ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ನೀಟ್‌’ನಲ್ಲಿ ಅಕ್ರಮ: ತನಿಖೆಗೆ ಎಎಪಿ ಮನವಿ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಹಗರಣ ಆರೋಪ
Published 14 ಜೂನ್ 2024, 6:12 IST
Last Updated 14 ಜೂನ್ 2024, 6:12 IST
ಅಕ್ಷರ ಗಾತ್ರ

ರಾಮನಗರ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ರಾಷ್ಟ್ರಮಟ್ಟದಲ್ಲಿ ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಅಕ್ರಮ ನಡೆದಿರುವ ಆರೋಪಗಳು ಕೇಳಿಬಂದಿವೆ. ಇದೊಂದು ದೊಡ್ಡ ಹಗರಣವಾಗಿರುವ ಸಾಧ್ಯತೆ ಇರುವುದರಿಂದ, ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಎಎಪಿ ಒತ್ತಾಯಿಸಿದೆ.

ಈ ಕುರಿತು ಗುರುವಾರ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದ ಮೂರ್ತಿ ಅವರನ್ನ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೌಶಿಕ್ ಮತ್ತು ಯುವ ಘಟಕದ ಅಧ್ಯಕ್ಷ ರವಿಕಿರಣ್ ಎಂ.ಎನ್ ಗುರುವಾರ ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

‘ನೀಟ್ ಪರೀಕ್ಷೆಯು ಶಿಕ್ಷಣ ವ್ಯವಸ್ಥೆಯ ಸಮಗ್ರತೆಯ ಮೇಲೆ ಗಂಭೀರ ಪರಿಣಾಮ ಬೀರಿದೆ. ಪರೀಕ್ಷಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಗಮನಾರ್ಹ ಅಕ್ರಮಗಳು ನಡೆದಿರುವ ಆರೋಪಗಳು ರಾಷ್ಟ್ರಮಟ್ಟದಲ್ಲಿ ಕೇಳಿ ಬರುತ್ತಿವೆ. ವೈದ್ಯಕೀಯ ಸೀಟಿನ ಕನಸು ಹೊತ್ತು ಪರೀಕ್ಷೆ ಬರೆದಿರುವ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಸಹ ಅಕ್ರಮದ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ’ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

‘ವೈದ್ಯಕೀಯ ವೃತ್ತಿ ಪ್ರವೇಶಿಸಲು ಬಯಸುವ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆಯು ನಿರ್ಣಾಯಕ ಮೆಟ್ಟಿಲು. ಅದರ ಪ್ರಕ್ರಿಯೆಯು ಪಾರದರ್ಶಕ, ನ್ಯಾಯಸಮ್ಮತ ಮತ್ತು ಯಾವುದೇ ರೀತಿಯ ಭ್ರಷ್ಟಾಚಾರದಿಂದ ಮುಕ್ತವಾಗಿರಬೇಕು. ನೀಟ್ ಪರೀಕ್ಷೆಯೇ ದೊಡ್ಡ ಹಗರಣವಾಗಿದೆ ಎಂಬ ಆರೋಪಗಳು ಪರೀಕ್ಷೆಯ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವಂತೆ ಮಾಡಿದೆ. ಇದು ಸ್ಪರ್ಧಾತ್ಮಕ ಪರೀಕ್ಷೆಗೆ ಶ್ರದ್ಧೆಯಿಂದ ತಯಾರಿ ನಡೆಸಿದ ವಿದ್ಯಾರ್ಥಿಗಳ ಉತ್ಸಾಹವನ್ನು ಕುಗ್ಗಿಸಿದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

‘ಪರೀಕ್ಷೆ ಕುರಿತ ಆರೋಪಗಳ ಬಗ್ಗೆ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಯನ್ನು ಸರ್ಕಾರದ ಮಟ್ಟದಲ್ಲಿ ಮಾಡಬೇಕು. ವಿದ್ಯಾರ್ಥಿಗಳು ಮತ್ತು ಪೋಷಕರ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದರೆ ಪರೀಕ್ಷಾ ಅಕ್ರಮ ಪತ್ತೆ ಹಚ್ಚಬೇಕು. ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

‘ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ, ಹಿಂದಿನ ಸಿಇಟಿ ಮಾದರಿಯನ್ನು ಮತ್ತೆ ಜಾರಿಗೆ ತರಬೇಕು. ಪರೀಕ್ಷೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಪರೀಕ್ಷೆಯ ಸಮಯದಲ್ಲಿ ಹೆಚ್ಚಿನ ಭದ್ರತೆ, ಅಕ್ರಮಕ್ಕೆ ಅವಕಾಶವಿಲ್ಲದಂತಹ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT