ರಾಯಚೂರು: ‘ ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಯೋಜನೆಗಳ ಸಮರ್ಪಕ ಅನುಷ್ಠಾನದ ಮೂಲಕ ಪ್ರಗತಿ ಸಾಧಿಸಬೇಕು‘ ಎಂದು ಜಿಲ್ಲಾಧಿಕಾರಿ ನಿತೀಶ ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮಗಳು ಹಾಗೂ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು, ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
‘ಇಲಾಖೆಯ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇಲಾಖೆಯ ಯೋಜನೆಗಳ ಅನುಷ್ಠಾನಕ್ಕೆ ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಿದಾಗ ಉತ್ತಮ ಫಲಿತಾಂಶ ದೊರೆಯಲಿದೆ‘ ಎಂದು ಹೇಳಿದರು.
‘ಜಿಲ್ಲೆಯಲ್ಲಿ ಒಟ್ಟು 2856 ಅಂಗನವಾಡಿ ಕೇಂದ್ರಗಳು, 32 ಮಿನಿ ಅಂಗನವಾಡಿ ಕೇಂದ್ರಗಳಿವೆ. ಇವುಗಳಲ್ಲಿ 2024-25ನೇ ಸಾಲಿನ ಜುಲೈ ಅಂತ್ಯಕ್ಕೆ 2,24,630 ಫಲಾನುಭವಿಗಳು ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ‘ ಎಂದು ತಿಳಿಸಿದರು.
‘ಅಂಗನವಾಡಿ ಕೇಂದ್ರಗಳ ಮೂಲಕ ಪೂರಕ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮ, ಚುಚ್ಚುಮದ್ದು ಕಾರ್ಯಕ್ರಮ, ಆರೋಗ್ಯ ತಪಾಸಣೆ, ತಾಯಂದಿರಿಗೆ ಆರೋಗ್ಯ ಮತ್ತು ಪೌಷ್ಟಿಕ ಶಿಕ್ಷಣ, ಶಾಲಾ ಪೂರ್ವ ಶಿಕ್ಷಣ ಹಾಗೂ ಮಾಹಿತಿ ಸೇವೆಯನ್ನು ಇಲಾಖೆಯಿಂದ ಒದಗಿಸಲಾಗುತ್ತಿದೆ‘ ಎಂದು ತಿಳಿಸಿದರು.
ಕೌಂಟಬಿಕ ದೌರ್ಜನ್ಯ ಯೋಜನೆ, ಬಾಲಕಿಯರ ವಸತಿ ಯೋಜನೆ, ಸಖಿ ಒನ್ ಸ್ಟಾಪ್ ಸೆಂಟರ್, ಒನ್ ಸ್ಟಾಪ್ ಸೆಂಟರ್, ಸ್ವಧಾರ ಕೇಂದ್ರ, ಸ್ವಧಾರ ಯೋಜನೆ, 2024ರ ಏಪ್ರಿಲ್ 1 ರಿಂದ ಜೂನ್ ವರೆಗಿನ ಬಾಲ್ಯವಿವಾಹ ಮಾಹಿತಿ, ಉದ್ಯೋಗ್ಯಸ್ಥ ಮಹಿಳೆಯರ ವಸತಿ ನಿಲಯದ ವಿವರ, ಮಿಷನ್ ಶಕ್ತಿ ಯೋಜನೆ ಸಭಾ ಕಾರ್ಯಸೂಚಿ, ಜಿಲ್ಲಾ ಮಹಿಳಾ ಸಬಲೀಕರಣ ಘಟಕದಿಂದ ನಡೆಯುತ್ತಿರುವ ಕಾರ್ಯಕ್ರಮಗಳು, 2023-24ನೇ ಸಾಲಿನ ಚೇತನ, ಧನಶ್ರೀ, ಉದ್ಯೋಗಿನಿ ಯೋಜನೆಯ ಫಲಾನುಭವಿಗಳ ಆಯ್ಕೆಯ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಬಾಲ್ಯ ವಿವಾಹ ತಡೆಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಸಲು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು. ಜಾಗೃತಿ ಸಭೆಗಳನ್ನೂ ನಡೆಸಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಹಿರಿಯ ಶ್ರೇಣಿ ದಿವಾನಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಎ.ಸಾತ್ವಿಕ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನವೀನಕುಮಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಸುರೇಂದ್ರ ಬಾಬು, ಜಿಲ್ಲಾ ಕೈಗಾರಿಕಾರಿ ಅಧಿಕಾರಿ ಬಸವರಾಜ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮುದುಕಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.