ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಿ: ಡಾ.ಚಂದ್ರಶೇಖರಯ್ಯ

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಸಲಹೆ
Published 17 ಮೇ 2024, 14:07 IST
Last Updated 17 ಮೇ 2024, 14:07 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ವಿಭಾಗದ ಆಶ್ರಯದಲ್ಲಿ ರಾಷ್ಟ್ರೀಯ ಡೆಂಗಿ ದಿನ ಆಚರಿಸಲಾಯಿತು.

‘ಸಮುದಾಯದೊಂದಿಗೆ ಸೇರಿ ಡೆಂಗಿ ಜ್ವರ ನಿಯಂತ್ರಿಸೋಣ’ ಎನ್ನುವ ಧ್ಯೇಯ ವಾಕ್ಯದೊಂದಿಗೆ ಮಾನವ ಸರಪಳಿ ನಿರ್ಮಿಸಿ ಜಾಗೃತಿ ಮೂಡಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಆರಂಭವಾದ ಜಾಥಾ ಟಿಪ್ಪು ಸುಲ್ತಾನ್ ರಸ್ತೆ ಮಾರ್ಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ತಲುಪಿ ಮುಕ್ತಾಯಗೊಂಡಿತು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಚಂದ್ರಶೇಖರಯ್ಯ ಮಾತನಾಡಿ, ‘ಸೊಳ್ಳೆಗಳ ನಿಯಂತ್ರಣ ಒಂದೇ ಡೆಂಗಿ ರೋಗ ಹತೋಟಿಯ ಮುಖ್ಯ ವಿಧಾನ. ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಕಲ್ಲು ಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿ, ಡ್ರಮ್ ಬ್ಯಾರಲ್, ಏರ್‌ಕೂಲರ್, ಮಣ್ಣಿನ ಮಡಿಕೆಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ತಿಕ್ಕಿ ತೊಳೆದು ಒಣಗಿಸಿ ಮತ್ತೆ ಭರ್ತಿ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಬಳಸಬೇಕು. ಯಾವುದೇ ಜ್ವರವಿರಲಿ ಹತ್ತಿರದ ಸರ್ಕಾರಿ ಆಸ್ಪತ್ರೆ ಅಥವಾ ‍ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು. ರೋಗ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬಾರದಂತೆ ಮುಂಜಾಗ್ರತೆ ವಹಿಸಬೇಕು’ ಎಂದು ಹೇಳಿದರು.

‘ಪ್ರಸಕ್ತ ವರ್ಷದಲ್ಲಿ 543 ಜನರ ರಕ್ತದ ಮಾದರಿ ಸಂಗ್ರಹಿಸಲಾಗಿದೆ. ಇದರಲ್ಲಿ 22 ಖಚಿತ ಪ್ರಕರಣಗಳು ವರದಿಯಾಗಿವೆ. ಕಳೆದ ವರ್ಷ ಅಂದರೆ 2023ನೇ ಸಾಲಿನಲ್ಲಿ ಒಟ್ಟು 2186 ರಕ್ತದ ಮಾದರಿ ಸಂಗ್ರಹಿಸಲಾಗಿತ್ತು. ಇದರಲ್ಲಿ 78 ಖಚಿತ ಪ್ರಕರಣಗಳು ವರದಿಯಾಗಿದ್ದವು’ ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಂದ್ರಬಾಬು ಹಾಗೂ ಜಿಲ್ಲಾ ವಿಬಿಡಿಸಿ ಅಧಿಕಾರಿ ಡಾ.ಚಂದ್ರಶೇಖರಯ್ಯ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ವೆಂಕಟೇಶ ವೈ.ನಾಯಕ, ಕ್ಷಯರೋಗ ನಿಯಂತ್ರಣಾದಿಕಾರಿ ಎಂ.ಡಿ.ಶಾಕೀರ್ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವಕುಮಾರ, ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಯಶೋದ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಪ್ರಜ್ವಲ್, ಪೈಲೇರಿಯಾ ವೈದ್ಯಾಧಿಕಾರಿ ಡಾ.ಜಯಂತಿ, ಎಸ್‍ಕೆಇ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ.ಬಾಬುರಾವ್, ರಾಜೇಂದ್ರ ಶಿವಾಳ್ಳೆ, ಆರೋಗ್ಯ ಇಲಾಖೆ ಸಿಬ್ಬಂದಿ, ಎಸ್‍ಕೆಇ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT