ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ವಡಿ ಕೃಷ್ಣರಾಜ ಒಡೆಯರ್ ದೇಶದ ಮಾದರಿ ದೊರೆ

ಹಿರಿಯ ಚಿತ್ರಕಲಾವಿದ ಎಚ್‌.ಎಚ್‌.ಮ್ಯಾದರ ಅಭಿಮತ
Published 5 ಜೂನ್ 2024, 16:16 IST
Last Updated 5 ಜೂನ್ 2024, 16:16 IST
ಅಕ್ಷರ ಗಾತ್ರ

ರಾಯಚೂರು: ‘ಮೈಸೂರು ಸಂಸ್ಥಾನವನ್ನು ಮಾದರಿ ಸಂಸ್ಥಾನವನ್ನಾಗಿ ರೂಪಿಸಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ದೇಶದ ಮಾದರಿ ದೊರೆ’ ಎಂದು ಹಿರಿಯ ಚಿತ್ರಕಲಾವಿದ ಎಚ್‌.ಎಚ್‌.ಮ್ಯಾದರ ಬಣ್ಣಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ವತಿಯಿಂದ ಆಯೋಜಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ 140ನೆಯ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ವಿದ್ವಾಂಸರು, ಶಿಕ್ಷಣ ತಜ್ಞರು, ಇತಿಹಾಸಕಾರರು ಕೃಷ್ಣರಾಜ ಒಡೆಯರ್ ಅವರನ್ನು ಸಾಮಾಜಿಕ ಕಾನೂನುಗಳ ಹರಿಕಾರ’ ಎಂದು ಕರೆದಿದ್ದಾರೆ. ಗಾಂಧೀಜಿಯವರಿಂದಲೇ ‘ರಾಜರ್ಷಿ’ ಎಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಂಸೆ ಪಡೆದಿದ್ದರು’ ಎಂದು ತಿಳಿಸಿದರು.

‘1918ರಲ್ಲಿ ಮುಖ್ಯ ನ್ಯಾಯಾಧೀಶರಾಗಿದ್ದ ಸರ್.ಲೆಸ್ಲಿ ಮಿಲ್ಲರ್ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ರಚಿಸಿ ಎಲ್ಲ ಸಮುದಾಯದ ಜನರಿಗೆ ಸರ್ಕಾರಿ ಉದ್ಯೋಗದಲ್ಲಿ ಪ್ರಾತಿನಿಧ್ಯ ದೊರಕುವಂತೆ ಅಧ್ಯಯನ ಮಾಡಿ ವರದಿ ನೀಡಲು ಆದೇಶ ಮಾಡಿದ್ದರು. ಆಯೋಗದ ಶಿಫಾರಸಿನಂತೆ 1921ರಲ್ಲಿ ಪ್ರಥಮ ಬಾರಿಗೆ ಎಲ್ಲ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿ ನೀಡಲು ಆದೇಶ ನೀಡಿದ್ದರು. ಹಾಗಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ‘ಮೀಸಲಾತಿಯ ಜನಕ’ ಎಂದು ಕರೆಯಲಾಗುತ್ತದೆ ಎಂದು ಹೇಳಿದರು.

ರಾಯಚೂರಿನ ನಂದಿನಿ ಕಾಲೇಜಿನ ಉಪನ್ಯಾಸಕ ವಿಜಯರಾಜೇಂದ್ರ ಮಾತನಾಡಿ, ‘ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರು ರಾಜ್ಯಕ್ಕೆ ನೀಡಿದ ಅಮೂಲ್ಯ ಕೊಡುಗೆ ಎಂದರೆ ಸ್ಥಳೀಯ ಸಂಸ್ಥೆಗಳನ್ನು ರಚಿಸಿ ಆಡಳಿತ ವಿಕೇಂದ್ರೀಕರಣಕ್ಕೆ ಅನುವು ಮಾಡಿಕೊಟ್ಟಿದ್ದಾಗಿದೆ. ರಾಜ್ಯದ ಸಣ್ಣ ಸಣ್ಣ ಪಟ್ಟಣಗಳಲ್ಲಿಯೂ ಮುನಿಸಿಪಾಲಿಟಿಗಳು ರಚನೆಯಾದವು. ಹಳ್ಳಿಗಳಲ್ಲಿ ಪ್ರಥಮ ಬಾರಿಗೆ ಗ್ರಾಮ ಪಂಚಾಯಿತಿಗಳು ಕಾರ್ಯ ನಿರ್ವಹಿಸಲು ಆರಂಭ ಮಾಡಿದ್ದರಿಂದ, ಗ್ರಾಮೀಣ ಪ್ರದೇಶಗಳಲ್ಲಿ ಆಡಳಿತದಲ್ಲಿ ಜನರ ಭಾಗವಹಿಸುವಿಕೆಗೆ ಅಪಾರ ಉತ್ತೇಜನ ನೀಡಲಾಯಿತು’ ಎಂದರು.

‘ಮೈಸೂರು ಸಂಸ್ಥಾನವನ್ನು ಮಾದರಿ ಸಂಸ್ಥಾನವಾಗಿ ರೂಪಿಸಿದ ಕೀರ್ತಿ ನಾಲ್ವಡಿಯವರಿಗೆ ಸಲ್ಲುತ್ತದೆ. ಸಾಹಿತ್ಯ, ಸಂಗೀತ, ವಾಸ್ತು ಶಿಲ್ಪದ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಿ 1915ರಲ್ಲಿ ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಪ್ರಾರಂಭಿಸಿದರು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಮಹಾಂತೇಶ ಬಿರಾದಾರ,  ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಶ ಬೇವಿನಬೆಂಚಿ ಮತ್ತು ಜಿಲ್ಲಾ ಸಮಿತಿ ಸದಸ್ಯರಾದ ಲಕ್ಷ್ಮೀ ರೆಡ್ಡಿ ಹೊಸೂರು ಹಾಗೂ ಹಿರಿಯ ಸಾಹಿತಿ ವೀರ ಹನುಮಾನ ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ತಾಯಪ್ಪ ಬಿ.ಹೊಸೂರ ಅಧ್ಯಕ್ಷತೆ ವಹಿಸಿದ್ದರು. ಮಾಲ್ಕಪ್ಪ ಪಾಟೀಲ, ರಾಮಣ್ಣ ಮ್ಯಾದರ, ಬಶೀರ್ ಅಹ್ಮದ್ ಹೊಸಮನಿ ಉಪಸ್ಥಿತರಿದ್ದರು.

ರಾವುತ್ ರಾವ್ ಬರೂರು ನಿರೂಪಿಸಿದರು. ಈರಣ್ಣ ಬೆಂಗಾಲಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT