ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆಯಿಂದ ಹೊರಗುಳಿದ ಮಕ್ಕಳ ಮರು ಸಮೀಕ್ಷೆ

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ. ಆಂತೋನಿ ಸೆಬಾಸ್ಟಿಯನ್ ಸೂಚನೆ
Last Updated 27 ನವೆಂಬರ್ 2019, 14:51 IST
ಅಕ್ಷರ ಗಾತ್ರ

ರಾಯಚೂರು: ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ನಿರ್ದಿಷ್ಟವಾಗಿ ನಮೂದಿಸಬೇಕಾಗಿದೆ. ಮತ್ತೊಮ್ಮೆ ಸಮೀಕ್ಷೆ ನಡೆಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ. ಆಂತೋನಿ ಸೆಬಾಸ್ಟಿಯನ್ ಅವರು ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಜಲ ನಿರ್ಮಲ ಸಭಾಂಗಣದಲ್ಲಿ ಬುಧವಾರ ನಡೆದ ‘ಆರ್‌ಟಿಇ ಹಾಗೂ ಶಾಲೆ ಬಿಟ್ಟ ಮಕ್ಕಳ ಕುರಿತು ಶಿಕ್ಷಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆ’ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ 3.8 ಲಕ್ಷ ಮಕ್ಕಳಿದ್ದು, ಬಾಲಕಾರ್ಮಿಕ ಯೋಜನೆ ಪ್ರಕಾರ ಎರಡು ಸಾವಿರ ಮಕ್ಕಳು ಹಾಗೂ ಶಿಕ್ಷಣ ಇಲಾಖೆಯ ವರದಿಯಂತೆ 502 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಇದು ಸಮರ್ಪಕವಾಗಿ ಕಂಡುಬರುತ್ತಿಲ್ಲ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮತ್ತೊಮ್ಮೆ ಸಮೀಕ್ಷೆ ಮಾಡಿ ನಿಖರವಾದ ಸಂಖ್ಯೆಯನ್ನು ನೀಡುವಂತೆ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರು ಮಾತನಾಡಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಸಮೀಕ್ಷೆ ನಡೆಸಿ ಒಂದು ತಿಂಗಳೊಳಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ವರದಿ ಸಲ್ಲಿಸಬೇಕು ಎಂದು ತಿಳಿಸಿದರು.

ದೇವದುರ್ಗ ತಾಲ್ಲೂಕಿನಲ್ಲಿ ಹೆಚ್ಚಿನ ಮಕ್ಕಳು ವಲಸೆ ಹೋಗುತ್ತಿದ್ದಾರೆ. ಅವು ಜೀತ ಪದ್ದತಿಯೋ, ಬಾಲ್ಯ ವಿವಾಹವೋ ಅಥವಾ ನಾಪತ್ತೆ ಪ್ರಕರಣಗಳೋ ಎಂಬುದರ ಬಗ್ಗೆ ಸೂಕ್ತ ಮಾಹಿತಿ ಕಲೆ ಹಾಕಬೇಕು. ಈ ತಾಲ್ಲೂಕಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ನಿಖರ ಮಾಹಿತಿ ಪಡೆಯಬೇಕು. ಈ ಮಾಹಿತಿ ಸ್ಪಷ್ಟವಾಗಿ ನೀಡದಿದ್ದರೆ ಸಂಬಂಧಿಸಿದ ಶಿಕ್ಷಕರನ್ನೆ ಹೊಣೆಮಾಡುವಂತೆ ಆಯೋಗದ ಸದಸ್ಯ ಪರಶುರಾಮ ಅವರು ತಿಳಿಸಿದರು.

ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಆಟದ ಮೈದಾನ, ಶೌಚಾಲಯ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಆರ್‌ಟಿಇ ಯೋಜನೆಯಡಿ ಜಿಲ್ಲೆಗೆ 12 ಕೋಟಿ ಅನುದಾನ ನೀಡಲಾಗಿದ್ದು, 80 ಲಕ್ಷ ಬಾಕಿ ಉಳಿದಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗೋನಾಳ ಸಭೆಗೆ ತಿಳಿಸಿದರು.

ಆಯೋಗದ ಸದಸ್ಯ ರಾಘವೇಂದ್ರ ಅವರು ಮಾತನಾಡಿ, ಜಿಲ್ಲೆಯಲ್ಲಿ ಆರ್‌ಟಿಇಯಡಿ ಹೆಣ್ಣುಮಕ್ಕಳ ದಾಖಲಾತಿ ಕಡಿಮೆ ಇದೆ. ಲಿಂಗಾನುಪಾತವೇ ಕಡಿಮೆ ಇದೇಯೋ ಅಥವಾ ಹೆಣ್ಣು ಮಕ್ಕಳೇ ದಾಖಲಾಗುತ್ತಿಲ್ಲವೋ ಎಂಬ ಬಗೆ ಅಂಕಿ ಸಂಖ್ಯೆಯೊಂದಿಗೆ ನಿಖರ ವರದಿ ನೀಡಬೇಕು ಎಂದುರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡುವಂತೆ ಅವರು ತಾಕೀತು ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ದುರಗೇಶ್, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT