ಮಂಗಳವಾರ, ಜನವರಿ 26, 2021
16 °C

ರೈತ, ಕಾರ್ಮಿಕ ವಿರೋಧಿ ಕಾನೂನು ಹಿಂಪಡೆಯಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಬಂಡವಾಳಶಾಹಿ ಪರ ಜಾರಿಗೊಳಿಸಿರುವ ಕಾರ್ಮಿಕ ಸಂಹಿತೆ ಹಾಗೂ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಮತ್ತು ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯಾ ಟ್ರೇಡ್ ಯುನಿಯನ್ಸ್ (ಸಿಐಟಿಯು) ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಟಿಪ್ಪುಸುಲ್ತಾನ ಉದ್ಯಾನವನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಡಳಿತದ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಲಾಯಿತು. ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಾಗೂ ಜನವಿರೋಧಿ ವಿದ್ಯುತ್ ಮಸೂದೆಯನ್ನು ಹಿಂಪಡೆಯಲು ಒತ್ತಾಯಿಸಿ ದೇಶದ ವಿವಿಧ ಮೂಲೆಗಳಿಂದ ರೈತರು ದೆಹಲಿಯಲ್ಲಿ ಹೋರಾಟ ಹಮ್ಮಿಕೊಂಡಿದ್ದಾರೆ. ಸರ್ಕಾರದ ವಿರೋಧಿ ನಿಲುವಿನಿಂದ ಹೋರಾಟವು ತೀವ್ರ ಸ್ವರೂಪ ಪಡೆಯುತ್ತಿದೆ. ಆದರೆ ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸಲು ಮುಂದಾಗುತ್ತಿಲ್ಲ ಎಂದು ದೂರಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ಹಠಮಾರಿ ಧೋರಣೆ ಮುಂದುವರೆಸಿದೆ. ಇದುವರೆಗೆ 7 ಬಾರಿ ರೈತರ ಜೊತೆ ಮಾತುಕತೆ ನಡೆಸಿದೆ. ಮೂರು ಕೃಷಿ ಮಸೂದೆಗಳನ್ನು ಮಾತ್ರ ವಾಪಸ್‌ ಪಡೆಯಲು ಸಿದ್ಧವಿಲ್ಲ. ಆ ಮೂಲಕ ಕೇಂದ್ರ ಸರ್ಕಾರ ರೈತರ ಬೆಳೆದ ಬೆಳೆಗೆ ಖಾತ್ರಿಯಾದ ಬೆಂಬಲ ಬೆಲೆ ನೀಡಲು ತಯಾರಿಲ್ಲ ಎನ್ನುವುದು ಸ್ಪಷ್ಟವಾಗಿದೆ. ಕೂಡಲೇ ಸರ್ಕಾರ ತನ್ನ ಧೋರಣೆ ಬದಲಾಯಿಸಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಆದಾಯ ತೆರಿಗೆ ಮಿತಿಯಿಂದ ಹೊರಗಿರುವ ಎಲ್ಲಾ ಕುಟುಂಬಗಳ ಖಾತೆಗೆ ₹7,500 ಜಮಾ ಮಾಡಬೇಕು ಹಾಗೂ 10 ಕೆಜಿ ಆಹಾರಧಾನ್ಯ ಉಚಿತವಾಗಿ ನೀಡಬೇಕು. ಉದ್ಯೋಗ ಖಾತ್ರಿ ಯೋಜನೆಯನ್ನು 200 ದಿನಗಳಿಗೆ ಏರಿಸಿ ₹700 ಕೂಲಿ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಡಿ.ಎಸ್. ಶರಣವಸವ, ಪದಾಧಿಕಾರಿ ಎಚ್.ಪದ್ಮಾ, ಪ್ರವೀಣ ಕುಮಾರ, ಗೋವಿಂದಮ್ಮ, ಮಧು, ಅಮರೇಶ ಸಜ್ಜನ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.