ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂತನ ಕಾರಾಗೃಹ ನಿರ್ಮಾಣಕ್ಕೆ ಕ್ರಮ

ಬೆಳಗಾವಿ ಉತ್ತರ ವಲಯದ ಐಜಿಪಿ ಸೋಮಶೇಖರ್‌ ಹೇಳಿಕೆ
Last Updated 15 ಜುಲೈ 2021, 15:52 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯಲ್ಲಿ ನೂತನ ಕೇಂದ್ರ ಕಾರಾಗೃಹ ನಿರ್ಮಾಣಕ್ಕೆ ತ್ವರಿತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಂಧಿಖಾನೆ ವಿಭಾಗದ ಬೆಳಗಾವಿ ಉತ್ತರ ವಲಯದ ಡಿಐಜಿ ಸೋಮಶೇಖರ ತಿಳಿಸಿದರು.

ನಗರದಲ್ಲಿರುವ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಗುರುವಾರ ಭೇಟಿನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಗದಗ ಮತ್ತು ರಾಯಚೂರಿನಲ್ಲಿ ನೂತನ ಕೇಂದ್ರ ಕಾರಾಗೃಹ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನೀಲನಕ್ಷೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಕಟ್ಟಡ ನಿರ್ಮಾಣ ಕುರಿತು ರಾಜ್ಯ ಪೊಲೀಸ್‌ ವಸತಿ ನಿಗಮದಿಂದ ಅನುಮತಿ ದೊರಕಿಲ್ಲ. ದೊರಕಿದ ನಂತರ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.

ಈಗಾಗಲೇ ಬೆಳಗಾವಿ ಉತ್ತರ ವಲಯ ವ್ಯಾಪ್ತಿಯ ವಿಜಯಪುರ ಹಾಗೂ ಬೀದರ್ ಜಿಲ್ಲೆಗಳಲ್ಲಿ ಸುಮಾರು ₹100 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕೇಂದ್ರ ಕಾರಾಗೃಹದ ಕಾಮಗಾರಿಯನ್ನು ಆರಂಭಿಸಲಾಗಿದೆ. ರಾಯಚೂರು, ಗದಗ ಜಿಲ್ಲೆಗಳಲ್ಲಿ ಹೊಸ ಕೇಂದ್ರ ಕಾರಾಗೃಹಗಳ ನಿರ್ಮಾಣಕ್ಕೆ ಯೋಜನೆ ರೂಪಿಸಿ ಕಾಮಗಾರಿ ಅನುಮತಿಗಾಗಿ ಪೊಲೀಸ್‌ ವಸತಿ ನಿಗಮಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ರಾಯಚೂರು ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಗಳಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ಸೇರಿದಂತೆ ಮೂಲಸೌಕರ್ಯ ಕಲ್ಪಿಸುವುದಕ್ಕೆ ಸೂಚನೆ ನೀಡಲಾಗಿದೆ. ಜೈಲಿನಲ್ಲಿ ವಿಚಾರಣಾಧೀನ ಕೈದಿಗಳನ್ನು ಭೇಟಿ ಮಾಡಲು ಬರುವ ಕುಟುಂಬದ ಸದಸ್ಯರಿಗೆ ಪ್ರತ್ಯೇಕ ಕೊಠಡಿ, ಕಾರಾಗೃಹದ ಗೋಡೆಗಳ ಎತ್ತರ ಹೆಚ್ಚಿಸುವುದು, ಕಾಲಕಾಲಕ್ಕೆ ಪರಿಶೀಲನೆ ನಡೆಸಿ ಸಮಸ್ಯೆಗಳು ಕಂಡುಬಂದಲ್ಲಿ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು.

ಕಾರಾಗೃಹದ ಅಧಿಕಾರಿ, ಸಿಬ್ಬಂದಿ ವಸತಿ ನಿಲಯಗಳು ಶಿಥಿಲಾವಸ್ಥೆಗೆ ತಲುಪಿದ್ದರೆ ಅವುಗಳನ್ನು ಶೀಘ್ರ ದುರಸ್ತಿ ಮಾಡಬೇಕು, ಇದರ ಜೊತೆಗೆ ಅಗತ್ಯ ಸವಲತ್ತುಗಳ ಸಮಸ್ಯೆಗಳು ಕಂಡುಬಂದಲ್ಲಿ ಅವುಗಳ ಪರಿಹಾರಕ್ಕು ಕ್ರಮ ವಹಿಸುವಂತೆ ಅಧೀಕ್ಷಕರಿಗೆ ತಿಳಿಸಲಾಗಿದೆ ಎಂದು ಹೇಳಿದರು.
ಜೈಲರ್ ವಿ.ಆರ್.ಅಂದಾನಿ, ಉಪಜೈಲರ್ ಅಬ್ದುಲ್ ಶುಕೂರ್ ಬಾಗ್, ಅಧಿಕಾರಿ, ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT