ಸರ್ಕಾರಿ ಶಾಲೆ ಮುಚ್ಚುವ ನಿರ್ಧಾರಕ್ಕೆ ವಿರೋಧ

7
ಡಿಡಿಪಿಐ ಕಚೇರಿ ಎದುರಿಗೆ ಎಸ್‌ಎಫ್‌ಐ ಜಿಲ್ಲಾ ಘಟಕದಿಂದ ಪ್ರತಿಭಟನೆ

ಸರ್ಕಾರಿ ಶಾಲೆ ಮುಚ್ಚುವ ನಿರ್ಧಾರಕ್ಕೆ ವಿರೋಧ

Published:
Updated:

ರಾಯಚೂರು: ಕಡಿಮೆ ಸಂಖ್ಯೆಯ ದಾಖಲಾತಿ ಪಡೆದಿರುವ 14,451 ಸರ್ಕಾರಿ ಶಾಲೆಗಳನ್ನು ವಿಲೀನ ಹೆಸರಿನಲ್ಲಿ ಮುಚ್ಚಲು ಹೊರಟಿರುವುದನ್ನು ವಿರೋಧಿಸಿ ಎಸ್‌ಎಫ್‌ಐ ಜಿಲ್ಲಾ ಘಟಕದ ಸದಸ್ಯರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಬಾರದು. ಶಾಲೆಗಳ ಬಲವರ್ಧನೆಗೆ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಸರ್ಕಾರಿ ಶಾಲೆಗಳನ್ನು ಮುಚ್ಚುವುದು ನಾಡ ದ್ರೋಹ ಹಾಗೂ ಶಿಕ್ಷಣ ವಿರೋಧಿ ಕೆಲಸವಾಗಿದ್ದು, ಮೂಲ ಸೌಕರ್ಯಗಳಿಲ್ಲದೇ ನರಳುತ್ತಿರುವ ಶಾಲೆಗಳಿಗೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ 2,515 ಶಾಲೆಗಳಿಗೆ ಸ್ವಂತ ಕಟ್ಟಡಗಳಿಲ್ಲವಾಗಿವೆ. 27,039 ಶಾಲೆಗಳು ಶಿಥಿಲಗೊಂಡಿದ್ದು, ದುರಸ್ತಿ ಕಾರ್ಯ ಮಾಡಬೇಕಾಗಿದೆ. 8,389 ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಹಾಗೂ 13,000 ಶಾಲೆಗಳಲ್ಲಿ ಶೌಚಾಲಯ ವ್ಯವಸ್ಥೆಯೂ ಇಲ್ಲವಾಗಿದೆ. 32,512 ಶಿಕ್ಷಕರ ಕೊರತೆಯಿದೆ ಎಂದು ದೂರಿದರು.

ಶೇ 44 ರಷ್ಟು ಶಾಲೆಗಳಲ್ಲಿ ಕ್ರೀಡಾಂಗಣ ವ್ಯವಸ್ಥೆ ಇಲ್ಲ. ಶೇ 33ರಷ್ಟು ಶಾಲೆಗಳಿಗೆ ಕಾಂಪೌಂಡ್ ಹಾಗೂ ವಿದ್ಯುತ್ ಸೌಕರ್ಯವಿಲ್ಲ. ಸೌಕರ್ಯಗಳ ಕೊರತೆಯಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಆರೋಪಿಸಿದರು.

ಸರ್ಕಾರಿ ಶಾಲೆಗಳನ್ನು ಮುಚ್ಚುವ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳು ಹೆಚ್ಚಾಗಲು ಅವಕಾಶ ನೀಡುವ ಹುನ್ನಾರವನ್ನು ಸರ್ಕಾರ ನಡೆಸಿದೆ. ಕೂಡಲೇ ಸರ್ಕಾರಿ ಶಾಲೆಗಳನ್ನು ಮುಚ್ಚುವ ನಿರ್ಧಾರವನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಗೀತಾ ಮೂಲಿಮನಿ ಅವರ ಎರವಲು ಸೇವೆ ಕೋಡಲೇ ರದ್ದುಪಡಿಸಬೇಕು. ವಿದ್ಯಾರ್ಥಿಗಳ ಪಾಲಕರಲ್ಲದ ಅನಧಿಕೃತವಾದ ಶಾಲಾಭಿವೃದ್ಧಿ ಸಮಿತಿಯನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.

ಸಂಘಟನೆಯ ಜಿಲ್ಲಾ ಘಟಕ ಅಧ್ಯಕ್ಷ ಶಿವಕುಮಾರ ಮ್ಯಾಗಳಮನಿ, ಲಿಂಗಣ್ಣ, ಲಿಂಗರಾಜ ಕಂದಗಲ್, ಅಮರೇಶ, ಕಾಶಮ್ಮ, ನರಸಣ್ಣ ನಾಯಕ, ಶಬ್ಬೀರ್, ಗುರುನಾಯಕ, ರಾಜು, ವೆಂಕೋಬ, ಕೆ.ಜಿ.ವೀರೇಶ ಇದ್ದರು.

Tags: 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !