ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣಕ್ಕೆ ಆದ್ಯತೆ ನೀಡುವಂತೆ ಎಸ್ಎಫ್ಐ ಪ್ರತಿಭಟನೆ

Last Updated 3 ಮಾರ್ಚ್ 2020, 14:17 IST
ಅಕ್ಷರ ಗಾತ್ರ

ರಾಯಚೂರು: ರಾಜ್ಯ ಬಜೆಟ್‌ನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾ ಪಂಚಾಯಿತಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಪತ್ರ ರವಾನಿಸಿದರು. ಮಾರ್ಚ್ 5 ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್‌ನಲ್ಲಿ ಶೈಕ್ಷಣಿಕ ವರ್ಷದ ವ್ಯಾಸಂಗ ಮಾಡುತ್ತಿರುವ ಎಲ್ಲಾ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡಬೇಕು. ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು. ರಾಜ್ಯದಲ್ಲಿ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಪ್ರತಿದಿನದ ಮೂರು ಹೊತ್ತಿನ ಊಟಕ್ಕೆ ಕೇವಲ ₹50 ರಂತೆ ತಿಂಗಳಿಗೆ ₹1600 ನೀಡಲಾಗುತ್ತಿದೆ. ಆಹಾರ ಪದಾರ್ಥಗಳು, ಗ್ಯಾಸ್, ಬೆಲೆ ಏರಿಕೆಯಾಗಿದ್ದರೂ ಕೂಡ ಹಾಸ್ಟೆಲ್ ವಿದ್ಯಾರ್ಥಿಗಳ ಆಹಾರ ಭತ್ಯೆ ಹೆಚ್ಚಿಸಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಮಾಸಿಕ ಆಹಾರ ಭತ್ಯೆ ಕನಿಷ್ಠ ₹3500 ಗಳಿಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಕೇರಳ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ₹900 ಕೋಟಿ ಶೈಕ್ಷಣಿಕ ಸಾಲ ಮನ್ನಾ ಮಾಡಿದ ಮಾದರಿಯಲ್ಲಿ ರಾಜ್ಯ ಸರ್ಕಾರ ಶಿಕ್ಷಣದ ಶುಲ್ಕ ಪಾವತಿಗೆ ಶೈಕ್ಷಣಿಕ ಸಾಲ ಮಾಡಿರುವ ಎಲ್ಲಾ ವರ್ಗದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮನ್ನಾ ಮಾಡಬೇಕು. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಶಿಕ್ಷಣ ತಜ್ಞ ಕೊಥಾರಿ ಆಯೋಗದ ಶಿಫಾರಸಿನಂತೆ ಬಜೆಟ್‌ನಲ್ಲಿ ಕನಿಷ್ಠ ಶೇ30 ರಷ್ಟು ಹಣ ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಬೇಕು ಎಂದು ಆಗ್ರಹಿಸಿದರು.

ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಶಾಸಕರು ಮತ್ತು ಉಸ್ತುವಾರಿ ಸಚಿವರು ಬಜೆಟ್ ಅಧಿವೇಶನದಲ್ಲಿ ಧ್ವನಿ ಎತ್ತಬೇಕು. ಇಲ್ಲದೇ ಹೋದಲ್ಲಿ ರಾಜ್ಯದಾದ್ಯಂತ ವಿದ್ಯಾರ್ಥಿಗಳ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಎಸ್ಎಫ್ಐ ರಾಜ್ಯ ಉಪಾಧ್ಯಕ್ಷ ಶಿವಕುಮಾರ ಮ್ಯಾಗಳಮನಿ, ಲಿಂಗರಾಜ ಕಂದಗಲ, ದಿಲ್ಶಾದ, ಬಸವರಾಜ, ಉಮೇಶ, ಮಹೇಶ್ವರಿ, ಅಮರೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT