ಶುಕ್ರವಾರ, ಮಾರ್ಚ್ 31, 2023
32 °C
ಶಾಸಕ ಬಸನಗೌಡ ದದ್ದಲ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಸಭೆ

ಗಡಿಭಾಗದಲ್ಲಿ ಕಟ್ಟೆಚ್ಚರಕ್ಕೆ ಸೂಚನೆ: ಶಾಸಕ ಬಸನಗೌಡ ದದ್ದಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಲಾಕ್‌ಡೌನ್‌ ಸಡಿಲಿಕೆ ಆಗಿರುವುದರಿಂದ ಬೇರೆ ರಾಜ್ಯಗಳಿಂದ ಮತ್ತು ಜಿಲ್ಲೆಗಳಿಂದ ಜನರು ಸರಾಗವಾಗಿ ಬರುತ್ತಿದ್ದಾರೆ. ಡೆಲ್ಟಾಪ್ಲಸ್‌ ಸೋಂಕು ತಡೆಗೆ ಗಡಿಭಾಗಗಳಲ್ಲಿ ಕಟ್ಟೆಚ್ಚರ ವಹಿಸುವುದು ಅಗತ್ಯವಿದೆ ಎಂದು ಶಾಸಕ ಬಸನಗೌಡ ದದ್ದಲ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ರಾಯಚೂರು ಗ್ರಾಮೀಣ ಕ್ಷೇತ್ರದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೈಲ್ವೆ ನಿಲ್ದಾಣ ಹಾಗೂ ಶಕ್ತಿನಗರ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಕೇಂದ್ರಗಳನ್ನು ಆರಂಭಿಸಬೇಕು. ರೋಗದ ಲಕ್ಷಣಗಳಿರುವ ಜನರನ್ನು ಕ್ವಾರಂಟೈನ್‌ ಮಾಡುವ ವ್ಯವಸ್ಥೆ ಜಾರಿಗೊಳಿಸಬೇಕು. ಕೋವಿಡ್‌ ಆತಂಕವಿಲ್ಲದೆ ಜನರು ಸಂಚರಿಸುತ್ತಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿದರು.

ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾತನಾಡಿ, ಗ್ರಾಮೀಣ ಭಾಗಗಳಲ್ಲಿ ಮತ್ತು ಕಾಲೇಜುಗಳಲ್ಲಿ ವ್ಯಾಪಕವಾಗಿ ಲಸಿಕೆ ನೀಡಲಾಗುತ್ತಿದೆ. 18 ವರ್ಷ ಮೇಲ್ಪಟ್ಟವರಿಗೆಲ್ಲ ಲಸಿಕೆ ನೀಡಲಾಗುತ್ತಿದೆ ಎಂದರು.

ಕೃಷಿ ಇಲಾಖೆಯ ಅಧಿಕಾರಿಗಳು ಮಾತನಾಡಿ, ಆಕಸ್ಮಿಕವಾಗಿ ಅಥವಾ ಆತ್ಮಹತ್ಯೆಗೆ ಶರಣಾದ ರೈತರ ಕುಟುಂಬಗಳಿಗೆ ₹5 ಲಕ್ಷ ಪರಿಹಾರ ವಿತರಿಸಲಾಗುತ್ತಿದೆ. ಬಣವೆಗಳು ಸುಟ್ಟಿರುವ ಘಟನೆಗಳನ್ನು ಪರಿಶೀಲಿಸಿ ₹200 ರಿಂದ ₹20 ಸಾವಿರದವರೆಗೂ ಪರಿಹಾರ ನೀಡಲಾಗುತ್ತಿದೆ ಎಂದು ತಿಳಿಸಿದರು.

ಶಾಸಕ ಬಸನಗೌಡ ದದ್ದಲ ಮಾತನಾಡಿ, ಬಣವೆಗೆ ನೀಡುವ ಪರಿಹಾರ ಸಾಕಾಗುವುದಿಲ್ಲ. ಕೂಡಲೇ ಅದನ್ನು ಹೆಚ್ಚಳ ಮಾಡುವುದಕ್ಕೆ ಕ್ರಮ ವಹಿಸಬೇಕು ಎಂದರು.

ಗ್ರಾಮೀಣ ಭಾಗಗಳಲ್ಲಿ ಅಕ್ರಮ ಮಧ್ಯೆ ಮಾರಾಟವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಸಮರ್ಪಕವಾಗಿ ತಡೆಗಟ್ಟುತ್ತಿಲ್ಲ. ಖಾಸಗಿಯವರು ತಮ್ಮ ಅಂಗಡಿಗಳಲ್ಲಿ ಮದ್ಯ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದಾರೆ. ಗ್ರಾಮೀಣ ಭಾಗಗಳಲ್ಲಿ ಎಂಎಸ್‌ಐಎಲ್‌ ಆರಂಭಿಸುವುದಕ್ಕೆ ಪರವಾನಗಿ ನೀಡಬೇಕು ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ, ತಹಶೀಲ್ದಾರ್‌ ಡಾ.ಹಂಪಣ್ಣ ಸಜ್ಜನ್‌, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮರೆಡ್ಡಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು