ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು | ಪ್ರವಾಹ ಎದುರಿಸಲು ಸನ್ನದ್ಧರಾಗಿ–ಜಿಲ್ಲಾಧಿಕಾರಿ

ಎನ್‌ಡಿಆರ್‌ಎಫ್‌, ಪೊಲೀಸ್ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಸಭೆ
Last Updated 13 ಆಗಸ್ಟ್ 2020, 16:16 IST
ಅಕ್ಷರ ಗಾತ್ರ

ರಾಯಚೂರು: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳ ಮೂಲಕ ಹೆಚ್ಚಿನ ನೀರು ಹರಿಸುವ ಕಾರಣ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಎನ್‌ಡಿಆರ್‌ಎಫ್‌ ತಂಡದೊಂದಿಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸಿ, ಹೆಚ್ಚಿನ ನೀರು ಹರಿಯುವ ಸೇತುವೆಗಳ ಮೇಲಿನ ಸಂಚಾರ ಸ್ಥಗಿತಗೊಳಿಸಲಾಗುವುದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ‘ಪ್ರವಾಹ ಕುರಿತು ಪೊಲೀಸ್ ಇಲಾಖೆ ಹಾಗೂ ಎನ್‌ಡಿಆರ್‌ಎಫ್ ತಂಡದೊಂದಿಗೆ’ ಗುರುವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಾರಾಯಣಪೂರ, ಅಲಮಟ್ಟಿ ಅಣೆಕಟ್ಟೆಯಿಂದ ಮುಂದಿನ ಮೂರು ದಿನಗಳಲ್ಲಿ ಲಕ್ಷಾಂತರ ಕ್ಯೂಸೆಕ್ ನೀರು ಕೃಷ್ಣಾನದಿಗೆ ಹರಿಸುವ ಮುನ್ಸೂಚನೆ ಇರುವುದರಿಂದ ಪ್ರವಾಹ ಪರಿಸ್ಥಿತಿ ಎದುರಾಗಬಹುದು ಎಂದರು.

ದೇವದುರ್ಗದ ಹೂವಿನಹಡಿಗಿ ಸೇತುವೆ ಮತ್ತು ಶೀಲಹಳ್ಳಿ ಸೇತುವೆ ಮುಳುಗಡೆಯಾಗುವ ಸಂಭವ ಇದೆ. ಮುಂಜಾಗೃತ ಕ್ರಮವಾಗಿ ಸೇತುವೆಗಳ ಮೇಲೆ ವಾಹನ ಸಂಚಾರವನ್ನು ಕೆಲ ದಿನಗಳ ಮಟ್ಟಿಗೆ ಸಂಪೂರ್ಣ ನಿಷೇಧಿಸಲಾಗಿದೆ. ನದಿ ಹತ್ತಿರ ಜನ ಜಾನುವಾರುಗಳು ತೆರಳದಂತೆ ಪೊಲೀಸರನ್ನು ನಿಯೋಜಿಸಬೇಕು ಎಂದು ಸೂಚನೆ ನೀಡಿದರು.

ಸಂತ್ರಸ್ತರ ನೆರವಿಗೆ ಸಿದ್ಧತೆ: ಪ್ರವಾಹ ಭೀತಿ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ನೆರವಾಗಲು ಅಗತ್ಯ ಗಂಜಿ ಕೇಂದ್ರ ತೆರೆಯಲಾಗುವುದು. ಕೇಂದ್ರ ಸರ್ಕಾರದ ಆತ್ಮನಿರ್ಭಾರ್ ಯೋಜನೆ ಮತ್ತು ರಾಜ್ಯ ಸರ್ಕಾರದಿಂದ ಮುಂದಿನ ಎರಡು ತಿಂಗಳು ಮಟ್ಟಿಗೆ ಪಡಿತರ ಧಾನ್ಯಗಳನ್ನು ವಿತರಿಸಬೇಕು ಎಂದರು.

ಟಾಸ್ಕ್ ಫೋರ್ಸ್ ಸಮಿತಿ ರಚನೆ: ಲಿಂಗಸೂಗರು, ರಾಯಚೂರು ಸಹಾಯಕ ಆಯುಕ್ತರ ನೇತೃತ್ವದಲ್ಲಿ ಟಾಸ್ಟ್ ಫೋರ್ಸ್ ಸಮಿತಿ ರಚಿಸಿ ಆಯಾ ತಾಲ್ಲೂಕುಗಳಲ್ಲಿ ಡಿವೈಎಸ್‌ಪಿ, ಸಿಪಿಐ ಅಧಿಕಾರಿಗಳ ಸಹಭಾಗಿತ್ವದಲ್ಲಿ ನೋಡೆಲ್ ಅಧಿಕಾರಿಗಳನ್ನು ನೇಮಿಸಿ ನದಿತೀರದ ಪ್ರದೇಶಗಳ ಮೇಲೆ ನಿಗಾವಹಿಸಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ ಮಾತನಾಡಿ, ಎನ್‌ಡಿಆರ್‌ಎಫ್ ತಂಡದೊಂದಿಗೆ ತಾಲ್ಲೂಕು ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕ ಸಾಧಿಸಿ ಅಗತ್ಯ ಮುನ್ನೆಚ್ಚರಿಕೆ ವಹಿಸಿ ಪ್ರವಾಹ ಎದುರಿಸಲಾಗುವುದು ಎಂದು ತಿಳಿಸಿದರು.

ಎನ್‌ಡಿಆರ್‌ಎಫ್ ಇನ್‌ಸ್ಪೆಕ್ಟರ್‌ ದಿವಾಕರ್ ಸಿಂಗ್ ರವಿ ಅವರು ಮಾತನಾಡಿ, ಈಗಾಗಲೇ ಕಲಬುರ್ಗಿ ಮತ್ತು ಹೈದರಾಬಾದ್‌ನಲ್ಲಿರುವ ತಂಡಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಅಗ್ನಿಶಾಮಕ ದಳ ಮತ್ತು ಬೋಟಿಂಗ್ ವ್ಯವಸ್ಥೆ ಮಾಡಿಕೊಡಬೇಕು ಎಂದರು.

ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶ್ರೀಹರಿಬಾಬು, ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ, ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ರಾಜಶೇಖರ ಡಂಬಳ, ತಹಶೀಲ್ದಾರ್‌ ಡಾ.ಹಂಪಣ್ಣ, ಡಿವೈಎಸ್‌ಪಿ, ಸಿಪಿಐ, ಪಿಎಸ್‌ಐ, ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್ ತಂಡದ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT