ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿ: ಸಿಇಒ ರಾಹುಲ್ ಪಾಂಡ್ವೆ

ರಾಷ್ಟ್ರೀಯ ಪಲ್ಸ್ ಪೋಲಿಯೊ ದಿನ: ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆ
Published 26 ಫೆಬ್ರುವರಿ 2024, 13:36 IST
Last Updated 26 ಫೆಬ್ರುವರಿ 2024, 13:36 IST
ಅಕ್ಷರ ಗಾತ್ರ

ರಾಯಚೂರು: ‘ಮಾರ್ಚ್‌ ಮೊದಲ ವಾರದಲ್ಲಿ ನಡೆಯುವ ಪಲ್ಸ್ ಪೋಲಿಯೊ ಅಭಿಯಾನದಲ್ಲಿ ಜಿಲ್ಲೆಯ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೊ ಲಸಿಕೆ ನೀಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಪಾಂಡ್ವೆ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ದಿನಾಚರಣೆ ಪ್ರಯುಕ್ತ ನಡೆದ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯಲ್ಲಿ ಮಾತನಾಡಿದರು.

‘ಗುಡ್ಡಗಾಡು ಪ್ರದೇಶ, ತಾಂಡಾ ಮತ್ತು ದೊಡ್ಡಿಗಳಲ್ಲಿ ಅಭಿಯಾನದ ಮೊದಲೇ ಮಾ.1 ಮತ್ತು 2 ರಂದು ಮಕ್ಕಳಿಗೆ ಲಸಿಕೆ ನೀಡಬೇಕು. ಮಾ.3 ರಿಂದ 6 ರವರೆಗೆ ನಡೆಯಲಿರುವ ಲಸಿಕಾ ಕಾರ್ಯಕ್ರಮದಲ್ಲಿ ಮೊದಲನೆಯ ದಿನ ಬೂತ್ ಮಟ್ಟದಲ್ಲಿ ಕಡ್ಡಾಯವಾಗಿ ಎಲ್ಲ ಮಕ್ಕಳಿಗೆ ಲಸಿಕೆ ಕೊಡಿಸಬೇಕು. ಮೊದಲ ದಿನವೇ ಶೇ 98ರಷ್ಟು ಪ್ರಗತಿ ಸಾಧಿಸಲು ಪ್ರಯತ್ನಿಸಬೇಕು’ ಎಂದು ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಮಾತನಾಡಿ, ‘ಶಾಲಾ ಮಕ್ಕಳಿಂದ ಜಾಥಾ ಮಾಡಿಸಿ ವ್ಯಾಪಕ ಪ್ರಚಾರ ಮಾಡಬೇಕು ಮತ್ತು ಜೆಸ್ಕಾಂನವರು ಪೋಲಿಯೊ ಲಸಿಕಾ ಕಾರ್ಯಕ್ರಮ ಮುಗಿಯುವರೆಗೂ ವಿದ್ಯುತ್ ಸರಬರಾಜು ಮಾಡಬೇಕು. ಪ್ರಾದೇಶಿಕ ಸಾರಿಗೆ ಇಲಾಖೆಯವರು ವಾಹನದ ವ್ಯವಸ್ಥೆ ಮಾಡಬೇಕು’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ಐದು ವರ್ಷದೊಳಗಿನ ಒಟ್ಟು 2,55,257 ಮಕ್ಕಳಿದ್ದಾರೆ. ಗ್ರಾಮೀಣ ಭಾಗದಲ್ಲಿ 1,90,658 ಹಾಗೂ ನಗರ ಪ್ರದೇಶದಲ್ಲಿ 64,599 ಮಕ್ಕಳಿದ್ದಾರೆ. ಎಲ್ಲ ಮಕ್ಕಳಿಗೂ ಲಸಿಕೆ ಹಾಕಿಸಲು ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು’ ಎಂದು ಸೂಚನೆ ನೀಡಿದರು.

ರಾಷ್ಟ್ರೀಯ ಪಲ್ಸ್ ಪೋಲಿಯೊ ದಿನಾಚರಣೆ ಅಂಗವಾಗಿ ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು, ಜಿಲ್ಲಾ ಸವೇಕ್ಷಣಾಧಿಕಾರಿ ಡಾ.ಕೆ.ಗಣೇಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಚೇತನಕುಮಾರ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವಕುಮಾರ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ನಂದಿತಾ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ.ಮಹ್ಮದ್ ಶಾಕೀರ್ ಮೊಹಿನುದ್ದಿನ್, ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಪ್ರಜ್ವಲ್ ಕುಮಾರ, ಡಾ.ಅಯ್ಯನಗೌಡ, ಡಾ.ಶರಣ ಬಸವರಾಜ, ಡಾ.ಬನದೇಶ್ವರ ಹಾಗೂ ಡಾ.ರವಿಕಿರಣ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT