ಶುಕ್ರವಾರ, ಆಗಸ್ಟ್ 12, 2022
21 °C

ರಾಯಚೂರು: ಜಿಲ್ಲೆಯಲ್ಲಿ ಏಮ್ಸ್ ಸ್ಥಾಪನೆಗೆ ಗ್ರಾಮ ಮಟ್ಟದಿಂದ ಹೋರಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್ ) ಸ್ಥಾಪನೆ ಕುರಿತಂತೆ ತಾಲ್ಲೂಕು, ಹೋಬಳಿ, ಗ್ರಾಮ ಮಟ್ಟದಲ್ಲಿ ಸಂಘಟನೆ ಸಕ್ರಿಯಗೊಳಿಸಿ ರಾಯಚೂರು ಏಮ್ಸ್‌ ಹೋರಾಟ ಸಮಿತಿ ರಚಿಸಿದ್ದು, ಸೆಪ್ಟೆಂಬರ್ 16ಕ್ಕೆ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು ಎಂದು ಏಮ್ಸ್ ಹೋರಾಟ ಸಮಿತಿಯ ಸಂಚಾಲಕ ಬಸವರಾಜ ಕಳಸ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಐಐಟಿ ಸ್ಥಾಪನೆಗೆ ಒತ್ತಾಯಿಸಿ ಬೃಹತ್ ಮಟ್ಟದ ಹೋರಾಟ ಮಾಡಿದರೂ ರಾಜಕೀಯ ಪ್ರಾತಿನಿಧ್ಯ ದೊರೆಯದ ಕಾರಣ ಧಾರವಾಡದ ಪಾಲಾಯಿತು. ಸಾಕಷ್ಟು ಕ್ಷೇತ್ರದಲ್ಲಿ ಹಿಂದುಳಿದ ಜಿಲ್ಲೆಯಲ್ಲಿ ಏಮ್ಸ್ ಮಂಜುರಾತಿಗೆ ಒತ್ತಾಯಿಸಿ ರಾಜಕೀಯ ಮುಖಂಡರ, ಪತ್ರಕರ್ತರ, ಪ್ರಗತಿಪರ ಸಂಘಟನೆಗಳ ಮುಖಂಡರು ಒಳಗೊಂಡ ಸಮಿತಿ ರಚನೆ ಮಾಡಿ ಹೋರಾಟಕ್ಕೆ ಮುಂದಾಗಿದ್ದು ಐಐಟಿಯಂತೆ ಏಮ್ಸ್ ವಿಚಾರದಲ್ಲಿ ವೈಫಲ್ಯ ಕಾಣದಂತೆ ಕಾರ್ಯಯೋಜನೆ ರೂಪಿಸಲಾಗುವುದು ಎಂದರು.

ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಸಮಿತಿ ರಚನೆ ಹಾಗೂ ಪ್ರಮುಖ ನಿರ್ಣಯ ಕೈಗೊಂಡು ಚರ್ಚಿಸಲಾಗಿದೆ. ರಾಯಚೂರು ಒಂದೇ ಹೆಸರನ್ನು ಏಮ್ಸ್ ಎಂಬ ಧ್ಯೇಯದೊಂದಿಗೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿಕೊಡುವಂತೆ ಒತ್ತಾಯಿಸಲಾಗುವುದು. ಪ್ರತಿ ತಾಲ್ಲೂಕಿನಾದ್ಯಂತ ಸಂಚರಿಸಿ ತಾಲ್ಲೂಕು, ಗ್ರಾಮ ಮಟ್ಟದ ಹೋರಾಟ ಸಮಿತಿಗಳನ್ನು ರಚಿಸಲಾಗುವುದು ಎಂದು ತಿಳಿಸಿದರು.

ಆ ಮೂಲಕ ಹೋರಾಟ ತೀವ್ರಗೊಳಿಸಲಾಗುವುದು. ಐಐಐಟಿ ಕೈತಪ್ಪಿದ್ದರಿಂದ ರಾಜ್ಯ ಸರ್ಕಾರ ರಾಯಚೂರಿನಲ್ಲೇ ಏಮ್ಸ್ ಸ್ಥಾಪನೆಗೆ ಪ್ರಸ್ತಾವನೆ ಕಳುಹಿಸಿಕೊಡಬೇಕು. ಇದು ಅಸಮತೋಲನ ನೀಗಿಸುವಲ್ಲಿ ಪ್ರಮುಖ ಪಾತ್ರವಹಿಸಲಿದೆ. ಬಹುವರ್ಷಗಳ ಹಿಂದುಳಿಯುವಿಕೆಯ ಪಟ್ಟಿಯಿಂದ ಜಿಲ್ಲೆ ಹೊರಬರಬೇಕಾದರೆ ಏಮ್ಸ್ ಸ್ಥಾಪನೆ ಅನಿವಾರ್ಯವಾಗಿದೆ ಎಂದು ಹೇಳಿದರು.

ಸಮಿತಿಯಲ್ಲಿ ಜಿಲ್ಲೆಯ ಶಾಸಕರ, ಸಂಸದರು ಪಾಲ್ಗೊಂಡು ಅಭಿಪ್ರಾಯ ತಿಳಿಸಲು ಈಗಾಗಲೇ ಮಾತನಾಡಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಕೆಲ ಜನಪ್ರತಿನಿಧಿಗಳು ಹೋಮ್ ಕ್ವಾರಂಟೈನ್ ಹಾಗೂ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಕೆಲದಿನಗಳ ಕಾಲ ಕಾಯುತ್ತೇವೆ. ಐಐಟಿ ತಪ್ಪಿದ ಕಾರಣ ಕೇಂದ್ರ ಸಚಿವ ಸದಾನಂದ ಗೌಡ ಹಾಗೂ ಜಗದೀಶ ಶೆಟ್ಟರ್ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವ ಕಾರಣ ಒತ್ತಡ ಹೇರಿ ಜಿಲ್ಲೆಗೆ ಏಮ್ಸ್ ಮಂಜೂರು ಮಾಡಲು ಮನ ಒಲಿಸಲಾಗುವುದು ಎಂದರು.

ಹೋರಾಟಗಾರ ರಾಘವೇಂದ್ರ ಕುಷ್ಟಗಿ ಮಾತನಾಡಿ, ಜಿಲ್ಲೆಯ ಶಾಸಕರು, ಸಂಸದರು ಹಾಗೂ ಎಲ್ಲಾ ಜನಪ್ರತಿನಿಧಿಗಳು ತಮ್ಮ ರಾಜಕೀಯ ಜೀವನ ಸಾರ್ಥಕವಾಗಬೇಕಾದರೆ ಜಿಲ್ಲೆಗೆ ಏಮ್ಸ್ ಮಂಜೂರು ಮಾಡುವ ಹೋರಾಟಕ್ಕೆ ಕೈಜೋಡಿಸಿ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಹೇಳಿದರು.

ಹೋರಾಟಗಾರ ಅಂಬಣ್ಣ ಅರೋಲಿ, ಬಿಜೆಪಿ ಮುಖಂಡ ರವೀಂದ್ರ ಜಲ್ದಾರ್, ಶಿವಕುಮಾರ ಯಾದವ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು