ಹಟ್ಟಿ ಚಿನ್ನದ ಗಣಿ: ಹೋಮ್ ವರ್ಕ್ ಮಾಡಿಲ್ಲ ಎಂದು ಶಿಕ್ಷಕಿಯೊಬ್ಬರು ವಿದ್ಯಾರ್ಥಿನಿಗೆ ಥಳಿಸಿದ್ದಾರೆ ಎಂದು ವಿದ್ಯಾರ್ಥಿನಿಯ ಪಾಲಕರು ಆರೋಪಿಸಿದ್ದಾರೆ.
ಶರಣಬಸವೇಶ್ವರ ಇಂಗ್ಲಿಷ್ ಮಾಧ್ಯಮ ಶಿಕ್ಷಣ ಸಂಸ್ಥೆಯ 4ನೇ ತರಗತಿ ವಿದ್ಯಾರ್ಥಿನಿ ಅಕ್ಷತಾ ಸಾಬಣ್ಣಗೆ ಪ್ರಿಯಾ ಎಂಬ ಶಿಕ್ಷಕಿ ಥಳಿಸಿದ್ದಾರೆ. ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪಾಲಕರು ಒತ್ತಾಯಿಸಿದ್ದಾರೆ.
ವಿದ್ಯಾರ್ಥಿನಿ ಕೈಗೆ ಗಂಭೀರ ಗಾಯವಾಗಿದ್ದು, ಪೋಷಕರು ಆಡಳಿತ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
‘ಶಿಕ್ಷಕಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಎಸ್‌ಎಫ್‌ಐ ಪದಾಧಿಕಾರಿ ರಮೇಶ ವೀರಾಪುರ ಒತ್ತಾಯಿಸಿದ್ದಾರೆ. ‘ಶಿಕ್ಷಣ ಸಂಸ್ಥೆ ವಿರುದ್ಧ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ದೂರು ನೀಡಲಾಗುವುದು. ಕ್ಷೇತ್ರ ಶಿಕ್ಷಣಾಧಿಕಾರಿ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.
‘ಎರಡು ದಿನಗಳಲ್ಲಿ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ್ಯ ಮಾಡಿದರೆ ಬಿಇಒ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು’ ಎಂದು ಎಸ್ಎಫ್ಐ ಪದಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.