ಗುರುವಾರ , ಮೇ 26, 2022
23 °C
ಬಾಲ್ಯ ವಿವಾಹದ ದುಷ್ಪರಿಣಾಮಗಳು, ತಡೆಗಟ್ಟುವ ಕ್ರಮಗಳ ಅರಿವು

ರಾಯಚೂರು | ಬಾಲ್ಯವಿವಾಹ ತಡೆಗೆ ಜಾಗೃತಿ ಅವಶ್ಯ: ಡಾ.ಜಯಶ್ರೀ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಜಿಲ್ಲೆಯಲ್ಲಿ ಬಾಲ್ಯವಿವಾಹವನ್ನು ತಡೆಗಟ್ಟಲು ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗದ ಸದಸ್ಯೆ ಡಾ.ಜಯಶ್ರೀ ಚನ್ನಾಳ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಹಾಗೂ ತಡೆಗಟ್ಟಲು ಕ್ರಮಗಳ ಬಗ್ಗೆ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹೆಣ್ಣು ಮಕ್ಕಳ ಬಾಲ್ಯ ವಿವಾಹ ತಡೆಗಟ್ಟಲು ಅಧಿಕಾರಿಗಳು ಮಕ್ಕಳ ಪೋಷಕರ ಮನವೊಲಿಸಬೇಕು. ಮಕ್ಕಳಿಗೆ ಉನ್ನತ ಶಿಕ್ಷಣ ಸೌಲಭ್ಯ ಕಲ್ಪಿಸಿಕೊಡಲು ಮುಂದಾಗಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಎಲ್ಲರನ್ನು ಒಂದೆಡೆ ಸೇರಿಸಿ ಜಾಗೃತಿ ಮೂಡಿಸಬೇಕು. ಸಮಾಜದಲ್ಲಿ ಹೆಣ್ಣು ಮಕ್ಕಳ ಸ್ಥಾನ ಉತ್ತಮಗೊಳಿಸಬೇಕು. ಅತಿಚಿಕ್ಕ ವಯಸ್ಸಿನಲ್ಲಿ ಮದುವೆಯಾಗುವುದರಿಂದ ಹೆಣ್ಣು ಮಕ್ಕಳಿಗೆ ಮುಂದೆ ಉಂಟಾಗುವ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಡಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಬಾಲ್ಯವಿವಾಹ ಪದ್ಧತಿ ತಡೆಗಟ್ಟಲು ಪ್ರತಿಯೊಬ್ಬರ ಮನಸ್ಥಿತಿ ಬದಲಾಗುವ ಅಗತ್ಯವಿದೆ. ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮಗಳನ್ನು ಅರಿತುಕೊಂಡು ಎಲ್ಲರೂ ಅದನ್ನು ತಳಮಟ್ಟದಿಂದ ನಿರ್ಮೂಲನೆ ಮಾಡಲು ಶ್ರಮಿಸಬೇಕಾಗಿದೆ ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಆರ್.ಎ.ಮಹಾಜನ್ ಮಾತನಾಡಿ, ಹೆಣ್ಣು ಮಕ್ಕಳ ರಕ್ಷಣೆಯ ದೃಷ್ಟಿಯಿಂದ ಬಾಲ್ಯ ವಿವಾಹವನ್ನು ತಡೆಗಟ್ಟುವ ಕಾರ್ಯ ಆಗಲೇಬೇಕು. ಹೀಗಾಗಿ ಬಾಲ್ಯ ವಿವಾಹ ತಡೆಯುವ ಕಾರ್ಯ ಆಗಲೇಬೇಕು. ಮಕ್ಕಳ ಹಕ್ಕುಗಳ ರಕ್ಷಣೆ ಇಡೀ ಸಮಾಜದ ಜವಾಬ್ದಾರಿಯಾಗಬೇಕು. ಬಾಲ್ಯ ವಿವಾಹ ಪಿಡುಗು ಸಮಾಜದಿಂದಲೇ ದೂರಾಗಬೇಕು ಎಂದರು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವೀರನಗೌಡ ಮಾತನಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ನಾಗರಾಜ್, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ವಿಜಯ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಮನ್ಸೂರ್ ಅಹ್ಮದ್ ಜಿ., ಶ್ರೀದೇವಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು