ಮಂಗಳವಾರ, ಸೆಪ್ಟೆಂಬರ್ 28, 2021
25 °C

ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿಂಧನೂರು: ಪೆಟ್ರೋಲ್, ಡೀಸೆಲ್‌, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕೆಪಿಸಿಸಿ ರಾಜ್ಯ ಘಟಕದ ಮಾಜಿ ಕಾರ್ಯದರ್ಶಿ ಕೆ.ಕರಿಯಪ್ಪ ನೇತೃತ್ವದಲ್ಲಿ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

‘ಕೇಂದ್ರ ಸರ್ಕಾರ ಜನಸಾಮಾನ್ಯರು, ಬಡವರ ಪರ ಇರುವ ಸರ್ಕಾರ ಅಲ್ಲ. ಬಡವರ ರಕ್ತ ಹೀರುವ ಸರ್ಕಾರ. ಜನ ಕೊರೊನಾ ಸಂಕಷ್ಟದಿಂದ, ಸಾವು-ನೋವಿನಿಂದ, ಆರ್ಥಿಕ ಸಮಸ್ಯೆಗಳಿಂದ ಸಾಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಗಾಯದ ಮೇಲೆ ಬರೆ ಎಳೆದಂತೆ ಪೆಟ್ರೋಲ್, ಡೀಸೆಲ್‌, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆಗಳನ್ನು ದಿನದಿಂದ ದಿನಕ್ಕೆ ಹೆಚ್ಚಿಸಿದರೆ ಬಡವರು ಬದುಕುವುದು ಹೇಗೆ’ ಎಂದು ಕೆಪಿಸಿಸಿ ರಾಜ್ಯ ಘಟಕದ ಮಾಜಿ ಕಾರ್ಯದರ್ಶಿ ಕೆ.ಕರಿಯಪ್ಪ ಪ್ರಶ್ನಿಸಿದರು.

‘ದೇಶದಲ್ಲಿ ಜನರಿಗೆ ತಪ್ಪು ಮಾಹಿತಿ ನೀಡಿ, ಸುಳ್ಳು ಹೇಳಿ ನರೇಂದ್ರ ಮೋದಿ ಅಧಿಕಾರ ಮಾಡುತ್ತಿದ್ದಾರೆ. ಚುನಾವಣೆ ಪೂರ್ವದಲ್ಲಿ ಕೊಟ್ಟ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ವಿದೇಶದಿಂದ ಕಪ್ಪು ಹಣ ವಾಪಾಸ್ ತಂದಿಲ್ಲ. ಜನಧನ್ ಖಾತೆಗೆ ₹ 15 ಲಕ್ಷ ಹಣ ಹಾಕಿಲ್ಲ. ವರ್ಷಕ್ಕೆ 2 ಕೋಟಿಯಂತೆ 7 ವರ್ಷಕ್ಕೆ 14 ಕೋಟಿ ಉದ್ಯೋಗ ಯುವಕರಿಗೆ ಸೃಷ್ಟಿಸಿಲ್ಲ. ರೈತರ ಹಿತಕ್ಕಾಗಿ ಸ್ವಾಮಿನಾಥನ್ ವರದಿ ಅನುಷ್ಠಾನ ಮಾಡಿಲ್ಲ. ದೇಶದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ, ಕೊಲೆ ನಿತ್ಯ ನಡೆಯುತ್ತಿದ್ದರೂ ರಕ್ಷಣೆ ಇಲ್ಲದಂತಾಗಿದೆ ‘ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಅಚ್ಛೇ ದಿನ್ ಶ್ರೀಮಂತರು ಸೇರಿದಂತೆ ಕಾರ್ಪೋರೇಟ್ ಕಂಪನಿಗಳಿಗೆ ಬಂದಿದೆ. ಮುಂಬರುವ ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ದೇಶದ ಜನತೆ ಮತದಾನದ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಯುವ ಕಾಂಗ್ರೆಸ್ ಉಪಾಧ್ಯಕ್ಷ ನಾಗರಾಜ ಬಾದರ್ಲಿ ಮನವಿ ಪತ್ರ ಓದಿ ಶಿರಸ್ತೇದಾರ್ ಅಂಬಾದಾಸ್‍ಗೆ ಸಲ್ಲಿಸಿದರು.

ಕಾಂಗ್ರೆಸ್ ಮುಖಂಡರಾದ ಎಚ್.ಎನ್.ಬಡಿಗೇರ್, ಅಬ್ದುಲ್ ಗನಿಸಾಬ ವಕೀಲ, ಎಸ್.ಎಂ.ಖಾದ್ರಿ, ಡಿ.ನಾಗವೇಣಿ, ಮಲ್ಲಮ್ಮ, ಶಬ್ಬೀರ್, ಎಚ್.ಜಗದೀಶ ವಕೀಲ ಮಾತನಾಡಿದರು.

ಕೆ.ಕರಿಯಪ್ಪ ಅಭಿಮಾನಿಗಳ ಬಳಗದ ಅಧ್ಯಕ್ಷ ಶ್ರೀನಿವಾಸ ವೈ, ಗೌರವಾಧ್ಯಕ್ಷ ಹಸೇನಪ್ಪ ಸೂಲಂಗಿ, ಉಪಾಧ್ಯಕ್ಷರಾದ ರಮೇಶ ಯಾದವ್, ದಾವಲಸಾಬ ದೊಡ್ಮನಿ, ಮಲ್ಲಪ್ಪ ಯಾದವ್, ಕಾರ್ಮಿಕ ಘಟಕ ಅಧ್ಯಕ್ಷ ಆದಿ ಮೇಸ್ತ್ರಿ, ಮಸ್ಕಿ ಯುವ ಕಾಂಗ್ರೆಸ್ ಅಧ್ಯಕ್ಷ ಹನುಮೇಶ ಬಾಗೋಡಿ, ಕರವೇ ಅಧ್ಯಕ್ಷ ಎಚ್.ಗಂಗಣ್ಣ, ಮುಖಂಡರಾದ ಎಸ್.ಎ.ಎಸ್.ಶ್ಯಾಮಣ್ಣ, ಮುತ್ತು ಬರಸಿ ಸೇರಿದಂತೆ ವಿವಿಧ ವಾರ್ಡುಗಳ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು