ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳನ್ನು ದುಡುಮೆಗೆ ಕಳಿಸುವುದು ಅಕ್ಷಮ್ಯ: ನ್ಯಾಯಾಧೀಶ ಬೈಲೂರು ಶಂಕರರಾಮ

ರೈಟರ್ಸ್‌, ಪಿಎಸ್‌ಐ ಮತ್ತು ಸಿಪಿಐಗಳಿಗೆ ಒಂದು ದಿನದ ಕಾರ್ಯಾಗಾರ
Last Updated 17 ಫೆಬ್ರುವರಿ 2020, 15:18 IST
ಅಕ್ಷರ ಗಾತ್ರ

ರಾಯಚೂರು: ಬಡತನ ಮತ್ತು ಇನ್ನಿತರೆ ಸಾಮಾಜಿಕ ಕಾರಣಗಳಿಂದಾಗಿ ಮಕ್ಕಳನ್ನು ದುಡುಮೆಗೆ ಕಳಿಸುವುದು ಹೆಚ್ಚುತ್ತಿದ್ದು, ಇದು ಅಕ್ಷಮ್ಯ ಅಪರಾಧವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬೈಲೂರು ಶಂಕರರಾಮ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನೆಯಿಂದ ಕೃಷಿ ವಿಶ್ವವಿದ್ಯಾಲಯದ ಮುಖ್ಯ ಕೃಷಿ ಸಂಶೋಧನಾ ಕೇಂದ್ರ (ಕೆವಿಕೆ)ದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕತೆ ನಿರ್ಮೂಲನೆ ಕುರಿತು ಸೋಮವಾರ ಏರ್ಪಡಿಸಿದ್ದ ಜಿಲ್ಲೆಯ ಎಲ್ಲಾ ರೈಟರ್ಸ್‌, ಪಿಎಸ್‌ಐ ಮತ್ತು ಸಿಪಿಐ ಅವರಿಗೆ ಒಂದು ದಿನದ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.

ಬಾಲ ಕಾರ್ಮಿಕತೆಯನ್ನು 14 ವರ್ಷದ ಒಳಗಿನ ಮಕ್ಕಳು ಮತ್ತು 14 ರಿಂದ 18 ವರ್ಷದ ಮಕ್ಕಳೆಂದು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ. 18 ವರ್ಷದೊಳಗಿನ ಮಕ್ಕಳನ್ನು ವಿಷಪೂರಿತ ಕೈಗಾರಿಕೆಗಳಲ್ಲಿ, ಹೋಟೆಲ್, ಅಂಗಡಿ ಇನ್ನಿತರೆಡೆ ದುಡಿಸಿಕೊಂಡಲ್ಲಿ ಮಾಲೀಕರನ್ನು ಬಂಧನಕ್ಕೊಳಪಡಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಸಾರ್ವಜನಿಕರಲ್ಲಿ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಬೇಕಾಗಿದೆ ಎಂದರು.

ಮಕ್ಕಳಿಗೆ ಸಿಗುವ ಹಕ್ಕುಗಳನ್ನು ಒದಗಿಸಿಕೊಡುವ ಜವಾಬ್ದಾರಿ ದೇಶದ ಪ್ರತಿಯೊಬ್ಬ ಪ್ರಜೆಗೆ ಇದೆ. ಮಕ್ಕಳನ್ನು ರಕ್ಷಣೆ ಮಾಡುವಲ್ಲಿ ಪೊಲೀಸರಿಗೆ ಎಷ್ಟು ಜವಾಬ್ದಾರಿ ಇದೆಯೋ ಅಷ್ಟೇ ಜವಾಬ್ದಾರಿ ಪಾಲಕರದ್ದು ಎಂದರು.

ಮಕ್ಕಳ ಮತ್ತು ಮಹಿಳೆಯರ ರಕ್ಷಣೆಗೋಸ್ಕರ ಹಲವು ಕಾನೂನುಗಳನ್ನು ಜಾರಿಗೆ ತರಲಾಗುತ್ತಿದೆ. 14 ವರ್ಷದೊಳಗಿನ ಮಕ್ಕಳು ಯಾವುದೇ ಕ್ಷೇತ್ರದಲ್ಲಿ ಕಂಡಲ್ಲಿ ಕಲಂ (3)ರಡಿಯಲ್ಲಿ ಪ್ರಕರಣ ದಾಖಲಿಸಿ ಎಫ್‌ಐಆರ್ ಮಾಡಲಾಗುವುದು. ಕಿಶೋರಾವಸ್ಥೆಯ ಮಕ್ಕಳನ್ನು (15 ರಿಂದ 18) ಕಾಯ್ದೆಯ ಭಾಗ-1 ಮತ್ತು ಭಾಗ-2 ರಲ್ಲಿ ನಮೂದಿಸಿದ ಯಾವುದೇ ಕ್ಷೇತ್ರದಲ್ಲಿ ದುಡಿಸಿಕೊಂಡಲ್ಲಿ ಕಲಂ-3ಎ ಅನ್ವಯ ಪ್ರಕರಣ ದಾಖಲಿಸಿ ಎಫ್‌ಐಆರ್ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ ಮಕ್ಕಳನ್ನು ರಕ್ಷಣೆ ಮಾಡುವುದು ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಜಯಶ್ರೀ ಚನ್ನಾಳ್ ಮಾತನಾಡಿ, ಅಂಗನವಾಡಿಯಿಂದ ಮಕ್ಕಳಿಗೆ ಸಿಗುವ ಪೌಷ್ಟಿಕಾಂಶಯುತ ಆಹಾರ ವ್ಯವಸ್ಥಿತವಾಗಿ ಸಿಗುತ್ತಿದೆಯೋ ಇಲ್ಲವೋ ಎನ್ನುವ ಕುರಿತು ಹೆಚ್ಚಿನ ರೀತಿಯಲ್ಲಿ ಜಾಗೃತಿ ವಹಿಸಬೇಕು ಎಂದು ಹೇಳಿದರು.

ದೇಶ ಅಭಿವೃದ್ಧಿಯಾಗಲು ಶಿಕ್ಷಣ ಒಂದು ಮುಖ್ಯವಾದ ಆಯುಧವಾಗಿದೆ. ಹಾಗಾಗಿ ಮಕ್ಕಳು ಉತ್ತಮ ಶಿಕ್ಷಣ ಪಡೆಯಲು ಬೇಕಾಗುವ ವ್ಯವಸ್ಥೆಯನ್ನು ನಿರ್ಮಿಸಿಕೊಡಬೇಕಾಗಿದೆ. ನಿಮ್ಮ ಸ್ವಂತ ಮಕ್ಕಳ ಜೊತೆ ಯಾವ ರೀತಿಯಲ್ಲಿ ಮಾತನಾಡುತ್ತಿರೋ ಅದೇ ರೀತಿಯಲ್ಲಿ ಎಲ್ಲಾ ಮಕ್ಕಳ ಜೊತೆಯಲ್ಲಿ ಒಳ್ಳೆಯ ಸ್ನೇಹಿತರಾಗಿ ಹೊಂದಿಕೊಂಡು ಬೆರೆಯಬೇಕು ಎಂದು ಸಲಹೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ದುರಗೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ. ವೇದಮೂರ್ತಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಪ್ರಭುದೇವ ಪಾಟೀಲ, ಜಿಲ್ಲಾ ಕಾರ್ಮಿಕ ನಿರೀಕ್ಷಕ ಎನ್.ವೆಂಕಟಸ್ವಾಮಿ, ಕೊಪ್ಪಳ ಯುನಿಸೆಫ್ ಮಕ್ಕಳ ಸಂರಕ್ಷಣೆ ಯೋಜನೆಯ ವಿಭಾಗೀಯ ಸಂಯೋಜಕ ಕೆ. ರಾಘವೇಂದ್ರ ಭಟ್, ಕೊಪ್ಪಳ ಯುನಿಸೆಫ್ ಮಕ್ಕಳ ಸಂರಕ್ಷಣೆ ಯೋಜನೆಯ ತರಬೇತಿ ಸಂಯೋಜಕ ಹರೀಶ್ ಜೋಗಿ ಇದ್ದರು.

ಕಾರ್ಯಕ್ರಮದ ಮ್ಯಾನೇಜರ್ ರವಿಕುಮಾರ್ ನಿರೂಪಿಸಿದರು. ಜಿಲ್ಲಾ ಬಾಲಕಾರ್ಮಿಕ ಯೋಜನಾಧಿಕಾರಿ ಮಂಜುನಾಥರೆಡ್ಡಿ ಸ್ವಾಗತಿಸಿ, ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT