ಶನಿವಾರ, ಮೇ 28, 2022
31 °C
ಪರಿಷತ್ ಚುನಾವಣೆ: ಎರಡು ಜಿಲ್ಲೆಗಳಲ್ಲಿ 6,503 ಮತದಾರರು

ರಾಯಚೂರು ಜಿಲ್ಲೆಯಲ್ಲಿ ನೀತಿಸಂಹಿತೆ ಜಾರಿ: ಕೆ.ಆರ್.ದುರುಗೇಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಚುನಾವಣೆ ಘೋಷಣೆಯಾಗಿದ್ದು, ಸಾರ್ವತ್ರಿಕ ಚುನಾವಣೆ ರೀತಿಯಲ್ಲಿಯೇ ಮಾದರಿ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿಧಾನ ಪರಿಷತ್ ಚುನಾವಣಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನೀತಿ ಸಂಹಿತೆಯನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ಡಿಸೆಂಬರ್ 16ರ ವರೆಗೆ ಜಾರಿಯಲ್ಲಿರುತ್ತದೆ. ಮಾದರಿ ನೀತಿ ಸಂಹಿತೆ ಜನಪ್ರತಿನಿಧಿಗಳಿಗೆ ಮಾತ್ರವಲ್ಲದೆ ಅಧಿಕಾರಿಗಳು ಸೇರಿ ಪ್ರತಿಯೊಬ್ಬರಿಗೂ ಅನ್ವಯವಾಗುತ್ತದೆ. ನೀತಿ ಸಂಹಿತೆ ಉಲ್ಲಂಘಿಸದಂತೆ ಪ್ರತಿಯೊಬ್ಬರೂ ಕರ್ತವ್ಯ ನಿರ್ವಹಿಸಬೇಕು. ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸಲು ಅಧಿಕಾರಿಗಳ ತಂಡ ರಚಿಸಲಾಗುವುದು ಎಂದರು.

ನವೆಂಬರ್‌ 16 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿ ನವೆಂಬರ್‌ 23ರವರೆಗೆ ನಾಮಪತ್ರ ಸಲ್ಲಿಸಲು ಕೊನೆ ದಿನ. ನವೆಂಬರ್‌ 24ರಂದು ನಾಮಪತ್ರ ಪರಿಶೀಲನೆ, ನವೆಂಬರ್‌ 26ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆ ದಿನ. ಡಿಸೆಂಬರ್‌ 10ರಂದು ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಡಿಸೆಂಬರ್‌ 14ರಂದು ಮತಗಳ ಎಣಿಕೆ ನಡೆಯಲಿದ್ದು, ಡಿಸೆಂಬರ್‌ 16ರಂದು ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗಲಿದೆ ಎಂದು ಹೇಳಿದರು.

ಲೋಕಸಭೆ, ರಾಜ್ಯಸಭೆ, ವಿಧಾನಸಭೆ, ವಿಧಾನ ಪರಿಷತ್, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಸದಸ್ಯರು ಮತದಾನದ ಹಕ್ಕು ಹೊಂದಿರುತ್ತಾರೆ. ಮತದಾರರ ಪಟ್ಟಿಯ ಪರಿಶೀಲನೆ ಕಾರ್ಯ ಮುಗಿದ ತಕ್ಷಣ ಅರ್ಹ ಮತದಾರರ ಅಂತಿಮ ವಿವರಗಳನ್ನು ಸಲ್ಲಿಸಲಾಗುವುದು. ಮಾದರಿ ನೀತಿ ಸಂಹಿತೆ ಜನಪ್ರತಿನಿಧಿಗಳಿಗೆ ಮಾತ್ರವಲ್ಲದೆ ಅಧಿಕಾರಿಗಳಿಗೂ ಅನ್ವಯವಾಗುತ್ತದೆ ಎಂದರು.

ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಮತ್ತು ಪುರಸಭೆ ಕಚೇರಿಗಳಲ್ಲಿ ಮತಗಟ್ಟೆ ಸ್ಥಾಪಿಸಲಾಗುವುದು. ಈ ಬಾರಿ ಒಟ್ಟು 339 ಮತಗಟ್ಟೆ ಸ್ಥಾಪಿಸಲಾಗುತ್ತಿದ್ದು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಗ್ರಾಮ ಪಂಚಾಯಿತಿ, ಪುರಸಭೆ, ನಗರಸಭೆ ಸದಸ್ಯರು ಸೇರಿ 6503 ಮತದಾರರು ಇದ್ದಾರೆ. ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಸದಸ್ಯರ ಅವಧಿ ಮುಕ್ತಾಯಗೊಂಡಿರುವುದರಿಂದ ಮತ ಚಲಾಯಿಸಲು ಅವಕಾಶವಿಲ್ಲ ಎಂದು ವಿವರಿಸಿದರು.

ಚುನಾವಣಾ ಶಿರಸ್ತದಾರ ಜಾಕೀರ್ ಪಟೇಲ್ ಸೇರಿದಂತೆ ವಿವಿಧ ರಾಜಕೀಯ ಪಕ್ಷದ ಮುಖಂಡರು ಸಭೆಯಲ್ಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು