ರಾಯಚೂರು: ಕೋಲ್ಕತ್ತದ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಖಂಡಿಸಿ ಆರೋಪಿಗಳ ಮೇಲೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್‌ನ ಜಿಲ್ಲಾ ಸಮಿತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು.
ವೈದ್ಯಕೀಯ ವಿದ್ಯಾರ್ಥಿ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿದೆ. ರಾಷ್ಟ್ರಪತಿ ಮಧ್ಯೆ ಪ್ರವೇಶಿಸಿ ಸಂತ್ರಸ್ತೆ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಜನರ ಜೀವ ರಕ್ಷಿಸಬೇಕಾದ ವೈದ್ಯರಿಗೇ ರಕ್ಷಣೆ ಇಲ್ಲದಂತಾಗಿರುವುದು ದುರಾದೃಷ್ಟಕರ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಘಟನೆ ಖಂಡಿಸಿ ಕಿರಿಯ ವೈದ್ಯರು ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ಮಾಡುತ್ತಿರುವುದು ನ್ಯಾಯ ಸಮ್ಮತವಾಗಿದೆ. ದೇಶದ ಹಲವೆಡೆ ಮಹಿಳೆಯರ ಮೇಲೆ ಅತ್ಯಾಚಾರ, ಕೊಲೆ ಹಾಗೂ ಅಪರಾಧಗಳು ನಡೆಯುತ್ತಿದ್ದು, ಕೆಲಸದ ಸ್ಥಳಗಳಲ್ಲಿ ಮಹಿಳೆಯ ಸುರಕ್ಷತೆಯ ಬಗ್ಗೆ ಜನರು ಚರ್ಚಿಸುವಂತಾಗಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವ ಜಾನೇಕಲ್ ಹೇಳಿದರು.
ನ್ಯಾಯಕ್ಕಾಗಿ ಪ್ರತಿಭಟಿಸುತ್ತಿದ್ದವರ ಮೇಲೆ ಕಿಡಿಗೇಡಿಗಳು ದಾಳಿ ಮಾಡಿದ್ದಾರೆ. ಸಾಕ್ಷ ನಾಶಪಡಿಸುವ ಮತ್ತು ತನಿಖೆಗೆ ಅಡ್ಡಿಪಡಿಸುವ ಉದ್ದೇಶದಿಂದ ಪ್ರತಿಭಟನಾಕಾರರನ್ನು ಬೆದರಿಸಲಾಗುತ್ತಿದೆ. ಆಸ್ಪತ್ರೆಯ ಅಧಿಕಾರಿಗಳು ಪರೋಕ್ಷವಾಗಿ ಆರೋಪಿಗಳನ್ನು ರಕ್ಷಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಸಾಹಿತಿಗಳಾದ ಆಂಜನೇಯ ಜಾಲಿಬೆಂಚಿ, ಎಚ್.ಎಚ್.ಮ್ಯಾದರ್, ವೀರಭದ್ರಯ್ಯ ಸ್ವಾಮಿ, ರಾಜಕುಮಾರ, ಎಚ್.ಬಿ.ಘಂಟೆ, ರಾಮಚಂದ್ರಪ್ಪ, ಎಐಡಿವೈಒ ಜಿಲ್ಲಾ ಘಟಕದ ಕಾರ್ಯದರ್ಶಿ ವಿನೋದಕುಮಾರ, ಸದಸ್ಯರಾದ ಮೌನೇಶ, ಜಾಫರ್, ರಾಬಿನ್ ಸನ್, ಮಹೇಶ, ವೆಂಕಟೇಶ, ಸತೀಶ, ಭೀಮು ಸೇರಿದಂತೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.