ಬುಧವಾರ, ಜನವರಿ 27, 2021
24 °C
ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಜಿಲ್ಲಾ ಉಸ್ತುವಾರಿ ಸಮಿತಿ ಸಭೆ

ಜಿಲ್ಲೆಯಲ್ಲಿ ಕೊರೊನಾ ವ್ಯಾಕ್ಸಿನ್‌ ವಿತರಣೆಗೆ ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ವ್ಯಾಕ್ಸಿನ್‌ ವಿತರಿಸುವುದಕ್ಕೆ ಸಮರ್ಪಕ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಇದುವರೆಗೂ ಯಾವ ಸಿದ್ಧತೆಗಳಾಗಿವೆ ಎಂಬುದನ್ನು ಜಿಲ್ಲಾ ಆರೋಗ್ಯಾಧಿಕಾರಿಯು ವಿವರಿಸುವಂತೆ ಸಂಸದ ರಾಜಾ ಅಮರೇಶ್ವರ ನಾಯಕ ಅವರು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಜಿಲ್ಲಾ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ಅವರು ಮಾತನಾಡಿ, ‘ಕೊರೊನಾ ವ್ಯಾಕ್ಸಿನ್‌ ಸಂಗ್ರಹಿಸುವುದಕ್ಕೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಮೂರು ಕೋಣೆಗಳು ಲಭ್ಯವಿರುವ ಆಸ್ಪತ್ರೆಗಳಿದ್ದು, ವ್ಯಾಕ್ಸಿನ್‌ ನೀಡುವುದಕ್ಕೆ ತಯಾರಿ ಮಾಡಲಾಗಿದೆ. ಜನವರಿ ಕೊನೆವಾರದಲ್ಲಿ ಸರ್ಕಾರದ ನಿರ್ದೇಶನವನ್ನು ಆಧರಿಸಿ ವ್ಯಾಕ್ಸಿನ್ ನೀಡುವುದನ್ನು ಆರಂಭಿಸಲಾಗುವುದು. ಆರೋಗ್ಯ ಕಾರ್ಯಕರ್ತರಿಗೆ ಈಗಾಗಲೇ ತರಬೇತಿ ನೀಡಲಾಗುತ್ತಿದೆ’ ಎಂದು ತಿಳಿಸಿದರು.

ಸಂಸದ ರಾಜಾ ಅಮರೇಶ್ವರ ನಾಯಕ ಮಾತನಾಡಿ, ಜಿಲ್ಲೆಯ ಜನರ ಆರೋಗ್ಯ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಇದರಿಂದ ಚಿಕಿತ್ಸೆಗೆ ಬರುವ ರೋಗಿಗಳನ್ನು ಉಪಚರಿಸುವುದರಲ್ಲಿ ತೊಂದರೆಯಾಗುತ್ತಿದೆ. ಕೂಡಲೇ ವೈದ್ಯರ ನೇಮಕ ಮಾಡುವಂತೆ ತಿಳಿಸಿದರು.

ರಾಯಚೂರು ತಾಲ್ಲೂಕಿನ ಮಟಮಾರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿಯೊಬ್ಬರೆ ಕಾರ್ಯನಿರ್ವಹಿಸುತ್ತಿರುವುದರಿಂದ ಚಿಕಿತ್ಸೆಗೆಂದು ಬರುವ ರೋಗಿಗಳು, ಗರ್ಭಿಣಿಯರು ತೊಂದರೆ ಅನುಭವಿಸುತ್ತಿದ್ದಾರೆ. ಗ್ರಾಮೀಣ ಭಾಗದ ಜನರ ಆರೋಗ್ಯ ಕಾಪಾಡುವುದಕ್ಕಾಗಿ ಖಾಲಿಯಿರುವ ಹುದ್ದೆಗಳಿಗೆ ವೈದ್ಯರು ಹಾಗೂ ಸಿಬ್ಬಂದಿಯನ್ನು ತಕ್ಷಣವೇ ನೇಮಕ ಮಾಡಲು ಅಗತ್ಯ ಕ್ರಮ ಜರುಗಿಸಬೇಕು ಎಂದು ತಿಳಿಸಿದರು.
ಶಾಲೆ-ಕಾಲೇಜುಗಳು ಇದೀಗ ಆರಂಭಗೊಂಡಿದ್ದು, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಕೋವಿಡ್ ತಪಾಸಣೆ ಮಾಡಬೇಕು, ಸೋಂಕು ದೃಢವಾದವರಿಗೆ ಅಗತ್ಯ ಚಿಕಿತ್ಸೆ ನೀಡಬೇಕು ಎಂದರು.

ಶಾಸಕ ಬಸನಗೌಡ ದದ್ದಲ ಮಾತನಾಡಿ, ಕೃಷ್ಣಾನದಿ ಸೇತುವೆ ಶಿಥಿಲಗೊಳ್ಳುತ್ತಿದೆ, ಕೂಡಲೇ ದುರಸ್ತಿ ಮಾಡಬೇಕು ಎಂಬುದನ್ನು ಸಭೆಯ ಗಮನಕ್ಕೆ ತಂದರು. ಸೇತುವೆ ನಿರ್ಮಾಣಕ್ಕೆ ಬೇಕಾದ ಅಗತ್ಯ ಕ್ರಮ ಜರುಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೊಪ್ಪಳ ಸಂಸದ ಸಂಗಣ್ಣ ಕರಡಿ ಮಾತನಾಡಿ, ಸಭೆಗೆ ಗೈರು ಹಾಜರಾದ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗೆ ನೋಟಿಸ್ ನೀಡಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಮಾತನಾಡಿ, 847 ಅಂಗನವಾಡಿ ಕೇಂದ್ರಗಳಿಗೆ ನಿವೇಶನ ಕೊರತೆ ನೀಗಿಸಲು ಆಯಾ ಗ್ರಾಮದ ಪ್ರಾಥಮಿಕ ಶಾಲೆಗಳಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣ ಮಾಡಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಗಮನಹರಿಸಬೇಕು. ಒಂದು ತಿಂಗಳೊಳಗೆ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ನಿವೇಶನ ಗುರುತಿಸುವುದನ್ನು ಅಂತಿಮಗೊಳಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಅವರು ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಡಿ ಅಂಗನವಾಡಿ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿಲ್ಲ. ಅಧಿಕಾರಿಗಳು ಈ ಕಾರ್ಯವನ್ನು ಅನುಷ್ಠಾನಗೊಳಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್ ಮಾತನಾಡಿ, ನಿವೇಶನ ಕೊರತೆಯಿರುವ ನಗರ ಮತ್ತು ಗ್ರಾಮೀಣ ಪ್ರದೇಶದ ಸ್ಥಳ ಗುರುತಿಸಲು ಈಗಾಗಲೇ ಸೂಚಿಸಲಾಗಿದೆ ಎಂದು ತಿಳಿಸಿದರು.

ದಿಶಾ ಸಮಿತಿ ಸದಸ್ಯ ನಾಗಪ್ಪ ಬುಡಿದಿನ್ನಿ ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಚ್. ದುರಗೇಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.