ಭಾನುವಾರ, ಜುಲೈ 25, 2021
22 °C
ಆ.14ರಂದು ಮೆಗಾ ಲೋಕ ಅದಾಲತ್‌: ಜಿಲ್ಲಾ ನ್ಯಾಯಾಧೀಶೆ ಬಿ.ಜಿ.ರಮಾ

ಜಿಲ್ಲೆಯಲ್ಲಿ 44 ಸಾವಿರ ಪ್ರಕರಣ ಬಾಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ‘ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು ಆ.14ರಂದು ನಡೆಯುವ ಮೆಗಾ ಲೋಕ ಅದಾಲತ್‌ನಲ್ಲಿ ಇತ್ಯರ್ಥಗೊಳಿಸಲಾಗುವುದು’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ನ್ಯಾಯಾಧೀಶೆ ಬಿ.ಜಿ.ರಮಾ ತಿಳಿಸಿದರು.

ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯಾದ್ಯಂತ ಒಟ್ಟು 20 ಬೆಂಚ್‌ಗಳಲ್ಲಿ ಮೆಗಾ ಅದಾಲತ್ ಆಯೋಜಿಸಲಾಗಿದೆ. ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಇದರ ಲಾಭವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದ್ದಾರೆ.

ಆನ್‌ಲೈನ್‌: ‍‘ಜಿಲ್ಲೆಯಾದ್ಯಂತ ಇರುವ ಜಿಲ್ಲಾ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಆ. 14 ರಂದು ಏಕಕಾಲಕ್ಕೆ ಕಲಾಪವು ನಡೆಯಲಿದೆ. ನ್ಯಾಯಾಲಯದ ಕಲಾಪಗಳಲ್ಲಿ ವಕೀಲರು ಭಾಗವಹಿಸಬಹುದು. ಅವಶ್ಯಕತೆ ಇದ್ದಲ್ಲಿ ಕಕ್ಷಿದಾರರನ್ನು ಆನ್‌ಲೈನ್ ಮೂಲಕ ಸಂಪರ್ಕಿಸಲಾಗುವುದು’ ಎಂದರು.

‘ಜಿಲ್ಲೆಯಲ್ಲಿ ಒಟ್ಟು 44 ಸಾವಿರ ಪ್ರಕರಣಗಳು ಬಾಕಿ ಇವೆ. ಕೋವಿಡ್-19ರ ಹಿನ್ನೆಲೆಯಲ್ಲಿ ಕಳೆದ ಕೆಲವು ತಿಂಗಳಿನಿಂದ ಲೋಕ ಅದಾಲತ್‌ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಆನ್‌ಲೈನ್ ಮೂಲಕ ಹಾಗೂ ವಕೀಲರು ಖುದ್ದಾಗಿ ಭಾಗವಹಿಸಿಲು ಅವಕಾಶ ಮಾಡಿಕೊಡಲಾಗಿದೆ. ಎಲ್ಲರಿಗೂ ನ್ಯಾಯ ದೊರಕಿಸಿ ಕೊಡುವ ಉದ್ದೇಶದಿಂದ ಲೋಕ ಅದಾಲತ್‌ಗೆ ಚಾಲನೆ ನೀಡಲಾಗಿದೆ’ ಎಂದರು.

‌ರಾಜಿಗೆ ಒತ್ತು: ಅಪಘಾತ ಪ್ರಕರಣಗಳಿಗೆ ಸಂಬಂಧಪಟ್ಟಂತೆ ವಿಮಾ ಕಂಪನಿಗಳಿಂದ ಬರಬೇಕಾದ ಪರಿಹಾರದ ಮೊತ್ತ, ಹಣ ವಸೂಲಾತಿ ಪ್ರಕರಣಗಳು, ಬ್ಯಾಂಕ್ ಮೂಲಕ ಹಣ ವಸೂಲಿ ಪ್ರಕರಣಗಳು, ಎನ್.ಐ ಆಕ್ಟ್ ಪ್ರಕರಣಗಳು, ಕಾರ್ಮಿಕ ವಿವಾದಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜೀವನಾಂಶ ಪ್ರಕರಣಗಳು, ವೈವಾಹಿಕ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, (ವಿವಾಹ ವಿಚ್ಛೇದನ ಪ್ರಕರಣಗಳನ್ನು ಹೊರತುಪಡಿಸಿ) ಆಸ್ತಿ ವಿಭಾಗ ಪ್ರಕರಣಗಳು, ಭೂಸ್ವಾಧೀನಕ್ಕೆ ಸಂಬಂಧಪಟ್ಟ ಪ್ರಕರಣಗಳು, ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿಯಾಗಬಲ್ಲ ಎಲ್ಲಾ ರೀತಿಯ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು ಹಾಗೂ ಇನ್ನಿತರ ಪ್ರಕರಣಗಳುನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲು ಒತ್ತು ನೀಡಲಾಗುತ್ತಿದೆ. ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.