ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜ.23ರಂದು ಸಂಸದರ ಕಚೇರಿ ಎದುರು ಪ್ರತಿಭಟನೆ: ಎಸ್. ವರಲಕ್ಷ್ಮಿ

Published 4 ಜನವರಿ 2024, 4:56 IST
Last Updated 4 ಜನವರಿ 2024, 4:56 IST
ಅಕ್ಷರ ಗಾತ್ರ

ರಾಯಚೂರು: ಕೇಂದ್ರ ಸರ್ಕಾರದ ಕಾರ್ಮಿಕ, ರೈತ, ಜನ ವಿರೋಧಿ ನೀತಿಗಳನ್ನು ವಿರೋಧಿಸಿ ಜನವರಿ 23ರಿಂದ ಮೂರು ದಿನಗಳ ಕಾಲ ಕಾರ್ಮಿಕ ವರ್ಗದಿಂದ ಸಂಸದರ ಕಚೇರಿ ಎದುರು ಪ್ರತಿಭಟನೆ ಮಾಡಲು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯುನಿಯನ್ಸ್ (ಸಿಐಟಿಯು) ನಿರ್ಧರಿಸಿದೆ ಎಂದು ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷೆ ಎಸ್.ವರಲಕ್ಷ್ಮಿ ಹೇಳಿದರು.

ದುಡಿಯುವ ಜನರ ಮೇಲೆ ಕೇಂದ್ರ ಸರ್ಕಾರ ದೌರ್ಜನ್ಯ ನಡೆಸುತ್ತಿದೆ. ಸರ್ಕಾರದ ನೀತಿಗಳು ಜನಜೀವನದ ಮೇಲೆ ಪರಿಣಾಮ ಬೀರಿದೆ. ರಾಜಕೀಯ ಬದಲಾವಣೆಯಿಂದ ಕೋಟ್ಯಂತರ ಜನರು ರೋಸಿ ಹೋಗಿದ್ದಾರೆ. ಹೀಗಾಗಿ ಸರ್ಕಾರದ ವಿರುದ್ಧ ಹೋರಾಟ ಅನಿವಾರ್ಯವಾಗಿದೆ ಎಂದು ಬುಧವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಮೂರು ದಿನಗಳ ಕಾಲ ನಡೆಯುವ ಪ್ರತಿಭಟನೆಯಲ್ಲಿ ಅಂಗನವಾಡಿ, ಬಿಸಿಯೂಟ, ಎನ್‌ಆರ್‌ಎಲ್‌ಎಂ, ಗ್ರಾಮೀಣ ಉದ್ಯೋಗ ಖಾತರಿಯ ಕಾರ್ಮಿಕರು, ಪೋಷಣ್‌ ಅಭಿಯಾನ, ಮಕ್ಕಳ ಹಕ್ಕುಗಳ ರಕ್ಷಣಾ ಘಟಕ(ಐಸಿಪಿಎಸ್), ಆಶಾ ಕಾರ್ಯಕರ್ತರು, ಎನ್‌ಎಚ್‌ಎಂ ಸಿಬ್ಬಂದಿ ಹಾಗೂ ಸರ್ಕಾರಿ ಯೋಜನೆಯ ಕಾರ್ಮಿಕರು ಪಾಲ್ಗೊಳ್ಳಲಿದ್ದಾರೆ ಎಂದರು.

ಸರ್ಕಾರದ ಜನವಿರೋಧಿ ನೀತಿಗಳು ಬದಲಾಗಬೇಕು. ರಾಜ್ಯದ ಕಾಂಗ್ರೆಸ್ ಸರ್ಕಾರವೂ ತನ್ನ ನೀತಿಗಳನ್ನು ಬದಲಿಸಿಕೊಳ್ಳಬೇಕು ಎಂದು ಒತ್ತಾಯಿಸಿ ಈಗಾಗಲೇ ಬೆಂಗಳೂರಿನಲ್ಲಿ ಧರಣಿ ನಡೆಸಿ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಈ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಿಗದಿಯಾಗಿದ್ದ ಸಭೆ ಮುಂದೂಡಲಾಗಿದೆ. ಅದನ್ನು ಕೂಡಲೇ ನಡೆಸಿ ರಾಜ್ಯದ ಕಾರ್ಮಿಕ ವರ್ಗದ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು. ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ರಾಜ್ಯ ಎರಡನೇ ಸ್ಥಾನದಲ್ಲಿದ್ದರೂ, ರಾಜ್ಯಕ್ಕೆ ಜಿಎಸ್‌ಟಿಯಲ್ಲಿ ದೊರಕಬೇಕಾದ ನ್ಯಾಯಯುತ ಪಾಲನ್ನು ಕೇಂದ್ರ ಸರ್ಕಾರ ಕೊಡಲು ನಿರಂತರವಾಗಿ ನಿರಾಕರಿಸುತ್ತಿದೆ ಎಂದು ಆರೋಪಿಸಿದರು.

ರಾಜ್ಯದ ಪಾಲನ್ನು ವೈಜ್ಞಾನಿಕವಾಗಿ ಹೆಚ್ಚಿಸಲು ಕೇಂದ್ರ ಸರ್ಕಾರ ನಿರಾಕರಿಸುತ್ತಿರುವುದನ್ನು ಹಾಗೂ ರಾಜ್ಯ ಸರ್ಕಾರದ ಮನವಿಗಳನ್ನು ಕೇಂದ್ರ ಸರ್ಕಾರ ತಿರಸ್ಕರಿಸುತ್ತಿರುವುದನ್ನು ರಾಜ್ಯದ‌ ಸಂಸದರು ಪ್ರಶ್ನಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಿಐಟಿಯು ಜಿಲ್ಲಾ ಘಟಕದ ಅಧ್ಯಕ್ಷೆ ಎಚ್.ಪದ್ಮಾ, ಡಿ.ಎಸ್. ಶರಣಬಸವ, ಶಬ್ಬೀರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT