ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನಿಂದ ಗ್ರಾಮೀಣ ಅಭಿವೃದ್ಧಿ ಸಾಧ್ಯ: ಎನ್.ಎಸ್.ಬೋಸರಾಜು

ವಿಧಾನ ಪರಿಷತ್ ಚುನಾವಣೆ ಪ್ರಚಾರ ಸಭೆ
Last Updated 26 ನವೆಂಬರ್ 2021, 14:31 IST
ಅಕ್ಷರ ಗಾತ್ರ

ಮಾನ್ವಿ: ‘ದೇಶದಲ್ಲಿ ಪಂಚಾಯತರಾಜ್ ವ್ಯವಸ್ಥೆ ಜಾರಿಗೊಳಿಸಿದ ಕಾಂಗ್ರೆಸ್ ಪಕ್ಷದಿಂದ ಮಾತ್ರ ಗ್ರಾಮೀಣ ಭಾಗದ ಅಭಿವೃದ್ಧಿ ಸಾಧ್ಯ’ ಎಂದು ಎಐಸಿಸಿ ಕಾರ್ಯದರ್ಶಿ ಎನ್.ಎಸ್.ಬೋಸರಾಜು ಹೇಳಿದರು.

ಶುಕ್ರವಾರ ಪಟ್ಟಣದಲ್ಲಿ ಮಾನ್ವಿ ಹಾಗೂ ಸಿರವಾರ ಬ್ಲಾಕ್ ಕಾಂಗ್ರೆಸ್ ಘಟಕಗಳ ವತಿಯಿಂದ ವಿಧಾನ ಪರಿಷತ್ ಚುನಾವಣೆಯ ಅಂಗವಾಗಿ ಆಯೋಜಿಸಿದ್ದ ಪ್ರಚಾರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರಧಾನಿ ಮೋದಿ ಮತ್ತು ಅವರ ಶಿಷ್ಯಂದಿರು ಸುಳ್ಳಿನ ಸರದಾರರು. ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಬಿಜೆಪಿ ಮುಖಂಡರು ನೀಡುವ ಸುಳ್ಳು ಭರವಸೆಗಳನ್ನು ನಂಬದೆ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಬೇಕು’ ಎಂದು ಅವರು ಮನವಿ ಮಾಡಿದರು.

ಮಾಜಿ ಸಚಿವ ಹಾಗೂ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಿವರಾಜ ತಂಗಡಿ ಮಾತನಾಡಿ, ‘ ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಜನವಿರೋಧಿ ನೀತಿಗಳನ್ನು ಜಾರಿಗೊಳಿಸಿವೆ. ಇಂಧನ ಬೆಲೆ ಹಾಗೂ ಅಗತ್ಯ ವಸ್ತುಗಳ ದರ ಹೆಚ್ಚಿಸಿದ್ದ ಬಿಜೆಪಿ ಸರ್ಕಾರಕ್ಕೆ ಜನತೆ ಉಪಚುನಾವಣೆಗಳಲ್ಲಿ ತಕ್ಕಪಾಠ ಕಲಿಸಿದ್ದಾರೆ. ಕಾರಣ ಈಗ ಇಂಧನ ದರ ಇಳಿಸಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಕಡಿಮೆಯಾಗಲು ಚುನಾವಣೆಯಲ್ಲಿ ಮತದಾರರು ಬಿಜೆಪಿಯನ್ನು ಸೋಲಿಸಬೇಕು’ ಎಂದರು.

ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿ ಶರಣಗೌಡ ಬಯ್ಯಾಪುರ ಮಾತನಾಡಿ, ‘ಕಾಂಗ್ರೆಸ್ ಪಕ್ಷದ ವರಿಷ್ಠರು ನನ್ನ ಮೇಲೆ ವಿಶ್ವಾಸವಿಟ್ಟು ಪಕ್ಷದ ಟಿಕೆಟ್ ನೀಡಿದ್ದಾರೆ. ಎರಡು ಜಿಲ್ಲೆಗಳ ಗ್ರಾಮ ಪಂಚಾಯಿತಿಗಳು ಹಾಗೂ ಇತರ ಸ್ಥಳೀಯ ಸಂಸ್ಥೆಗಳ ಧ್ವನಿಯಾಗಿ ವಿಧಾನ ಪರಿಷತ್ತಿನಲ್ಲಿ ಕೆಲಸ ಮಾಡುವೆ. ಕಾರಣ ಸದಸ್ಯರು ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿ ಆಯ್ಕೆ ಮಾಡಬೇಕು’ ಎಂದು ಮನವಿ ಮಾಡಿದರು.

ಮಾಜಿ ಸಚಿವ ಬಸವರಾಜ ರಾಯರೆಡ್ಡಿ, ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ, ರಾಯಚೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ವಿ.ನಾಯಕ ಮಾತನಾಡಿದರು.

ಶಾಸಕರಾದ ಬಸನಗೌಡ ದದ್ದಲ ಹಾಗೂ ಡಿ.ಎಸ್.ಹೂಲಗೇರಿ, ಮಾಜಿ ಶಾಸಕರಾದ ಹಂಪನಗೌಡ ಬಾದರ್ಲಿ ಹಾಗೂ ಜಿ.ಹಂಪಯ್ಯ ನಾಯಕ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಮಾನ್ವಿ ಹಾಗೂ ಸಿರವಾರ ಕಾಂಗ್ರೆಸ್ ಘಟಕಗಳ ಪದಾಧಿಕಾರಿಗಳು ವೇದಿಕೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT