್ಲಿ ಎಲ್ಲರೂ ಸಾಮರಸ್ಯದಿಂದ ಬದುಕುತ್ತಿದ್ದಾರೆ. ಸರ್ವಧರ್ಮಗಳ ಸಮನ್ವಯತೆ, ಸೌಹಾರ್ದತೆ ಇಲ್ಲಿ ಮನೆಮಾಡಿವೆ. ದೇಶಕ್ಕೆ ನಮ್ಮ ಕನ್ನಡ ಸಾಹಿತ್ಯದ ಕೊಡುಗೆ ಅಪಾರವಾಗಿದೆ. ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಬಂದಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.

ಜಿಲ್ಲೆಯ ವಿವಿಧ ಇಲಾಖೆಗಳ ಕೊರೊನಾ ವಾರಿಯರ್ಸ್‍ಗಳನ್ನು ಸನ್ಮಾನಿಸಲಾಯಿತು. ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕ ದದ್ದಲ್ ಬಸವನಗೌಡ, ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಚ್. ದುರುಗೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT