ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಿನ್ನಾಭಿಪ್ರಾಯ ಬದಿಗಿರಿಸಿ, ಪಕ್ಷದ ಅಭ್ಯರ್ಥಿ ಗೆಲ್ಲಿಸಿ

ಬಿಜೆಪಿ ಸಂಘಟನಾತ್ಮಕ ಸಭೆಯಲ್ಲಿ ಉಸ್ತುವಾರಿ ಅಗರವಾಲ್ ಮನವಿ
Published 13 ಏಪ್ರಿಲ್ 2024, 15:48 IST
Last Updated 13 ಏಪ್ರಿಲ್ 2024, 15:48 IST
ಅಕ್ಷರ ಗಾತ್ರ

ರಾಯಚೂರು: ‘ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಗೆಲುವಿಗೆ ಭಿನ್ನಾಭಿಪ್ರಾಯ ಬದಿಗೊತ್ತಿ ಜವಾಬ್ದಾರಿ ನಿರ್ವಹಿಸಬೇಕು’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣೆ ಉಸ್ತುವಾರಿ ರಾಧಾ ಮೋಹನದಾಸ ಅಗರವಾಲ್ ಮನವಿ ಮಾಡಿದರು.

ನಗರದ ಖಾಸಗಿ ಹೋಟೆಲ್‍ನಲ್ಲಿ ಶನಿವಾರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಏರ್ಪಡಿಸಿದ್ದ ಸಂಘಟನಾತ್ಮಕ ಸಭೆಯಲ್ಲಿ ಅವರು ಮಾತನಾಡಿದರು.

‘ಪಕ್ಷದಲ್ಲಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಮುಂದಾಗಬೇಕು. ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕು. ಮುಂದಿನ ದಿನಗಳಲ್ಲಿ ಬಿ.ವಿ.ನಾಯಕ ಅವರಿಗೆ ಉನ್ನತ ಸ್ಥಾನಮಾನ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಮಾಜಿ ಸಂಸದ ಬಿ.ವಿ.ನಾಯಕ ಮಾತನಾಡಿ,‘ಸ್ಥಾನಮಾನ ಪಡೆಯಲು ಆತ್ಮಗೌರವ ಇರಬೇಕು. ಮುಖಂಡರು ಪಕ್ಷದ ಲಕ್ಷ್ಮಣ ರೇಖೆಯನ್ನು ದಾಟಬಾರದು. ಕೆಲವು ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರ ಅಭಿಪ್ರಾಯವನ್ನೂ ಗೌರವಿಸಬೇಕು’ ಎಂದು ಹೇಳಿದರು.

‘ನಾನು ರಾಯಚೂರು ಲೋಕಸಭಾ ಕ್ಷೇತ್ರ ಟಿಕೆಟ್ ಆಕಾಂಕ್ಷಿಯಾಗಿರಲಿಲ್ಲ. ಆದರೆ, ಪಕ್ಷದ ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಟಿಕೆಟ್ ಪಡೆಯಲು ಮುಂದಾಗಿದ್ದೆ. ಆದರೆ, ಈ ರೀತಿಯ ಬೆಳವಣಿಗೆಯಿಂದಾಗಿ ಮನಸ್ಸಿಗೆ ಬೇಸರವಾಗಿದೆ’ ಎಂದು ಹೇಳಿದರು.

‘ಪಕ್ಷದ ಹೈಕಮಾಂಡ್ ಯಾವುದೇ ಜವಾಬ್ದಾರಿಯನ್ನು ವಹಿಸಿದರೂ ನಿರ್ವಹಿಸಲಾಗುವುದು. ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಲಾಗುವುದು’ ಎಂದು ತಿಳಿಸಿದರು.

ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಮಾತನಾಡಿ, ‘ಈ ಚುನಾವಣೆ ಯಾವುದೇ ವ್ಯಕ್ತಿಯ ಚುನಾವಣೆಯಲ್ಲ. ದೇಶದ ಚುನಾವಣೆಯಾಗಿದೆ. ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಂಟು ಕ್ಷೇತ್ರಗಳಿದ್ದು, ಎಲ್ಲರನ್ನೂ ಭೇಟಿಯಾಗಲು ಸಾಧ್ಯವಾಗದೇ ಇರಬಹುದು. ಯಾರೂ ಅನ್ಯತಾ ಭಾವಿಸಬಾರದು. ನನ್ನಿಂದ ಯಾವುದೇ ಸಣ್ಣಪುಟ್ಟ ತಪ್ಪುಗಳಾಗಿದ್ದರೂ ಅದನ್ನು ಸರಿಪಡಿಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಎದುರಿಸುವೆ’ ಎಂದರು.

ಮಾಜಿ ಸಚಿವ ಕೆ.ಶಿವನಗೌಡ ನಾಯಕ, ಬಿಜೆಪಿ ರಾಜ್ಯ ಕಾರ್ಯದರ್ಶಿ ಪಿ.ರಾಜೀವ್, ಮಾಜಿ ಸಚಿವ ರಾಜೂಗೌಡ, ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶಿವರಾಜ ಪಾಟೀಲ ಮಾತನಾಡಿದರು.

ಮಾಜಿ ಶಾಸಕ ತಿಪ್ಪರಾಜು ಹವಲ್ದಾರ್, ಬಸನಗೌಡ ಬ್ಯಾಗವಾಟ್, ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಶಂಕರಪ್ಪ ವಕೀಲ, ಮುಖಂಡರಾದ ತ್ರಿವಿಕ್ರಮ ಜೋಶಿ, ರಾಘವೇಂದ್ರ ಕುಟ್ಕೂರು ಉ‍ಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT