ಸೋಮವಾರ, ಅಕ್ಟೋಬರ್ 3, 2022
21 °C
ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಸಿಇಒ ಸೂಚನೆ

ಕರ್ತವ್ಯ ಶೈಲಿ ಬದಲಿಸಿಕೊಂಡು ಕೆಲಸ ಮಾಡಿ: ರಾಯಚೂರು ಜಿಪಂ ಸಿಇಒ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಕರ್ತವ್ಯ ಶೈಲಿಯನ್ನು ಬದಲಾಯಿಸಿಕೊಂಡು ಕಾರ್ಯ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್‌ ಕುರೇರ ಸೂಚಿಸಿದರು.

ಅಧಿಕಾರಿ ವಹಿಸಿಕೊಂಡ ಬಳಿಕ ಮೊದಲ ಬಾರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ಶುಕ್ರವಾರ ನಡೆಸಿದರು.

ಗ್ರಾಮೀಣ ಪ್ರದೇಶದಲ್ಲಿ ಇದುವರೆಗೂ ಸೌಕರ್ಯಗಳು ಜನರಿಗೆ ಸಮರ್ಪಕವಾಗಿ ತಲುಪಿಲ್ಲ. ಈ ನಿಟ್ಟಿನಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕಿದ್ದು, ಜಿಲ್ಲೆಯ ಅಭಿವೃದ್ಧಿಗಾಗಿ ಅನೇಕ ಯೋಜನೆಗಳು ಬರುತ್ತಿವೆ. ಆದರೆ ಹಲವು ಕಾರಣಗಳಿಂದ ಕುಂಠಿತಗೊಂಡು, ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಆಗುತ್ತಿಲ್ಲ ಎಂದು ತಿಳಿಸಿದರು.

ಅಗತ್ಯ ಮೂಲ ಸೌಕರ್ಯಗಳಾದ ಶುದ್ಧ ಕುಡಿಯುವ ನೀರು, ರಸ್ತೆ, ಬೀದಿದೀಪ ಅಳವಡಿಕೆ, ಒಳಚರಂಡಿ ಮತ್ತು ಸ್ವಚ್ಛತೆಗೆ ಎಲ್ಲ ಅಧಿಕಾರಿಗಳು ಪ್ರಥಮ ಆದ್ಯತೆ ನೀಡಬೇಕು. ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಸೇವಾ ಅನುಭವವನ್ನು ಸಕಾರಾತ್ಮಕವಾಗಿ ಉಪಯೋಗಿಸಿ ಕೆಲಸ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

‘ನಾನು ಕೆಲಸ ಮಾಡುತ್ತೇನೆ. ನೀವು ಕೆಲಸ ಮಾಡಬೇಕು’ ಎಂದು ಎಲ್ಲ ಅಧಿಕಾರಿಗಳಿಗೆ ತಾಕೀತು ಮಾಡಿದ ಅವರು, ನಿಗದಿತ ಸಮಯಕ್ಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ತಲುಪಬೇಕು. ಕೆಲಸದ ಶೈಲಿ ಬದಲಾಯಿಸಿಕೊಳ್ಳಬೇಕು. ಅಶಿಸ್ತು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ದೂರುಗಳನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಜಿಲ್ಲೆಯ 179 ಗ್ರಾಮ ಪಂಚಾಯಿತಿಗಳ ಪೈಕಿ ಕೇವಲ ಬೆರಳೆಣಿಕೆ ಪಂಚಾಯಿತಿಗಳು ಮಾತ್ರ ಅಭಿವೃದ್ದಿ ಸಾಧಿಸಿದರೆ ಸಾಕಾಗುವುದಿಲ್ಲ. ಎಲ್ಲಾ ಪಂಚಾಯಿತಿಗಳು ಅಭಿವೃದ್ಧಿ ಆಗಬೇಕೆಂಬ ದೃಢ ಸಂಕಲ್ಪ ಪ್ರತಿಯೊಬ್ಬರಲ್ಲಿ ಬರಬೇಕು ಎಂದು ಹೇಳಿದರು. 

2021-22ನೇ ಸಾಲಿನಲ್ಲಿ ಬಾಕಿಯಿರುವ ಎಲ್ಲಾ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೂಲಿಕಾರರಿಗೆ ಕೆಲಸ ನೀಡಬೇಕು. ಜಿಲ್ಲೆಯಲ್ಲಿ ಮಾನವ ದಿನಗಳನ್ನು ಹೆಚ್ಚು ಸೃಜನೆ ಮಾಡಬೇಕು. ನರೇಗಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕು. ವಸತಿ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳ ಪಟ್ಟಿ ಸಿದ್ದಪಡಿಸಬೇಕು ಎಂದು ತಿಳಿಸಿದರು.

ತಾಲ್ಲೂಕಾವಾರು ವಿವಿಧ ಇಲಾಖೆಗಳ ಸುದಿರ್ಘವಾದ ಪ್ರಗತಿ ಪರಿಶೀಲನೆ ನಡೆಸಿದರು. 

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಶಿಕಾಂತ ಶಿವಪುರೆ, ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಮುಖ್ಯ ಲೆಕ್ಕಾಧಿಕಾರಿ ನಾಗರಾಜ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಚೇರಿ ಸಿಬ್ಬಂದಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು