ಮಂಗಳವಾರ, ಅಕ್ಟೋಬರ್ 26, 2021
23 °C
ಪಶುಸಂಗೋಪನೆ ಸಚಿವ ಪ್ರಭು ಬಿ. ಚವಾಣ್ ಸೂಚನೆ

ಗೋಹತ್ಯೆ ನಿಷೇಧದ ಜಾಗೃತಿ ಮೂಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ದೇಶದ ಆರೋಗ್ಯ, ರೈತರ ಹಿತ, ಸುಸ್ಥಿರ ಕೃಷಿ ದೃಷ್ಟಿಯಿಂದ ದೇಶಿ ಗೋವುಗಳ ಸಾಕಣೆ, ಗೋ ಆಧಾರಿತ ಕೃಷಿ ಕಾಯಕವು ತುಂಬಾ ಮುಖ್ಯವಾಗಿದೆ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರಬೇಕು. ಅಲ್ಲದೆ ಕಾನೂನಿನ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಬೇಕು ಎಂದು ಪಶುಸಂಗೋಪನೆ ಸಚಿವ ಪ್ರಭು ಬಿ. ಚವಾಣ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಪಶುಸಂಗೋಪನಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಆಕ್ರಮವಾಗಿ ಗೋಹತ್ಯೆ ಮಾಡುವುದು, ಪ್ರಾಣಿ ಹಿಂಸೆ ಮಾಡುವುದು, ಅತಿಭಾರ ಹೇರುವುದು ಹಾಗೂ ಸಮಯಕ್ಕೆ ಸರಿಯಾಗಿ ನೀರು, ಆಹಾರ, ನೆಲೆ ಸಕಾಲದಲ್ಲಿ ನೀಡದೆ ಪ್ರಾಣಿಯನ್ನು ಚಿತ್ರಹಿಂಸೆ ಮಾಡುವವರು ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಗೋವುಗಳ ರಕ್ಷಣೆ ಮಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಚಿವರು ನಿರ್ದೇಶನ ನೀಡಿದರು.

ಪಶುಸಂಗೋಪನಾ ಇಲಾಖೆಯಡಿ ದೊರೆಯುವ ಸರ್ಕಾರಿ ಸೌಲಭ್ಯಗಳನ್ನು ನೇರವಾಗಿ ಸಂಬಂಧಿಸಿದ ಫಲಾನುಭವಿಗಳಿಗೆ ತಲುಪಿಸಬೇಕು. ಅಲ್ಲದೆ ಜಿಲ್ಲೆಯ ಗ್ರಾಮೀಣ ಭಾಗದ ರೈತರ ಸಮಸ್ಯೆಗಳಿಗೆ ಅಧಿಕಾರಿಗಳು ಸರಿಯಾಗಿ ಸ್ಪಂದಿಸಿ ಪ್ರಮಾಣಿಕವಾಗಿ ಕಾರ್ಯನಿರ್ವಹಣೆ ಮಾಡಬೇಕು ಎಂದು ಸೂಚಿಸಿದರು.

ಗೋವುಗಳಿಗೆ ನೀಡುವ ಔಷಧಿಯ ಗುಣಮಟ್ಟವನ್ನು ಕಡ್ಡಾಯವಾಗಿ ಪರಿಶೀಲಿಸಿದ ನಂತರ ಗೋವುಗಳಿಗೆ ಔಷಧಿಯನ್ನು ನೀಡಬೇಕು. ಜಿಲ್ಲೆಯ ಎಲ್ಲಾ ಗೋಶಾಲೆಗಳಲ್ಲಿ ನೀರು, ಮೇವು ಸೇರಿದಂತೆ ಎಲ್ಲಾ ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.
ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಸರ್ಕಾರಿ ಗೋಶಾಲೆಗಳ ಸ್ಥಾಪನೆಗಾಗಿ ಈಗಾಗಲೇ ಸರ್ಕಾರದ ಮಟ್ಟದಲ್ಲಿ ಕ್ರಮಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿಯೂ ಸಹ ಸರ್ಕಾರಿ ಗೋಶಾಲೆ ಸ್ಥಾಪನೆಗೆ ನಿರ್ದಿಷ್ಟ ಭೂಮಿಯನ್ನು ಗುರುತಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಚೇರಿಗೆ ಸಮಯಕ್ಕೆ ಸರಿಯಾಗಿ ಬರಬೇಕು. ಈ ಕುರಿತು ಪಶು ಇಲಾಖೆಯ ಉಪನಿರ್ದೇಶಕರು ಗಮನಹರಿಸಿ ಕಚೇರಿಯ ಸಮಯಕ್ಕೆ ಬಾರದ ಅಧಿಕಾರಿಗಳು ಅಥವಾ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಶಾಸಕ ಡಾ.ಶಿವರಾಜ ಪಾಟೀಲ, ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ್, ಪಶುಸಂಗೋಪನೆ ಇಲಾಖೆಯ ಉಪ ನಿರ್ದೇಶಕ ಡಾ.ಶಿವಣ್ಣ, ಉಪವಿಭಾಗಾಧಿಕಾರಿಗಳಾದ ಸಂತೋಷ ಕಾಮಗೌಡ, ರಾಹುಲ್ ಹಾಗೂ ಪಶುಸಂಗೋಪನೆ ಇಲಾಖೆಯ ತಾಲ್ಲೂಕು ಅಧಿಕಾರಿಗಳು ಸಭೆಯಲ್ಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.