ಗುರುವಾರ , ಮೇ 26, 2022
30 °C
ಪ್ರತಿಭಾ ಪುರಸ್ಕಾರ ಪ್ರಧಾನ ಸಮಾರಂಭ

ಅವಕಾಶ ಸದ್ಬಳಕೆ ಮಾಡಿಕೊಂಡು ಯಶಸ್ವಿಯಾಗಿ: ಲಕ್ಷ್ಮೀ ನಾರಾಯಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಸಮಸ್ಯೆಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬರಿಗೂ ಸಾಕಷ್ಟು ಅವಕಾಶಗಳು ಸಿಗುತ್ತವೆ. ಅವುಗಳನ್ನು ಬಳಸಿಕೊಳ್ಳಬೇಕು. ಜೀವನದಲ್ಲಿ ದೊಡ್ಡ ಗುರಿ ಹಾಗೂ ಕಠಿಣ ಪರಿಶ್ರಮವಹಿಸಿದರೆ ಯಶಸ್ವಿ ವ್ಯಕ್ತಿಯಾಗಲು ಸಾಧ್ಯ ಎಂದು ಶಿಕ್ಷಣ ಪ್ರೇಮಿ ಹೆಣ್ಣೂರು ಲಕ್ಷ್ಮೀನಾರಾಯಣ ಅಭಿಪ್ರಾಯಪಟ್ಟರು.

ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾ ಘಟಕದಿಂದ ಶನಿವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಯುವಕರು ದುಶ್ಚಟಗಳಿಗೆ ಬಲಿಯಾಗಿ ತಮ್ಮ ಬಾಳು ಹಾಳು ಮಾಡಿಕೊಳ್ಳುವುದು ವಿಷಾದನೀಯ. ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯ ಬೆಳೆಸಬೇಕು. ಉತ್ತಮ ಶಿಕ್ಷಣ ಪಡೆದುಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು. ಯಾವುದೇ ಸಮಾಜ ಅಭಿವೃದ್ಧಿಯಾಗಬೇಕಾದರೆ ಶಿಕ್ಷಣ ಮುಖ್ಯ ಅಸ್ತ್ರವಾಗಿದೆ. ಶಿಕ್ಷಣದಿಂದಲೇ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ಶಿಕ್ಷಣ ಪಡೆದ ವಿದ್ಯಾರ್ಥಿಗಳು ಸಮಾಜದ ಅಭಿವೃದ್ಧಿಗೆ ಕೆಲಸ ಮಾಡಿ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.

ಪ್ರೋಬೇಷನರಿ ತಹಸೀಲ್ದಾರ್ ತಿರುಪತಿ ಅವರು ವಿಶೇಷ ಉಪನ್ಯಾಸ ನೀಡಿದರು. ನಿವೃತ್ತ ಪಿಎಸ್‍ಐ ರಾಮಣ್ಣ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಹೆಚ್ಚು ಅಂಕಗಳಿಸಿದ ಮಾದಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವಾಣಿಜ್ಯ, ತೆರಿಗೆ ಇಲಾಖೆ ಸಹಾಯಕ ಆಯುಕ್ತ ಚಂದ್ರಶೇಖರ, ನಾಗರಾಜ ಕೋಡಿಗೆಹಳ್ಳಿ, ಗಣಪತಿ ಸಾಕ್ರೆ, ಕೃಷ್ಣಾ ಶಾವಂತಗೇರಾ, ಮಾದಿಗ ಸಮಾಜದ ಮುಖಂಡ ವಿಜಯ ಚಕ್ರವರ್ತಿ, ಸಿ.ಮುನಿಕೃಷ್ಣಯ್ಯ, ದಾನಪ್ಪಮಸ್ಕಿ, ಅಂಬಣ್ಣ ಅರೋಲಿಕರ್, ರಾಘವೇಂದ್ರ ಬೋರೆಡ್ಡಿ, ಹೇಮರಾಜ ಅಸ್ಕಿಹಾಳ, ಎಸ್.ರಾಜು, ಕೆ.ಪಿ.ಅನಿಲ ಕುಮಾರ, ಜನಾರ್ಧನ ಹಳ್ಳಿಬೆಂಚಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು