ಶನಿವಾರ, ಮೇ 21, 2022
23 °C

ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಪಾದಯಾತ್ರೆ: ಎಸ್‌.ಆರ್‌.ಹಿರೇಮಠ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ರಾಜ್ಯ ಸರ್ಕಾರವು ಭೂಸುಧಾರಣೆ ತಿದ್ದುಪಡಿ ಕಾಯ್ದೆ, ಜಾನುವಾರು ಹತ್ಯೆ ನಿಷೇಧ ಕಾಯ್ದೆ, ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಲು ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಫೆಬ್ರುವರಿಯಲ್ಲಿ ಬೀದರ್ ಜಿಲ್ಲೆಯ ಬಸವ ಕಲ್ಯಾಣ ಹಾಗೂ ಮಲೆಮಾದೇಶ್ವರ ಬೆಟ್ಟದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಮಾಡಲಾಗುವುದು ಎಂದು ಸಿಟಿಜನ್ ಫಾರ್ ಡೆಮಾಕ್ರಸಿ ಸಂಚಾಲಕ ಎಸ್.ಆರ್ ಹಿರೇಮಠ ತಿಳಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ತಿದ್ದುಪಡಿ ಮೂರು ಕಾಯ್ದೆಗಳನ್ನು ವಿರೋಧಿಸಿ ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಐತಿಹಾಸಿಕ ಹೋರಾಟಕ್ಕೆ ಕೇಂದ್ರ ಸರ್ಕಾರ ಮಣಿದು ಕಾಯ್ದೆಗಳನ್ನು ಹಿಂಪಡೆದಿದೆ. ಆದರೆ ರಾಜ್ಯ ಸರ್ಕಾರ ಕಾಯ್ದೆ ಹಿಂಪಡೆದಿಲ್ಲ. ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಜಾರಿಗೆ ತಂದು ಉದ್ಯಮಿಗಳಿಗೆ ಲಾಭ ಮಾಡಿ ರೈತರಿಗೆ ಗುಲಾಮರನ್ನಾಗಿ ಮಾಡುತ್ತಿದೆ ಎಂದು ದೂರಿದರು.

ಸರ್ಕಾರದ ರೈತ ವಿರೋಧಿ ನೀತಿಯಿಂದ ಅನೇಕ ರೈತರು ಕೃಷಿಯಿಂದ ವಿಮುಖರಾಗುತ್ತಿದ್ದು, ಕೃಷಿ ಉತ್ಪನ್ನಗಳಿಗೆ ಕನಿಷ್ಟ ಬೆಲೆ ಘೋಷಣೆ (ಎಂಎಸ್ ಪಿ) ಕಾಯ್ದೆ ಜಾರಿಗೆ ತರಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದರು.

ಹರಿದ್ವಾರದಲ್ಲಿ ಧರ್ಮ ಸಂಸತ್ ನಡೆಸಿ ಹಿಂದುತ್ವವಾದಿಗಳು ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದು ಖಂಡನೀಯ. ಅಲ್ಲಿನ ಮುಖ್ಯಮಂತ್ರಿ, ಗೃಹ ಸಚಿವ ಹಾಗೂ ಪ್ರಧಾನಿ ಮೋದಿ ಮೌನ ವಹಿಸಿದ್ದು ಸರಿಯಲ್ಲ. ದೇಶದ ವಿವಿಧೆಡೆ ಮುಸ್ಲಿಮರ ವಿರುದ್ಧ ಆಯುಧ ಹಿಡಿದು ನರಮೇಧಕ್ಕೆ ಕರೆ ನೀಡುವ ಘಟನೆ ನಡೆಯುತ್ತಿವೆ. ಸಚಿವರು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಪ್ರಜಾಪ್ರಭುತ್ವ ವಿರೋಧಿ ನಿಲುವು ತಾಳಿದೆ. ಜಿಲ್ಲಾ, ಹೋಬಳಿ ಮಟ್ಟದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುವುದು. ಸ್ವಾತಂತ್ರ್ಯ ಹೋರಾಟದ ಭಾಗವಾದ ಪೂರ್ಣ ಸ್ವರಾಜ್ ಮಾದರಿಯಲ್ಲಿ ರೈತರ ಹಾಗೂ ದುಡಿಯುವ ವರ್ಗವನ್ನು ಎಚ್ಚರಿಸಿ ಜನವಿರೋಧಿ ಸರ್ಕಾರ ಕಿತ್ತೊಗೆಯಲು ಹೋರಾಟ ಮಾಡಲಾಗುವುದು ಎಂದು ಹೇಳಿದರು.

ಹೋರಾಟಗಾರ ನಂದಿನಿ ಜಯರಾಮ್, ನಾರಾಯಣಪ್ಪ ಪಾಟೀಲ, ಭಾಸ್ಕರ್ ರಾವ್, ಮಹಮ್ಮದ್ ಅಸಿಮುದ್ದೀನ್, ಅನಿಸ್ ಪಾಶಾ, ಮಲ್ಲಿಕಾರ್ಜುನ ಭಟ್ಟರಹಳ್ಳಿ, ಗಣೇಶ, ಖಾಜಾ ಅಸ್ಲಂ ಅಹಮದ್, ಜಾನ್ ವೆಸ್ಲಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು