ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಮಗಾರಿ ಮುಗಿಸದಿದ್ದರೆ ಅನುದಾನವಿಲ್ಲ: ಕೆಕೆಆರ್‌ಡಿಬಿ ಕಾರ್ಯದರ್ಶಿ ಸುಭೋದ್‌ ಯಾದವ

ಪ್ರಗತಿ ಪರಿಶೀಲನೆ ಸಭೆ
Last Updated 7 ಜನವರಿ 2020, 15:25 IST
ಅಕ್ಷರ ಗಾತ್ರ

ರಾಯಚೂರು: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದರೆ, ಬೇರೆ ಯಾವುದೇ ಕಾಮಗಾರಿಗೆ ಅನುದಾನ ನೀಡುವುದಿಲ್ಲ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದಿ ಮಂಡಳಿಯ ಕಾರ್ಯದರ್ಶಿ ಸುಬೋದ್ ಯಾದವ್ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

2018–19ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಅನುದಾನ ಬಿಡುಗಡೆಯಾಗಿದ್ದು, ಆಯಾ ಇಲಾಖೆಯ ಅಧಿಕಾರಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು. ನಿಗಧಿತ ಅವಧಿಯೊಳಗೆ ಟೆಂಡರ್ ಕರೆಯಬೇಕು ಮತ್ತು ಟೆಂಡರ್ ತೆರೆದು ಗುತ್ತೆದಾರರಿಗೆ ಕಾಮಗಾರಿಯನ್ನು ನಿರ್ವಹಿಸುವ ಜವಾಬ್ದಾರಿ ನೀಡಬೇಕು ಎಂದರು.

ರಾಯಚೂರು ನಗರದ ವಾರ್ಡ್‌ ಸಂಖ್ಯೆ 11ರಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆವರಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಕೊಳವೆಬಾವಿ ನಿರ್ಮಾಣ ಕಾಮಗಾರಿಗೆ ಟೆಂಡರ್ ಕರೆದಿಲ್ಲ. ಈ ರೀತಿ ನಿರ್ಲಕ್ಷ್ಯ ವಹಿಸಿದರೇ ಹೇಗೆ? ಕೆಲಸ ಮಾಡುವ ಸಾಮರ್ಥ್ಯ ಹೊಂದಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

2018–19ನೇ ಸಾಲಿನಲ್ಲಿ ಪಿಆರ್‌ಇಡಿ ಇಲಾಖೆ ವತಿಯಿಂದ 27 ಕಾಮಗಾರಿಗಳ ಪೈಕಿ ಕೇವಲ ಎಂಟು ಕಾಮಗಾರಿ ಪೂರ್ಣಗೊಳಿಸಲಾಗಿದೆ. 19 ಕಾಮಗಾರಿಗಳಿಗೆ ಇದುವರೆಗೂ ಟೆಂಡರ್ ಕರೆಯುವಲ್ಲಿ ನಿರ್ಲಕ್ಷಿಸಲಾಗಿದೆ ಎಂದು ಅಧಿಕಾರಿಗಳಾದ ಮಾರುತಿ, ಫಯಾಜ್‌ ಅವರನ್ನು ಆಯುಕ್ತರು ತರಾಟೆಗೆ ತೆಗೆದುಕೊಂಡರು.

2018–19ನೇ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ 19 ಕಾಮಗಾರಿಗಳ ಪೈಕಿ ಕೇವಲ ಎರಡು ಕಾಮಗಾರಿ ಪೂರ್ಣಗೊಳಿಸಿ 12 ಕಾಮಗಾರಿಗಳಿಗೆ ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಿದ್ದ ಪಿಡಬ್ಲ್ಯೂಡಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಹನುಮಂತು ಅವರಿಗೆ ಸೂಚನೆಗಳನ್ನು ನೀಡಿದರು. ಸಿಂಧನೂರು ತಾಲ್ಲೂಕಿನ ಪಶು ಆಸ್ಪತ್ರೆ ಕಟ್ಟಡ ನಿರ್ಮಿಸಲು ಟೆಂಡರ್ ಪ್ರಕ್ರಿಯೆ ನಡೆಸಿಲ್ಲ ಎಂದು ಪ್ರಶ್ನಿಸಿದಾಗ, ಇದಕ್ಕೆ ಉತ್ತರಿಸಿದ ಅವರು ಕಾಮಗಾರಿಗೆ ₹3ಕೋಟಿ ಅನುದಾನದ ಅವಶ್ಯಕತೆ ಇದೆ ಎಂದು ಸಭೆಗೆ ತಿಳಿಸಿದರು.

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜನವರಿ 15 ರೊಳಗೆ ಟೆಂಡರ್ ಪ್ರಕ್ರಿಯೆ ನಡೆಸಿ ಕೆಲಸ ಪ್ರಾರಂಭಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ಯಾವುದೇ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಲಾಗುವುದಿಲ್ಲ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಜಿ. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT