ಗುರುವಾರ , ಮೇ 19, 2022
24 °C

ಗುಲ್ಬರ್ಗ ವಿವಿ ಅಕ್ರಮ ತಡೆಯಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಅನೇಕ ಅಕ್ರಮ, ಅವ್ಯವಹಾರಗಳು ನಡೆಯುತ್ತಿದ್ದು ಇದರ ವಿರುದ್ಧ ತನಿಖೆ ನಡೆಸಿ ತ್ಪಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಟ್ಸ್ ಆರ್ಗನೈಸೇಶನ್ (ಎಐಡಿಎಸ್‌ಒ) ನೇತೃತ್ವದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ಆನಂತರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಅವ್ಯವಹಾರಗಳು ವ್ಯಾಪಕವಾಗಿ ನಡೆಯುತ್ತಿವೆ. ಇದರಿಂದ ವಿದ್ಯಾರ್ಥಿಗಳು ಪದೆಪದೇ ಸಮಸ್ಯೆ ಎದುರಿಸುತ್ತಿದ್ದಾರೆ. ರಾಯಚೂರಿನ ಪದವಿ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಮರು ಮೌಲ್ಯಮಾಪನಕ್ಕೆ ಹಾಕಿದರೂ ಫಲಿತಾಂಶವನ್ನು ತಡೆಹಿಡಿಯಲಾಗಿದೆ. ಇದನ್ನು ಸರಿಪಡಿಸಲು ವಿಶ್ವವಿದ್ಯಾಲಯದಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದರು.

ಅಂಕಪಟ್ಟಿಯಲ್ಲಿ ಅಂಕಗಳನ್ನು ಹೆಚ್ಚುಕಡಿಮೆ ಮಾಡುವುದು, ವಿದ್ಯಾರ್ಥಿ ಹೆಸರನ್ನು ಬದಲಾಯಿಸುವುದು, ಘಟಿಕೋತ್ಸವ ಪ್ರಮಾಣ ಪತ್ರವನ್ನು ಸರಿಯಾದ ಸಮಯದಲ್ಲಿ ವಿದ್ಯಾರ್ಥಿಗಳಿಗೆ ತಲುಪಿಸದೆ ಇರುವುದು ವಿವಿಧ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಎದುರಿಸುತ್ತಿದ್ದಾರೆ. ಇದನ್ನು ಸರಿಪಡಿಸಲು ವಿದ್ಯಾರ್ಥಿಗಳು ಮುಂದಾದಾಗ ಹಣ ಕೇಳುವ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದರು.

ವಿಶ್ವವಿದ್ಯಾಲಯದಲ್ಲಿ ಅವ್ಯವಹಾರದ ಮೂಲಕ ಹಣ ಗಳಿಸಲು ಮುಂದಾಗಿರುವುದು ಖಂಡನಾರ್ಹ. ಇದು ವಿಶ್ವವಿದ್ಯಾಲಯದ ಪಾವಿತ್ರ್ಯತೆ ಮತ್ತು ಘನತೆ ಹಾಳು ಮಾಡುವುದಾಗಿದೆ. ಕೂಡಲೇ ಗುಲ್ಬರ್ಗ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಅನುಭವಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಬೇಕು ಹಾಗೂ ಹಣ ವಸೂಲಿ ಮಾಡುವ ದಂಧೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಮಹೇಶ ಚೀಕಲಪರ್ವಿ, ಜಿಲ್ಲಾ ಕಾರ್ಯದರ್ಶಿ ಪೀರ್ ಸಾಬ್, ಜಿಲ್ಲಾ ಉಪಾಧ್ಯಕ್ಷ ಮೌನೇಶ, ಕಾರ್ತಿಕ, ಮಲ್ಲಿಕಾರ್ಜುನ, ಬಸವರಾಜ, ಶಿವಪ್ಪ ಆಂಜನೇಯ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು