ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳಿಗೆ ಬಸ್‍ಪಾಸ್ ವಿತರಿಸಲು ಆಗ್ರಹ

ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಪ್ರತಿಭಟನಾ ಮೆರವಣಿಗೆ
Last Updated 6 ಜೂನ್ 2018, 9:32 IST
ಅಕ್ಷರ ಗಾತ್ರ

ಸಿಂಧನೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿನ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಶೀಘ್ರವೇ ಉಚಿತ ಬಸ್ ಪಾಸ್ ವಿತರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲ್ಲೂಕು ಘಟಕ ಮಂಗಳವಾರ ಸ್ಥಳೀಯ ಬಸ್ ವೃತ್ತದಿಂದ ಮಿನಿವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿತು.

‘ಗ್ರಾಮೀಣ ಭಾಗದಿಂದ ಪ್ರತಿನಿತ್ಯ ಸಾವಿರಾರು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಬಂದು ಹೋಗುತ್ತಾರೆ. ಆದರೆ ಶಾಲಾ-ಕಾಲೇಜುಗಳು ಆರಂಭ ವಾಗಿ ಒಂದು ವಾರವಾದರೂ ಪಾಸ್ ವಿತರಣೆ ಮಾಡಿಲ್ಲ. ಇದರಿಂದ ವಿದ್ಯಾರ್ಥಿ ಗಳು ನಿತ್ಯ ಹಣ ಕೊಟ್ಟು ಪ್ರಯಾಣಿಸುವಂತಾಗಿದೆ’ ಎಂದು ನಗರ ಘಟಕದ ಕಾರ್ಯದರ್ಶಿ ಚನ್ನಾರೆಡ್ಡಿ ದೂರಿದರು.

‘ಬಹುಪಾಲು ವಿದ್ಯಾರ್ಥಿಗಳ ಪೋಷಕರು ಬಡವರಾಗಿದ್ದು, ಅವರಿಗೆ ಮಕ್ಕಳ ಶೈಕ್ಷಣಿಕ ವೆಚ್ಚ ಭರಿಸುವುದೇ ಕಷ್ಟವಾಗಿದೆ. ಇಂತಹ ಸ್ಥಿತಿಯಲ್ಲಿ ಮಕ್ಕಳ ಪ್ರಯಾಣಕ್ಕೆ ಹಣ ಹೊಂದಿಸಲು ಅವರಿಗೆ ಮತ್ತಷ್ಟು ಹೊರೆಯಾಗುತ್ತಿದೆ. ಪ್ರತಿ ಶೈಕ್ಷಣಿಕ ವರ್ಷದಲ್ಲೂ ಪಾಸ್ ಸಮಸ್ಯೆ ಮರುಕಳಿಸುತ್ತಿದೆ. ಶೈಕ್ಷಣಿಕ ವರ್ಷದ ಆರಂಭದಲ್ಲೇ ಬಸ್ ಪಾಸ್ ವಿತರಿಸುವಂತೆ ಕೆಎಸ್‍ಆರ್‍ಟಿಸಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಆದರೆ ಅಧಿಕಾರಿಗಳು ಈ ವಿಷಯದಲ್ಲಿ ನಿರ್ಲಕ್ಷ್ಯಧೋರಣೆ ತಾಳಿದ್ದಾರೆ. ಮತ್ತೊಂದೆಡೆ ಗ್ರಾಮೀಣ ಭಾಗದಲ್ಲಿ ಬಸ್‌ ನಿಲುಗಡೆ ಮಾಡುತ್ತಿಲ್ಲ’ ಎಂದು ಅವರು ಆಪಾದಿಸಿದರು.

ನಗರ ಘಟಕದ ಸಹಕಾರ್ಯದರ್ಶಿ ಚನ್ನಬಸವ ದೇಸಾಯಿ ಮಾತನಾಡಿ, ‘ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. ಗ್ರಾಮೀಣ ಭಾಗದಿಂದ ಬಸ್ ಪಾಸ್ ಹೊಂದಿದ ವಿದ್ಯಾರ್ಥಿಗಳು ನಗರ ಸಾರಿಗೆಯಲ್ಲಿ ಸಂಚರಿಸಲು ಅನುಮತಿ ನೀಡಬೇಕು. ಗ್ರಾಮೀಣ ಪ್ರದೇಶಕ್ಕೆ ಅಗತ್ಯ ಬಸ್ ಸಂಚಾರ ಸೌಕರ್ಯಕ್ಕೆ ಕಲ್ಪಿಸಬೇಕು. ಈ ಕುರಿತು ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳೆಲ್ಲರೂ ಬಸ್ ಡಿಪೊ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಎಬಿವಿಪಿ ರಾಜ್ಯ ಘಟಕದ ಕಾರ್ಯದರ್ಶಿ ಸುಕುಮುನಿ ತುರ್ವಿಹಾಳ, ಕಾರ್ಯಕರ್ತರಾದ ಮಂಜುನಾಥ ಚವ್ಹಾಣ್, ರಾಘವೇಂದ್ರ, ರುದ್ರ ಹಿರೇಮಠ, ಚನ್ನು ಹಿರೇಮಠ, ಅಮರೇಶ, ನಿರಂಜನ ಸೇರಿದಂತೆ ಎಕ್ಸಲೆಂಟ್, ಸೃಷ್ಟಿ ಹಾಗೂ ಅನಿಕೇತನ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT