ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಂಗಭದ್ರಾ ಎಡದಂಡೆ ಕಾಲುವೆಗಳಿಗೆ ನೀರು ಹರಿಸಿ: ಕೃಷ್ಣ ಬಾಜಪೇಯಿ

Published 29 ಆಗಸ್ಟ್ 2023, 10:05 IST
Last Updated 29 ಆಗಸ್ಟ್ 2023, 10:05 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ರಾಯಚೂರು: ‘ತುಂಗಭದ್ರಾ ಎಡದಂಡೆ ಕಾಲುವೆ ವ್ಯಾಪ್ತಿಯ ಕೊನೆ ಭಾಗದ ರೈತರ ಹೊಲಗಳಿಗೆ ಸಮರ್ಪಕವಾಗಿ ನೀರು ಹರಿಸಬೇಕು. ಅಕ್ರಮವಾಗಿ ನೀರು ಬಿಟ್ಟುಕೊಳ್ಳುವ ಹಾಗೂ ಪಂಪ್‌ಸೆಟ್‌ ಅಳವಡಿಸಿರುವ ವ್ಯಕ್ತಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು’ ಎಂದು ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತುಂಗಭದ್ರಾ ಎಡದಂಡೆ ಕಾಲುವೆಗಳಿಗೆ ನೀರು ಹರಿಸುವ ಸಂಬಂಧ ರೈತ ಮುಖಂಡರೊಂದಿಗೆ ನಡೆಸಿದ ಸಭೆಯಯಲ್ಲಿ ಅವರು ಮಾತನಾಡಿದರು.

‘ಕಾಲುವೆ ನೀರು ಬಿಟ್ಟುಕೊಳ್ಳುವ ಉದ್ದೇಶದಿಂದ ಅಕ್ರಮವಾಗಿ ಪಂಪ್‍ಸೆಟ್‍ಗಳನ್ನು ಅಳವಡಿಸಲು ಸ್ಥಾಪಿಸಿಕೊಂಡಿರುವ ವಿದ್ಯುತ್ ಪರಿವರ್ತಕಗಳನ್ನು ವಶಪಡಿಸಿಕೊಳ್ಳಬೇಕು’ ಎಂದು ಆದೇಶ ನೀಡಿದರು.

‘ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆಯ ಎಲ್ಲ ವಿತರಣಾ ಕಾಲುವೆಗಳಲ್ಲಿ ನಿಗದಿತ ಗೇಜ್ ಅನ್ವಯ ನೀರು ಒದಗಿಸಬೇಕು. ಸಿರವಾರ ವಿಭಾಗದಲ್ಲಿ ನಿಗದಿತ ಗೇಜ್ ನಿರ್ವಹಣೆಯಾಗದ ಹಿನ್ನೆಲೆಯಲ್ಲಿ ಕೆಳಭಾಗದ ರೈತರಿಗೆ ನೀರು ಸಮರ್ಪಕವಾಗಿ ದೊರೆಯುತ್ತಿಲ್ಲ. ಆದ್ದರಿಂದ ಗೇಜ್ ನಿರ್ವಹಣೆಯಲ್ಲಿ ಆಗಿರುವ ಸಮಸ್ಯೆಯನ್ನು ಅಧಿಕಾರಿಗಳು ಕೂಡಲೇ ಸರಿಪಡಿಸಬೇಕು’ ಎಂದು ತಿಳಿಸಿದರು.

‘ಕಾಲುವೆ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಿದರೂ ಅನಧಿಕೃತವಾಗಿ ಕಾಲುವೆ ನೀರನ್ನು ಪಂಪ್‍ಸೆಟ್‍ಗಳಿಂದ ಬಿಟ್ಟುಕೊಳ್ಳುವ ಮಾಹಿತಿ ಬಂದಿದೆ. ಪಂಪ್‍ಸೆಟ್‍ಗಳಿಗೆ ಪರವಾನಗಿ ಇಲ್ಲದ ಟಿಸಿಗಳನ್ನು ಅಳವಡಿಸಲಾಗಿದೆ. ವಿದ್ಯುತ್ ಪರಿವರ್ತಕಗಳಿಗೆ ಹೆಚ್ಚಿನ ಸಾಮರ್ಥ್ಯದ ಪಂಪ್‍ಸೆಟ್‍ಗಳನ್ನು ಅಳವಡಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು’ ಎಂದು ಸೂಚಿಸಿದರು.

‘ನೀರಿನ ಪ್ರಮಾಣ ತಿಳಿಯಲು ಟೆಲಿಮೀಟರ್‌ಗಳನ್ನು ಅಳವಡಿಸಲಾಗಿದೆ. ಕೆಟ್ಟುಹೋದ ಟೆಲಿಮೀಟರ್‌ಗಳನ್ನು 7 ದಿನಗಳೊಳಗೆ ದುರಸ್ತಿಗೊಳಿಸಬೇಕು. ಕಾಲುವೆಗಳ ಎಡಭಾಗದಲ್ಲಿ ರಸ್ತೆ ನಿರ್ಮಾಣ ಮಾಡಿ ಅಕ್ರಮ ನೀರು ಹರಿಸುವಿಕೆ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು. ರೈತರಿಗೆ ಯಾವುದೇ ರೀತಿಯಲ್ಲಿ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.

ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಮಾನ್ವಿ ಶಾಸಕ ಹಂಪಯ್ಯ ನಾಯಕ, ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಲಿಂಗಸುಗೂರು ಉಪಾವಿಭಾಗಾಧಿಕಾರಿ ಶಿಂಧೆ ಅವಿನಾಶ, ಪ್ರೊಬೇಷನರಿ ಐಎಎಸ್ ಅಧಿಕಾರಿ ಸಾಹಿತ್ಯ ಆಲದಕಟ್ಟಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ, ರಾಯಚೂರು ಉಪಾವಿಭಾಗಾಧಿಕಾರಿ ಮೆಹಬೂಬಿ, ರೈತ ಮುಖಂಡರಾದ ಚಾಮರಸ ಮಾಲಿ ಪಾಟೀಲ, ಹರವಿ ಶಂಕರಗೌಡ, ಹರವಿ ನಾಗನಗೌಡ, ಗಂಗಾಧರ ನಾಯಕ, ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT