ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾರದರ್ಶಕವಾಗಿ ಚುನಾವಣೆ ಕರ್ತವ್ಯ ನಿರ್ವಹಿಸಿ: ವೀಕ್ಷಕ ವಿ.ಕೆ.ಚಕ್ರವರ್ತಿ ಸೂಚನೆ

Last Updated 29 ಮಾರ್ಚ್ 2019, 14:52 IST
ಅಕ್ಷರ ಗಾತ್ರ

ರಾಯಚೂರು: ಚುನಾವಣಾ ಕರ್ತವ್ಯವನ್ನು ಶ್ರದ್ಧೆ ಹಾಗೂ ಪಾರದರ್ಶಕವಾಗಿ ನಿರ್ವಹಿಸಬೇಕು ಎಂದು ರಾಯಚೂರು ಲೋಕಸಭಾ ಕ್ಷೇತ್ರದ ಚುನಾವಣಾ ವೆಚ್ಚ ವೀಕ್ಷಕ ವಿ.ಕೆ.ಚಕ್ರವರ್ತಿ ಹೇಳಿದರು.

ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಶುಕ್ರವಾರ ಆಯೋಜಿಸಿದ್ದ ಚುನಾವಣಾ ಸಿಬ್ಬಂದಿಯ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗೆ ಅದರದ್ದೇ ಆದ ಮಹತ್ವವಿದೆ. ಚುನಾವಣೆಗೆ ನಿಯೋಜಿತ ಸಿಬ್ಬಂದಿ ಹಾಗೂ ಅಧಿಕಾರಿಗಳು ನಿಯಮಾನುಸಾರ ಕಾರ್ಯನಿರ್ವಹಿಸಿ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಯಶಸ್ವಿಗೊಳಿಸುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಬೇಕು ಎಂದರು.

ಪೂರ್ವಜರು ಉತ್ತಮ ದೇಶ ಹಾಗೂ ವ್ಯವಸ್ಥೆಯನ್ನು ರೂಪಿಸಿಕೊಟ್ಟಿದ್ದಾರೆ. ಅದನ್ನು ನಮ್ಮ ಮುಂದಿನ ಪೀಳಿಗೆಗೆ ಪ್ರಬುದ್ಧವಾಗಿ ಮುಂದುವರಿಯಿಸಿಕೊಂಡು ಬಿಟ್ಟುಕೊಡಬೇಕು. ದೇಶದ ಏಳಿಗೆಗಾಗಿ ಪ್ರತಿಯೊಬ್ಬರೂ ಶ್ರಮಿಸಬೇಕಿದೆ ಎಂದು ತಿಳಿಸಿದರು.

ಚುನಾವಣೆ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸದಿದ್ದರೆ ಕಠಿಣ ಕ್ರಮ ಜರುಗಿಸಲಾಗುತ್ತದೆ. ಚುನಾವಣೆಗೆ ಸಂಬಂಧಿಸಿದ ದೂರುಗಳನ್ನು ನೀಡಲು ಸಿ– ವಿಜಿಲ್ ಆ್ಯಪ್‌ ಜಾರಿಗೆ ತರಲಾಗಿದ್ದು, ಸಾರ್ವಜನಿಕರು ದೂರು ನೀಡಿದ 15 ನಿಮಿಷದಲ್ಲಿ ಕ್ರಮ ಜರುಗಿಸಲಾಗುತ್ತದೆ. ಈ ಆ್ಯಪ್‌ ಬಗ್ಗೆ ಜನರಿಗೆ ಮಾಹಿತಿಯನ್ನು ನೀಡಬೇಕು ಎಂದರು.

ತರಬೇತುದಾರ ವಿಜಯಶಂಕರ್ ಮಾತನಾಡಿ, ಚುನಾವಣೆ ವೆಚ್ಚಕ್ಕೆ ಸಂಬಂಧಿಸಿದಂತೆ ಯಾವುದಾದರೂ ದೂರುಗಳು ಬಂದರೆ ಆ ದೂರುಗಳನ್ನು ಯಾವ ರೀತಿ ಬಗೆಹರಿಸಲಾಗಿದೆ ಎಂಬುದರ ಬಗ್ಗೆ ಚುನಾವಣಾ ವೆಚ್ಚ ವೀಕ್ಷಕರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ಎಂಸಿಎಂಸಿ ತಂಡದವರು ಎಲ್ಲ ಮಾಧ್ಯಮ ಹಾಗೂ ಪತ್ರಿಕೆಗಳ ಮೇಲೆ ನಿಗಾವಹಿಸಿ ಯಾರಾದರೂ ಅನುಮತಿ ಇಲ್ಲದೆ ಪ್ರಚಾರ ಕೈಗೊಂಡರೆ ಅಥವಾ ಪಾವತಿ ಸುದ್ದಿ ಪ್ರಕಟಿಸಿದರೆ ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಲಿನ್ ಅತುಲ್, ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್, ಯಾದಗಿರಿ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ರಜಪೂತ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT