ಮಾನ್ವಿ: ತಾಲ್ಲೂಕಿನ ಕಪಗಲ್ ಗ್ರಾಮದ ಸಮೀಪ ಶಾಲಾ ಬಸ್ ಮತ್ತು ಸಾರಿಗೆ ಸಂಸ್ಥೆಯ ಬಸ್ ಪರಸ್ಪರ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಕ್ಕಳು ಸಾವಿಗೀಡಾದ ಘಟನೆಯ ಹಿನ್ನೆಲೆಯಲ್ಲಿ ಎಸ್ಎಚ್ ನಂ.23 ರಾಜ್ಯ ಹೆದ್ದಾರಿಯ ದುಸ್ಥಿತಿ, ನಿರ್ವಹಣೆಗೆ ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.
ಎಸ್ಎಚ್ ನಂ.23 ರಾಜ್ಯ ಹೆದ್ದಾರಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹೆದ್ದಾರಿ ಹಸ್ತಾಂತರದಲ್ಲಿ ಲೋಕೋಪಯೋಗಿ ಇಲಾಖೆ ಹಾಗೂ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧಿಕಾರಿಗಳು ಸರ್ಕಾರದ ನಿಯಮ ಉಲ್ಲಂಘಿಸಿರುವ ಆರೋಪ ಕೇಳಿಬಂದಿದೆ.
ಕಲ್ಮಲಾ ಕ್ರಾಸ್ (ಸಾತ್ ಮೈಲ್)ನಿಂದ ಮಾನ್ವಿ ಪಟ್ಟಣದ ಮೂಲಕ ಹಾದು ಹೋಗಿರುವ ಎಸ್ಎಚ್ ನಂ.23 ರಾಜ್ಯ ಹೆದ್ದಾರಿಯುದ್ದಕ್ಕೂ ತಗ್ಗು ಗುಂಡಿಗಳು ಹೆಚ್ಚಾಗಿದ್ದು, ವಾಹನಗಳ ಅಪಘಾತಕ್ಕೆ ಮೂಲ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲೋಕೋಪಯೋಗಿ ಇಲಾಖೆಯಿಂದ ಕೆಲ ತಿಂಗಳ ಹಿಂದೆ ₹9 ಕೋಟಿ ವೆಚ್ಚದಲ್ಲಿ ರಾಜ್ಯ ಹೆದ್ದಾರಿಯಲ್ಲಿನ ಗುಂಡಿಗಳನ್ನು ಮುಚ್ಚುವ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿತ್ತು. ಆದರೆ ಬೇಕಾಬಿಟ್ಟಿಯಾಗಿ ಕಾಮಗಾರಿ ನಿರ್ವಹಿಸಿ ಅನುದಾನ ದುರ್ಬಳಕೆ ಮಾಡಿಕೊಂಡಿರುವ ಬಲವಾದ ಆರೋಪಗಳು ಕೇಳಿಬರುತ್ತಿವೆ.
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ(ಕೆಆರ್‌ಡಿಸಿಎಲ್)ದ ವತಿಯಿಂದ ಸುಮಾರು ₹1,600 ಕೋಟಿ ವೆಚ್ಚದಲ್ಲಿ ಕಲ್ಮಲಾ ಕ್ರಾಸ್‌ನಿಂದ ಸಿಂಧನೂರು ವರೆಗೆ 78 ಕಿ.ಮೀ ಉದ್ದದ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ಈಚೆಗೆ ಆರಂಭಿಸಲಾಗಿದೆ. ಈ ಕಾಮಗಾರಿ ಆರಂಭಕ್ಕೆ ಮೊದಲು ಆಗಸ್ಟ್ ತಿಂಗಳಿನಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮಕ್ಕೆ ರಾಜ್ಯ ಹೆದ್ದಾರಿಯನ್ನು ಹಸ್ತಾಂತರಿಸಲಾಗಿದೆ.
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧಿಕಾರಿಗಳು ರಾಜ್ಯ ಹೆದ್ದಾರಿಯನ್ನು ತಮ್ಮ ಸುಪರ್ದಿಗೆ ತೆಗೆದುಕೊಳ್ಳುವಾಗ ರಸ್ತೆಯ ಗುಣಮಟ್ಟ ಪರಿಶೀಲನೆ, ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ಆರಂಭಕ್ಕೂ ಮೊದಲು ತಾತ್ಕಾಲಿಕವಾಗಿ ಹೆದ್ದಾರಿ ಮಧ್ಯದ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಿಲ್ಲ. ಹೆದ್ದಾರಿ ಹಸ್ತಾಂತರ ಪ್ರಕ್ರಿಯೆಗೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆ ಹಾಗೂ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧಿಕಾರಿಗಳು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಜನಶಕ್ತಿ ಕೇಂದ್ರದ ಅಧ್ಯಕ್ಷ ಪ್ರಭುರಾಜ ಕೊಡ್ಲಿ ಆರೋಪಿಸುತ್ತಾರೆ.
‘ಮೂರು ತಿಂಗಳ ಹಿಂದೆ ಹೆದ್ದಾರಿಯಲ್ಲಿನ ತಗ್ಗು ಗುಂಡಿಗಳನ್ನು ಮುಚ್ಚುವ ಕಾಮಗಾರಿ ಕೈಗೊಳ್ಳಲಾಗಿತ್ತು. ನಂತರ ಆಗಸ್ಟ್ ತಿಂಗಳಲ್ಲಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮಕ್ಕೆ ಹಸ್ತಾಂತರಿಸಲಾಗಿದೆ’ ಎಂದು ಲೋಕೋಪಯೋಗಿ ಇಲಾಖೆಯ ಎಇಇ ಸ್ಯಾಮುವೆಲ್ಲಪ್ಪ ತಿಳಿಸಿದ್ದಾರೆ.
ಮಾನ್ವಿ ಸಮೀಪ ತಗ್ಗು ಗುಂಡಿಗಳಿಂದ ಹದಗೆಟ್ಟಿರುವ ರಾಜ್ಯ ಹೆದ್ದಾರಿ
‘ಹೆದ್ದಾರಿ ನಿರ್ವಹಣೆಗೆ ನಿರ್ಲಕ್ಷ್ಯ ವಹಿಸಿದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಜನಸೇವಾ ಫೌಂಡೇಶನ್ ಅಧ್ಯಕ್ಷ ಜಾವೀದ್ ಖಾನ್ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ, ಜಿಲ್ಲಾಧಿಕಾರಿ ನಿತೀಶ್ ಕೆ, ಶಾಸಕರಾದ ಬಸನಗೌಡ ದದ್ದಲ, ಜಿ.ಹಂಪಯ್ಯ ನಾಯಕ, ಎ.ವಸಂತಕುಮಾರ ಹಾಗೂ ಹಂಪನಗೌಡ ಬಾದರ್ಲಿ, ಯುವ ಮುಖಂಡ ರವಿ ಬೋಸರಾಜು, ಮಾಜಿ ಶಾಸಕ ಬಸನಗೌಡ ಬ್ಯಾಗವಾಟ, ಜೆ.ಸುಧಾಕರ ಮತ್ತಿತರರು ಶಾಲಾ ಬಸ್ ಮತ್ತು ಸಾರಿಗೆ ಸಂಸ್ಥೆಯ ಬಸ್ ನಡುವೆ ಅಪಘಾತ ಸಂಭವಿಸಿದ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಹೆದ್ದಾರಿಯ ಸ್ಥಿತಿಗತಿ ಕುರಿತು ಪರಿಶೀಲಿಸಿದರು.
ಸಚಿವರು, ಶಾಸಕರು ಹಾಗೂ ಅಧಿಕಾರಿಗಳು ಮೊದಲೇ ಹದಗೆಟ್ಟ ಹೆದ್ದಾರಿ ವೀಕ್ಷಣೆ ಮಾಡಿ ದುರಸ್ತಿ ಪಡಿಸಿದ್ದರೆ ಮಕ್ಕಳ ಜೀವವಾದರೂ ಉಳಿಯುತ್ತಿತ್ತು ಎಂದು ಸಾರ್ವಜನಿಕರು ಜರಿದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.