ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಮರಳು ಸಾಗಣೆ ತಡೆಗೆ ನಿಗಾ ವಹಿಸಿ: ಹಾಲಪ್ಪ ಆಚಾರ್‌

ಗಣಿ ಮತ್ತು ಭೂವಿಜ್ಞಾನ ಸಚಿವ ಹಾಲಪ್ಪ ಆಚಾರ್‌ ಸೂಚನೆ
Last Updated 28 ಏಪ್ರಿಲ್ 2022, 15:35 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಣಿಕೆ ತಡೆಗಟ್ಟಲು ಚೆಕ್ ಪೋಸ್ಟ್‌ಗಳನ್ನು ಬಿಗಿಗೊಳಿಸುವುದರ ಜೊತೆಗೆ ವಿಶೇಷ ನಿಗಾವಹಿಸುವಂತೆ ಗಣಿ ಮತ್ತು ಭೂವಿಜ್ಞಾನ ಸಚಿವ ಹಾಲಪ್ಪ ಆಚಾರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆ ತಡೆಯಲು ಈ ಬಗ್ಗೆ ತೀವ್ರ ನಿಗಾವಹಿಸಬೇಕು. ಟಾಸ್ಕ್ ಫೋರ್ಸ್ ಸಮಿತಿ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಬೇಕು.

ಮರಳು ನಿಯಮ ಬಾಹಿರ ಸಾಗಾಟ ನಡೆಯಬಾರದು. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಸಲ್ಲಿಸಬೇಕಾದ ರಾಜಧನ ಹಾಗೂ ಮತ್ತಿತರ ತೆರಿಗೆ ಹಣ ಸಮರ್ಪಕವಾಗಿ ಪಾವತಿ ಆಗುತ್ತಿಲ್ಲ. ಎಲ್ಲ ಅಧಿಕಾರಿಗಳು ಕೈ ಜೋಡಿಸಿದಾಗ ಮಾತ್ರ ಸರ್ಕಾರದ ಬೊಕ್ಕಸಕ್ಕೆ ರಾಜಧನ ಸಂದಾಯವಾಗುತ್ತದೆ ಎಂದರು.

ಜಿಲ್ಲೆಯಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆಗಳನ್ನು ನಿಗದಿತ ಸಮಯದಲ್ಲಿ ನಡೆಸುವಂತಾಗಬೇಕು. ಕಂದಾಯ, ಪೊಲೀಸ್, ಅರಣ್ಯ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಅನಧಿಕೃತ ಗಣಿಗಾರಿಕೆ, ಸಾಗಾಣಿಕೆ, ದಾಸ್ತಾನು ಬಗ್ಗೆ ಕ್ರಮ ಕೈಗೊಳ್ಳಬೇಕು. ಅದರಂತೆ ಅನುಮತಿಗಾಗಿ ಬರುವ ಅರ್ಜಿಗಳನ್ನು ಕಾರಣವಿಲ್ಲದೆ ತಿರಸ್ಕೃತಗೊಳಿಸದಂತೆ ಅವರು ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಮಾತನಾಡಿ, ಅಕ್ರಮ ಮರಳು ಗಣಿಗಾರಿಕೆಗೆ ತಡೆಗೆ ಪೊಲೀಸ್ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.

ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳ ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕು. ವಿಶೇಷವಾಗಿ ಗ್ರಾಮ ಪಂಚಾಯತಗಳ ಮೂಲಕ ಯಾವುದೇ ಅಂಗನವಾಡಿ ಕೇಂದ್ರಗಳಿಗೆ ನೀರಿನ ಪೂರೈಕೆಯಾಗಿಲ್ಲ. ಎಂದು ದೂರು ಬರಬಾರದು. ಮಾನವೀಯತೆ ಮತ್ತು ಮಕ್ಕಳ ಹಿತದೃಷ್ಟಿಯಿಂದ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಶಾಲೆಗಳು ಮತ್ತು ಅಂಗನವಾಡಿ ಕಟ್ಟಡಗಳಿಗೆ ವಿಶೇಷ ಗಮನ ನೀಡುವಂತೆ ಸಚಿವರು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಅಂಗನವಾಡಿ ಕೇಂದ್ರಗಳಿಗೆ ಗುಣಮಟ್ಟದ ಮತ್ತು ಸಮರ್ಪಕ ಆಹಾರ ಪೂರೈಕೆಯಾಗಬೇಕು. ಅಪೌಷ್ಟಿಕ ಮಕ್ಕಳ ಆರೋಗ್ಯ ನಿರ್ವಹಣೆಗೆ ವಿಶೇಷ ಗಮನ ನೀಡಬೇಕು. ಅದರಂತೆ ಗರ್ಭಿಣಿ ಬಾಣಂತಿಯರ ಅಪೌಷ್ಟಿಕತೆ ನಿವಾರಣೆಗೆ ಮೇಲ್ವಿಚಾರಣೆ ನಡೆಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಪೋಸ್ಕೋ ಕಾಯ್ದೆ ಹಾಗೂ ಅತ್ಯಾಚಾರ ಪ್ರಕರಣಗಳ ಸೇರಿದಂತೆ ಇತರೆ ಪ್ರಕರಣದಲ್ಲಿ ಒಟ್ಟು 39 ಪ್ರಕರಣ ದಾಖಲೆ ಮಾಡಿಕೊಳ್ಳಲಾಗಿದೆ ಎಂದು ಸಚಿವರಿಗೆ ಅಧಿಕಾರಿಗಳು ಮಾಹಿತಿ ನೀಡಿದರು.

ಶಾಸಕ ಬಸನಗೌಡ ದದ್ದಲ್ ಅವರು ಮಾತನಾಡಿ, ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಬಂದು ಹಲವು ವರ್ಷಗಳೇ ಕಳೆದಿವೆ. ಆದರೆ ಇನ್ನೂವರಿಗೂ ಜಿಲ್ಲೆಯಲ್ಲಿ ಹೊಸ ಮರಳು ನೀತಿ ಅನುಷ್ಠಾನಗೊಳಿಸಿಲ್ಲ ಈ ಬಗ್ಗೆ ಸಚಿವರು ಗಮನ ಹರಿಸುವಂತೆ ಹೇಳಿದರು.

ಶಾಸಕ ಡಾ.ಎಸ್.ಶಿವರಾಜ ಪಾಟೀಲ್, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ. ರೇಜು, ಮಹಿಳಾ ಆಯೋಗದ ಅಧ್ಯಕ್ಷ ಡಾ.ಜಯಲಕ್ಷ್ಮಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರುಗೇಶ್, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಜಯಶ್ರೀ ಚನ್ನಾಳ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT