ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇತುವೆ ನಿರ್ಮಾಣಕ್ಕೆ ಮುಂದಾಗದಿದ್ದರೆ ಮುತ್ತಿಗೆ: ಎ.ಪಾಪಾರೆಡ್ಡಿ

Last Updated 18 ಜುಲೈ 2019, 19:39 IST
ಅಕ್ಷರ ಗಾತ್ರ

ರಾಯಚೂರು: ನಾರದಗಡ್ಡೆ ಚನ್ನಬಸವೇಶ್ವರ, ದತ್ತಾತ್ರೇಯ ಹಾಗೂ ಕುರುವಕುಲಾ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಗಳ ನಿರ್ಮಾಣ ವಿಷಯದಲ್ಲಿ ಜಿಲ್ಲಾಡಳಿತ ಹಾಗೂ ಶಾಸಕರು ನಿರ್ಲಕ್ಷ್ಯ ವಹಿಸಿದ್ದು, ಒಂದು ವಾರದಲ್ಲಿ ಜಿಲ್ಲಾಧಿಕಾರಿ ಸ್ಪಷ್ಟಪಡಿಸದಿದ್ದರೆ ಗ್ರಾಮಸ್ಥರೊಂದಿಗೆ ಜಿಲ್ಲಾಡಳಿತ ಕಚೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಮಾಜಿ ಶಾಸಕ ಎ.ಪಾಪಾರೆಡ್ಡಿ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿಗಳ ಒಪ್ಪಂದದಂತೆ ಜುರಾಲಾ ಜಲಾಶಯ ಯೋಜನೆ ಕೈಗೊಳ್ಳಲಾಗಿತ್ತು. ಮೂರು ಗ್ರಾಮಗಳು ಹಾಗೂ ದೇವಸ್ಥಾನಗಳ ಸ್ಥಳಾಂತರಕ್ಕೆ ಆತ್ಕೂರು, ಬೂರ್ದಿಪಾಡ ಹಾಗೂ ಡಿ.ರಾಂಪುರ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದರಿಂದ 2004ರಲ್ಲಿ ಆಂಧ್ರಪ್ರದೇಶ ಸರ್ಕಾರ ಸೇತುವೆಗಳ ನಿರ್ಮಾಣಕ್ಕೆ ₹75 ಕೋಟಿ ಅನುದಾನ ನೀಡಿದ್ದು, ಜಿಲ್ಲಾಧಿಕಾರಿ ಖಾತೆಯಲ್ಲಿ ಹಣವಿದೆ. ಟೆಂಡರ್ ಕೂಡ ಕರೆಯಲಾಗಿದ್ದು, ಕಾಮಗಾರಿಯನ್ನು ಪೂರ್ಣಗೊಳಿಸಿಲ್ಲ. ಶಾಸಕ ಹಾಗೂ ಜಿಲ್ಲಾಧಿಕಾರಿ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದರು.

ಹಣವಿದ್ದರೂ ಕಾಮಗಾರಿ ಕೈಗೊಳ್ಳದಿರುವುದರಿಂದ ಪ್ರಗತಿಯೂ ಕಾಣುತ್ತಿಲ್ಲ. ಕ್ಷೇತ್ರವನ್ನು ಪ್ರತಿನಿಧಿಸುವ ಹಿಂದಿನ ಶಾಸಕರು ಹಾಗೂ ಹಾಲಿ ಶಾಸಕರು ನಿರ್ಲಕ್ಷ್ಯ ಮಾಡಿದ್ದಾರೆ. ಹಿಂದಿನ ಜಿಲ್ಲಾಧಿಕಾರಿಗಳು ಗಮನ ಹರಿಸಿಲ್ಲ. ಈಗಿನ ಜಿಲ್ಲಾಧಿಕಾರಿ ಆದರೂ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು, ಮೂಲ ನಕ್ಷೆಯಂತೆ ಗದ್ವಾಲ್ ರಸ್ತೆ ಮೂಲಕ ಹಾದು ಹೋಗಬೇಕಾಗಿತ್ತು. ಆದರೆ, ಶಾಖವಾದಿ ಮೂಲಕ ಕಾಲುವೆ ನಿರ್ಮಾಣ ಮಾಡಲಾಗುತ್ತಿದ್ದು, 12 ಕಿ.ಮೀ. ದೂರ ಕಾಮಗಾರಿ ನಡೆಯುತ್ತಿದ್ದರೂ ಯಾರೂ ಹೇಳುವವರು, ಕೇಳುವವರು ಇಲ್ಲದಂತಾಗಿದೆ. ಶಾಸಕರು ಹಾಗೂ ಜಿಲ್ಲಾಧಿಕಾರಿ ಜನರ ಸಮಸ್ಯೆ ಅರಿತು ಕಾರ್ಯನಿರ್ವಹಿಸಬೇಕು ಎಂದು ಒತ್ತಾಯಿಸಿದರು.

ತಿಮ್ಮಪ್ಪ ನಾಯಕ, ಹನುಮಂತರೆಡ್ಡಿ, ರಂಗಾರೆಡ್ಡಿ, ಬಸಾರೆಡ್ಡಿ, ಸೂಗೂರಪ್ಪ, ವೆಂಕಟೇಶ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT