ಶುಕ್ರವಾರ, ಡಿಸೆಂಬರ್ 4, 2020
24 °C
ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟೇಶಕುಮಾರ್ ಸೂಚನೆ

ಆರೋಗ್ಯ ಸಿಬ್ಬಂದಿ ಮಾಹಿತಿ ನೀಡಿ: ರಾಯಚೂರು ಜಿಲ್ಲಾಧಿಕಾರಿ ವೆಂಕಟೇಶಕುಮಾರ್ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಜಿಲ್ಲೆಯಲ್ಲಿ ಕೋವಿಡ್ ಹರಡುವುದನ್ನು ನಿಯಂತ್ರಣಕ್ಕೆ ತರಲು ಕೋವ್ಯಾಕ್ಸಿನ್ ಲಸಿಕೆಯನ್ನು ಪ್ರಥಮ ಹಂತದಲ್ಲಿ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ವಿತರಿಸಲು ಕೇಂದ್ರ ಸರ್ಕಾರ ನಿರ್ದೇಶನ ನೀಡಿದ್ದು, ಶೀಘ್ರವೇ ಸಿಬ್ಬಂದಿಯ ಸಂಪೂರ್ಣ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

 ಮಂಗಳವಾರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ವ್ಯಾಕ್ಸಿನ್ ಕುರಿತು ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ಕೋವ್ಯಾಕ್ಸಿನ್ ಅನ್ನು ಪ್ರಥಮವಾಗಿ ಆರೋಗ್ಯ ಸೇವೆಯ ಡಿ ಗ್ರೂಪ್ ನೌಕರರಿಂದ ವೈದ್ಯರವರೆಗೂ ನೀಡ ಬೇಕಿದ್ದು, ಅವರ ಸಂಪೂರ್ಣ ವಿವರವನ್ನು ಸಂಗ್ರಹಿಸಿ ಎರಡು ದಿನಗಳ ಒಳಗೆ ಗಣಕಯಂತ್ರದಲ್ಲಿ ಅಪ್‌ಲೋಡ್ ಮಾಡಬೇಕಾಗಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಕೋವಿಡ್ ಸೋಂಕಿತ ವ್ಯಕ್ತಿಗಳ ಜೊತೆ ನಿರಂತರ ಸಂಪರ್ಕದಲ್ಲಿ ಇರುವುದರಿಂದ ಅವರ ಆರೋಗ್ಯದ ಹಿತದೃಷ್ಠಿಯಿಂದ ಔಷಧಿಯನ್ನು ಪ್ರಥಮವಾಗಿ ಅವರಿಗೆ ವಿತರಿಸಬೇಕೆಂದು ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ ಎಂದರು.

 ಆರೋಗ್ಯ ಇಲಾಖೆ ವ್ಯಾಪ್ತಿಯ ಕ್ಲಿನಿಕ್, ನರ್ಸಿಂಗ್ ಹೋಮ್, ಆಸ್ಪತ್ರೆಗಳು, ಪ್ರಯೋಗಾಲಯ ಕೇಂದ್ರಗಳು, ಆರ್ಯುವೇದ ಆಸ್ಪತ್ರೆ ಮತ್ತು ಮೆಡಿಕಲ್ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯ ಸಂಪೂರ್ಣ ಮಾಹಿತಿ ಸಂಗ್ರಹಿಸಬೇಕು. ಆರೋಗ್ಯ ಇಲಾಖೆ, ಪೌರ ಕಾರ್ಮಿಕರು, ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ ಮತ್ತು ಪಂಚಾಯತ್ ರಾಜ್ಯ ಎಂಜನೀಯರಿಂಗ್ ಇಲಾಖೆಯಿಂದ ಕೋವ್ಯಾಕ್ಸಿನ್ ವಿತರಿಸಲಾಗುತ್ತದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಿದೆ. ಬೇರೆ ರಾಜ್ಯಗಳಲ್ಲಿ ಎರಡನೇ ಹಂತದ ಸೋಂಕು ಪ್ರಕರಣಗಳು ಪತ್ತೆಯಾಗುತ್ತಿ ರುವುದರಿಂದ ಕೇಂದ್ರ ಸರ್ಕಾರವು ಕೋವ್ಯಾಕ್ಸಿನ್  ಬಳಸುವಂತೆ ಸೂಚನೆ ನೀಡಿದೆ. ಹಬ್ಬ ಹರಿದಿನಗಳು, ಸಾಲು ಸಾಲು ರಜೆ ಇರುವುದರಿಂದ ಪಾಸಿಟಿವ್ ಪ್ರಕರಣಗಳು ಹೆಚ್ಚುವ ಸಂಭವವಿದೆ ಎಂದರು.  

ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ರಚಿಸಿ: ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ವಿತರಿಸಲು ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ರಚನೆ ಮಾಡಿಕೊಂಡು ವರದಿ ನೀಡಬೇಕು. ಎರಡನೇ ಹಂತದಲ್ಲಿ ಎಲ್ಲರಿಗೂ ಔಷಧಿ ವಿತರಿಸಲಾಗುವುದು ಎಂದರು. 

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು 15 ದಿನಗಳಗೊಮ್ಮೆ ಕೋವ್ಯಾಕ್ಸಿನ್ ಲಸಿಕೆ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲಿದ್ದಾರೆ. ಪ್ರತಿ ವಾರಕ್ಕೊಮ್ಮೆ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಲಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸಿಇಒ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಖಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ ,ಸಹಾಯಕ ಆಯುಕ್ತ ಸಂತೋಶ ಕಾಮಗೌಡ, ತಹಶೀಲ್ದಾರ ಹಂಪಣ್ಣ, ಆರೋಗ್ಯ ಇಲಾಖೆಯ ಅಧಿಕಾರಿಗಳು, ರಿಮ್ಸ್ ನಿರ್ದೇಶಕರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.