ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.19ರಂದು ತಿಮ್ಮಾಪುರ ಏತನೀರಾವರಿ ಯೋಜನೆಗೆ ಸಿಎಂ ಚಾಲನೆ

ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ: ಶಾಸಕ ಹಂಪನಗೌಡ ಬಾದರ್ಲಿ ಹೇಳಿಕೆ
Published 28 ನವೆಂಬರ್ 2023, 13:39 IST
Last Updated 28 ನವೆಂಬರ್ 2023, 13:39 IST
ಅಕ್ಷರ ಗಾತ್ರ

ಸಿಂಧನೂರು: ತಾಲ್ಲೂಕಿನ ತಿಮ್ಮಾಪುರ ಏತನೀರಾವರಿ ಯೋಜನೆ ಉದ್ಘಾಟನೆ ಹಾಗೂ ಸರ್ಕಾರಿ ಮಹಾವಿದ್ಯಾಲಯ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಡಿ.19 ರಂದು ಹಮ್ಮಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಭಾಗವಹಿಸುವರು. ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಹಂಪನಗೌಡ ಬಾದರ್ಲಿ ಸೂಚಿಸಿದರು.

ಸ್ಥಳೀಯ ಮಿನಿವಿಧಾನಸೌಧದ ಸಭಾಂಗಣದಲ್ಲಿ ಮಂಗಳವಾರ ಸಂಜೆ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘₹100 ಕೋಟಿ ವೆಚ್ಚದಲ್ಲಿ ತಿಮ್ಮಾಪುರ ಏತನೀರಾವರಿ ಯೋಜನೆ ನಿರ್ಮಿಸಲಾಗಿದ್ದು, ಸುಮಾರು 40 ಸಾವಿರ ಎಕರೆಗೆ ನೀರಾವರಿ ಕಲ್ಪಿಸುವ ರೈತರ ಬಹುನಿರೀಕ್ಷಿತ ಯೋಜನೆಯಾಗಿದೆ’ ಎಂದು ತಿಳಿಸಿದರು.

‘ನಗರದ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಾವಿದ್ಯಾಲಯ ಸ್ಥಾಪನೆಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಅದ್ದೂರಿಯಾಗಿ ಆಚರಿಸಲಾಗುವುದು. ಈಗಾಗಲೇ ಇದಕ್ಕೆ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ. ಜೊತೆಗೆ ಕ್ರೈಸ್ ಯೋಜನೆಯಡಿಯಲ್ಲಿ ₹4 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸ್ನಾತಕೋತ್ತರ ಕೇಂದ್ರದ ಕಟ್ಟಡಕ್ಕೆ ಭೂಮಿ ಪೂಜೆಯನ್ನು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ನೆರವೇರಿಸಲಿದ್ದಾರೆ’ ಎಂದು ಹೇಳಿದರು.

‘ಎಲ್ಲ ಕಾರ್ಯಕ್ರಮಗಳನ್ನು ಜೂನಿಯರ್ ಕಾಲೇಜು ಮೈದಾನದಲ್ಲಿ ಒಂದೇ ವೇದಿಕೆಯಲ್ಲಿ ನಡೆಸಬೇಕೋ ಅಥವಾ ಪ್ರತ್ಯೇಕವಾಗಿ ನಡೆಸಬೇಕೋ ಎನ್ನುವ ಕುರಿತು ನಂತರ ತೀರ್ಮಾನಿಸಲಾಗುವುದು. ಇದರ ಜೊತೆಗೆ ಪಿಡಬ್ಲ್ಯುಡಿ ಕ್ಯಾಂಪಿನಲ್ಲಿ ನಿರ್ಮಾಣಗೊಂಡಿರುವ ಸಂಚಾರ ಪೊಲೀಸ್ ಠಾಣೆಯ ನೂತನ ಕಟ್ಟಡ, ಸಾಲಗುಂದಾ ಮತ್ತು ಮುಕ್ಕುಂದಾ ಗ್ರಾಮದಲ್ಲಿ ನಿರ್ಮಾಣವಾಗಿರುವ ಮೌಲಾನ ಆಜಾದ್ ಉರ್ದು ವಸತಿ ಶಾಲಾ ಕಟ್ಟಡ ಸೇರಿದಂತೆ ಗ್ರಾಮೀಣಾಭಿವೃದ್ಧಿ, ಉನ್ನತ ಶಿಕ್ಷಣ ಹಾಗೂ ಲೋಕೋಪಯೋಗಿ ಇಲಾಖೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಹಮ್ಮಿಕೊಳ್ಳಲಾಗುವುದು. ಹೀಗಾಗಿ ಸಚಿವರಾದ ಜಿ.ಪರಮೇಶ್ವರ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಜಮೀರ್ ಅಹ್ಮದ್, ಸುಧಾಕರ್ ಮತ್ತಿತರ ಸಚಿವರನ್ನು ಆಹ್ವಾನಿಸಲಾಗುವುದು’ ಎಂದು ತಿಳಿಸಿದರು.

‘ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಬಗ್ಗೆ ಎರಡು–ಮೂರು ದಿನಗಳಲ್ಲಿ ಎಲ್ಲ ಮಾಹಿತಿ ನೀಡಿದರೆ ಸಂಬಂಧಿಸಿದ ಇಲಾಖೆಯ ಸಚಿವರನ್ನು ಆಹ್ವಾನಿಸಲು ಅನುಕೂಲವಾಗುತ್ತದೆ. ವೇದಿಕೆ, ವಸತಿ, ಪಾರ್ಕಿಂಗ್, ಊಟ ಹೀಗೆ ಎಲ್ಲವನ್ನು ವ್ಯವಸ್ಥಿತವಾಗಿ ಸಮಿತಿಗಳನ್ನು ರಚಿಸಿಕೊಂಡು ನಿರ್ವಹಿಸಬೇಕು. ಜೂನಿಯರ್ ಕಾಲೇಜು ಮೈದಾನದಲ್ಲಿ ಗಣ್ಯರು ಬರಲು ಎರಡು ಹೆಲಿಪ್ಯಾಡ್‍ಗಳನ್ನು ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಬೇಕು. ಸಣ್ಣನೀರಾವರಿ ಇಲಾಖೆಯ ಅಧಿಕಾರಿಗಳು ತಿಮ್ಮಾಪುರ ಏತನೀರಾವರಿ ಯೋಜನೆಯ ಸ್ಥಳಕ್ಕೆ ತೆರಳಿ ಪರಿಶೀಲಿಸಿ, ನದಿಯಲ್ಲಿ ಅರ್ಧ ಟಿಎಂಸಿ ನೀರು ಸಂಗ್ರಹವಿರುವಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.

ತಹಶೀಲ್ದಾರ್ ಅರುಣ್ ಎಚ್.ದೇಸಾಯಿ, ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು, ತಾಲ್ಲೂಕು ಪಂಚಾಯಿತಿ ಇಒ ಚಂದ್ರಶೇಖರ, ಡಿವೈಎಸ್‍ಪಿ ಬಿ.ಎಸ್.ತಳವಾರ, ಲೋಕೋಪಯೋಗಿ ಇಲಾಖೆ ಎಇಇ ಸಿ.ಎಸ್.ಪಾಟೀಲ, ಪಂಚಾಯತ್‍ ರಾಜ್ ಎಂಜಿನಿಯರಿಂಗ್ ವಿಭಾಗದ ಎಇಇ ಶಿವಪ್ಪ ಐಹೊಳೆ, ಅರಣ್ಯ ಇಲಾಖೆಯ ವಲಯ ಅಧಿಕಾರಿ ರುದ್ರಮುನಿ, ಸರ್ಕಲ್ ಇನ್‌ಸ್ಪೆಕ್ಟರ್ ವೀರಾರೆಡ್ಡಿ ಎಚ್, ಸಹಾಯಕ ಕೃಷಿ ನಿರ್ದೇಶಕ ನಜೀರ್ ಅಹ್ಮದ್, ಸಿಡಿಪಿಒಗಳಾದ ಲಿಂಗನಗೌಡ, ಅಶೋಕ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಾ ಎಸ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಲಿಂಗಪ್ಪ ಅಂಗಡಿ, ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಶಿವಮಾನಪ್ಪ, ಪಶು ವೈದ್ಯಾಧಿಕಾರಿ ಡಾ.ಶರಣೇಗೌಡ, ನೀರಾವರಿ ಇಲಾಖೆಯ ನಾಗೇಂದ್ರ, ದಿವ್ಯಶ್ರೀ, ಸುನಿತಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT