ಗುರುವಾರ , ಜನವರಿ 27, 2022
27 °C

ಸೌಲಭ್ಯ ತಲುಪಿಸಲು ಪ್ರಾಮಾಣಿಕ ಪ್ರಯತ್ನ: ಶಾಸಕ ಡಾ.ಶಿವರಾಜ ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಸರ್ಕಾರದಿಂದ ಬರುವ ವಿವಿಧ ಆಶ್ರಯ ಯೋಜನೆ, ಪಿಂಚಣಿ ಯೋಜನೆ ಸೇರಿದಂತೆ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ತಲುಪಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಲಾಗುವುದು ಎಂದು ಶಾಸಕ ಡಾ.ಶಿವರಾಜ ಪಾಟೀಲ ಹೇಳಿದರು.

ನಗರದ ಅಶಾಪೂರ ರಸ್ತೆಯ ಕೆ.ಕೆ.ರೆಡ್ಡಿಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಆಡಳಿತ ಹಾಗೂ ನಗರಸಭೆಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಶಾಸಕರ ನಡೆ-ಜನ ಸಂಪರ್ಕದಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜನರು ಸರ್ಕಾರಿ ಕಚೇರಿಗಳಿಗೆ ವಿನಾಕಾರಣ ಅಲೆಯುವುದನ್ನು ತಪ್ಪಿಸಿ, ಒಂದೇ ಸೂರಿನಡಿ ಎಲ್ಲಾ ಕೆಲಸಗಳನ್ನು ಮಾಡಿಕೊಡುವ ಸಲುವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು. ಸರ್ಕಾರವೇ ನಿಮ್ಮ ಮನೆ ಬಾಗಿಲಿಗೆ ಬಂದು ನಿಮ್ಮ ಅಹವಾಲು ಸ್ವೀಕಾರ ಮಾಡುತ್ತಿದ್ದು, ಸಾರ್ವಜನಿಕರು ಪಕ್ಷಭೇದ ಮರೆತು ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳು ನೇರವಾಗಿ ಪಡೆಯಬಹುದಾಗಿದೆ ಎಂದರು.

ರಾಯಚೂರು ನಗರ ಕ್ಷೇತ್ರದ ವ್ಯಾಪ್ತಿಯಲ್ಲಿ ಗುಡಿಸಲು ಮುಕ್ತ ನಗರ ಮಾಡುವ ಕನಸು ಹೊಂದಿದ್ದು, ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ಮನೆಗಳ ಜೊತೆಗೆ ಹಕ್ಕುಪತ್ರವನ್ನು ನೀಡಲಾಗುತ್ತದೆ. ಕೋವಿಡ್-19ರ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಕೋವಿಡ್ ಲಸಿಕೆ ಪಡೆಯುವ ಮೂಲಕ ಕೋವಿಡ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.

ತಹಶೀಲ್ದಾರ್ ಡಾ.ಹಂಪಣ್ಣ ಸಜ್ಜನ್‌ ಮಾತನಾಡಿ, ಸರ್ಕಾರವು ಸಾರ್ವಜನಿಕರಿಗಾಗಿ ಆನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸರಿಯಾಗಿ ಬಳಕೆ ಮಾಡಿಕೊಂಡು ಆರ್ಥಿಕ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಹೇಳಿದರು.

ವಾರ್ಡ್ ನಿವಾಸಿ ಗರ್ಭಿಣಿರಿಗೆ ಕಿಟ್ ಹಾಗೂ ಸರ್ಕಾರದವಿವಿಧ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ನಗರಸಭೆಯ ಪೌರಾಯುಕ್ತ ಕೆ.ಮುನಿಸ್ವಾಮಿ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಶರಣಪ್ಪ, ಭಾರತೀಯ ರೆಡ್‌ಕ್ರಾಸ್ ಶಿಕ್ಷಣ ಸಮಿತಿಯ ಜಿಲ್ಲಾ ಸಂಚಾಲಕ ಡಾ.ದಂಡಪ್ಪ ಬಿರಾದಾರ, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಜನಪ್ರತಿನಿಧಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು