ಮಂಗಳವಾರ, ಜೂನ್ 22, 2021
27 °C
ನೂತನ ಶಾಸಕ ಬಸನಗೌಡ ತುರ್ವಿಹಾಳ ಭರವಸೆ

ನೀರಾವರಿ ಯೋಜನೆ, 5ಎ ಕಾಲುವೆ ಅನುಷ್ಠಾನಕ್ಕೆ ಆದ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ರೈತರ ನೀರಾವರಿ ಕನಸು ನನಸಾಗಿಸುವುದು ಹಾಗೂ ಪ್ರಮುಖ ಬೇಡಿಕೆಯಾದ 5ಎ ಕಾಲುವೆ ಕಾಮಗಾರಿ ಕೈಗೆತ್ತಿಕೊಳ್ಳುವುದು ನನ್ನ ಆದ್ಯತೆಗಳಲ್ಲಿ ಪ್ರಮುಖವಾದವು. 5ಎ ಕಾಲುವೆಗೆ ಸರ್ಕಾರದ ಮೇಲೆ ನಿರಂತರ ಒತ್ತಡ ಖಚಿತ.

ಇವು ಬಸನಗೌಡ ತುರ್ವಿಹಾಳ ಅವರ ಮಾತು. ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಅವರು ರೈತರ ಬೇಡಿಕೆ ಈಡೇರಿಸಲು ಬದ್ಧವಾಗಿದ್ದೇನೆ ಎಂದು ಒತ್ತಿ ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಾಪಗೌಡ ಪಾಟೀಲ ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾದರೂ ಮಸ್ಕಿ ಕ್ಷೇತ್ರದಲ್ಲಿ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಜನರು ನನ್ನ ಮೇಲೆ ಭರವಸೆ ಇಟ್ಟು ಗೆಲ್ಲಿಸಿದ್ದಾರೆ ಎಂದರು.

ಉಪಚುನಾವಣೆ ಪ್ರಚಾರಕ್ಕೆ ಬಂದಿದ್ದ ಕಾಂಗ್ರೆಸ್‌ ರಾಜ್ಯ ನಾಯಕರು ಈ ಭಾಗದ ನೀರಾವರಿಗೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಸರ್ಕಾರದ ಮೇಲೆ ಒತ್ತಡ ಹಾಕಿ 5ಎ ಕಾಲುವೆ ಬೇಡಿಕೆ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು. ಪಕ್ಷದ ರಾಜ್ಯ ಮತ್ತು ಜಿಲ್ಲೆಯ ಎಲ್ಲ ನಾಯಕರು ಜವಾಬ್ದಾರಿ ವಹಿಸಿಕೊಂಡು ಪ್ರಚಾರ ಮಾಡಿ ಗೆಲ್ಲಿಸಿದ್ದಾರೆ ಎಂದು ಹೇಳಿದರು.

‌ಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಲ್ಪಿಸಲಾಗುವುದು. ಕಾಂಗ್ರೆಸ್‌ ಪಕ್ಷದ ರಾಜ್ಯ ನಾಯಕರುಗಳ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಮಸ್ಕಿ ಕ್ಷೇತ್ರದಲ್ಲಿ ಶುದ್ಧ ಕುಡಿಯುವ ನೀರು, ಶಿಕ್ಷಣ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಸೌಲಭ್ಯಗಳನ್ನು ಪಡೆಯಲಾಗುವುದು ಎಂದು ತಿಳಿಸಿದರು.

ಪ್ರತಾಪಗೌಡ ಪಾಟೀಲ ಅವರು ಕ್ಷೇತ್ರದ ಮತದಾರರ ನಿರ್ಣಯಕ್ಕೆ ತಲೆಬಾಗಬೇಕು. ಮತದಾರರು ಬದಲಾವಣೆಯನ್ನು ಬಯಸಿ, ಅಭಿವೃದ್ಧಿಗಾಗಿ ಆಯ್ಕೆ ಮಾಡಿದ್ದಾರೆ. ಆದರೆ, ಸೋಲಿನ ಹತಾಸೆಯಿಂದ ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಗುಂಡಾ ವರ್ತನೆ ತೋರಿಸುತ್ತಿರುವುದು ಸರಿಯಲ್ಲ ಎಂದು ಅವರು ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ.ನಾಯಕ ಮಾತನಾಡಿ, ಮುಂಬರುವ ದಿನಗಳಲ್ಲಿ ಮಸ್ಕಿ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಲಿದೆ. ಪ್ರತಾಪಗೌಡ ಪಾಟೀಲ ಅವರು ಸೋಲಿನ ಹತಾಶೆಯಿಂದ ಕಾರ್ಯಕರ್ತರ ಮೇಲೆ ಹಲ್ಲೆ ಘಟನೆಗೆ ಕಾರಣರಾಗುತ್ತಿದ್ದಾರೆ. ತಕ್ಷಣ ಇದನ್ನು ಕೈಬಿಡಬೇಕು. ಇಲ್ಲದಿದ್ದರೆ ಜಿಲ್ಲಾ ಕಾಂಗ್ರೆಸ್‌ನಿಂದ ಹೋರಾಟ ಆರಂಭಿಸಲಾಗುವುದು ಎಂದು ತಿಳಿಸಿದರು.

ಕಾಂಗ್ರೆಸ್‌ ಯುವ ಮುಖಂಡ ರವಿ ಬೋಸರಾಜ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಔಷಧಿಗಳು, ಆಮ್ಲಜನಕ ಪಡೆಯುವುದಕ್ಕೆ ಪರದಾಡುವ ಸ್ಥಿತಿ ಇದೆ ಎಂದರು. ಮುಖಂಡರಾದ ಮಲ್ಲಿಕಾರ್ಜುನ ಪಾಟೀಲ, ಕೆ.ಶಾಂತಪ್ಪ ಹಾಗೂ ಹನುಮಂತಪ್ಪ ಮುದ್ದಪೂರ ಅವರು ಸೇರಿದಂತೆ ಮತ್ತಿತರರು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು