ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಧಾನಿಯಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ವಕೀಲರು

ನಾಳೆ ವಕೀಲರಿಂದ ವಿಧಾನಸೌಧ ಚಲೊ: ವಕೀಲರ ವಿರುದ್ಧ ದಲಿತ ಒಕ್ಕೂಟ ತಮಟೆ ಚಳವಳಿ
Published 21 ಫೆಬ್ರುವರಿ 2024, 5:11 IST
Last Updated 21 ಫೆಬ್ರುವರಿ 2024, 5:11 IST
ಅಕ್ಷರ ಗಾತ್ರ

ರಾಮನಗರ: ನಲವತ್ತು ವಕೀಲರ ವಿರುದ್ಧ ಪ್ರಕರಣ ದಾಖಲಿಸಿದ ಐಜೂರು ಪೊಲೀಸ್ ಠಾಣೆಯ ಪಿಎಸ್‌ಐ ಸಯ್ಯದ್ ತನ್ವೀರ್ ಹುಸೇನ್ ಅಮಾನತಿಗೆ ಆಗ್ರಹಿಸಿ ಒಂಬತ್ತು ದಿನಗಳಿಂದ ಧರಣಿ ನಡೆಸುತ್ತಿರುವ ವಕೀಲರು ಹೋರಾಟವನ್ನು ರಾಜ್ಯಮಟ್ಟಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದಾರೆ. 

ಬೆಂಗಳೂರಿನಲ್ಲಿ ಫೆ. 22ರಂದು ಬೃಹತ್ ಪ್ರತಿಭಟನಾ ರ‍್ಯಾಲಿ ಮತ್ತು ವಿಧಾನಸೌಧ ಚಲೊ ಹಮ್ಮಿಕೊಂಡಿದ್ದು ರಾಜಧಾನಿಯಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಡಿ.ಸಿ ಕಚೇರಿ ಎದುರು ನಡೆಯುತ್ತಿರುವ ಅಹೋರಾತ್ರಿ ಧರಣಿ ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ.

ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು.

ಈ ನಡುವೆ ವಕೀಲರ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ನಗರದಲ್ಲಿ ಬೃಹತ್‌ ತಮಟೆ ಚಳವಳಿ ನಡೆಯಿತು. ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಲಾಯಿತು.

ವಕೀಲ ಚಾನ್ ಪಾಷಾ ಅವರ ಫೇಸ್‌ಬುಕ್ ಪೋಸ್ಟ್ ಪ್ರಕರಣವನ್ನು ಸೌಹಾರ್ದ ರೀತಿಯಲ್ಲಿ ಬಗೆಹರಿಸಿ ಎಂದು ಮನವಿ ಮಾಡಲು ಸಂಘಕ್ಕೆ ಹೋದವರ ವಿರುದ್ಧ ವಕೀಲರು ಜಾತಿನಿಂದನೆ ಮಾಡಿದ್ದಾರೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಮತ್ತು ದೂರು ಕೊಟ್ಟರೂ ಎಫ್‌ಐಆರ್ ದಾಖಲಿಸದ ಐಜೂರ್ ಪಿಎಸ್‌ಐ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗೆ ದಲಿತ ಮುಖಂಡರು ಮನವಿ ಸಲ್ಲಿಸಿದರು. 

ವಕೀಲರ ವಿರುದ್ಧ ಜಾತಿನಿಂದನೆ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ರಾಮನಗರ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ತಮಟೆ ಚಳವಳಿ ನಡೆಸಿದರು.
ವಕೀಲರ ವಿರುದ್ಧ ಜಾತಿನಿಂದನೆ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ರಾಮನಗರ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ತಮಟೆ ಚಳವಳಿ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಿರತ ವಕೀಲರನ್ನು  ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಮಂಗಳವಾರ ಭೇಟಿ ಮಾಡಿದರು. ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷ ವಿಶಾಲ್ ರಘು ಹಾಗೂ ಸಂಘದ ಪದಾಧಿಕಾರಿಗಳು ಇದ್ದಾರೆ
ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಿರತ ವಕೀಲರನ್ನು  ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಮಂಗಳವಾರ ಭೇಟಿ ಮಾಡಿದರು. ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷ ವಿಶಾಲ್ ರಘು ಹಾಗೂ ಸಂಘದ ಪದಾಧಿಕಾರಿಗಳು ಇದ್ದಾರೆ
ಪಿಎಸ್‌ಐ ಅಮಾನತು ಮಾಡುವವರೆಗೂ ಹೋರಾಟ ನಿಲ್ಲುವುದಿಲ್ಲ. ಪ್ರತಿಭಟನೆ ಅಹೋರಾತ್ರಿ ಧರಣಿಗೂ ಜಿಲ್ಲಾಡಳಿತ ಸ್ಪಂದಿಸಿಲ್ಲ. ಹಾಗಾಗಿ ನ್ಯಾಯಕ್ಕಾಗಿ ಬೆಂಗಳೂರು ಚಲೊ ಹಮ್ಮಿಕೊಂಡಿದ್ದೇವೆ
– ವಿಶಾಲ್ ರಘು ಅಧ್ಯಕ್ಷ ರಾಜ್ಯ ವಕೀಲರ ಪರಿಷತ್ತು

ಫೇಸ್‌ಬುಕ್ ಪೋಸ್ಟ್ ಸೃಷ್ಟಿಸಿದ ಆವಾಂತರ

ಉತ್ತರಪ್ರದೇಶದ ಗ್ಯಾನವಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ಸಲ್ಲಿಸಲು ಅಲ್ಲಿನ ಜಿಲ್ಲಾ ನ್ಯಾಯಾಲಯ ಜ. 31ರಂದು ಅವಕಾಶ ಕಲ್ಪಿಸಿ ಆದೇಶ ನೀಡಿತ್ತು. ಇದರ ವಿರುದ್ಧ ಮಾರನೇಯ ದಿನ ರಾಮನಗರ ವಕೀಲರ ಸಂಘದ ಸದಸ್ಯ ಹಾಗೂ ಎಸ್‌ಡಿಪಿಐ ಮುಖಂಡ ಚಾನ್ ಪಾಷಾ ಅವರು ಕೋರ್ಟ್ ಆದೇಶ ಮತ್ತು ನ್ಯಾಯಾಧೀಶರ ವಿರುದ್ಧ  ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು. ಇದರ ವಿರುದ್ಧ ಬಿಜೆಪಿ ಮುಖಂಡ ಪಿ. ಶಿವಾನಂದ ರಾಮನಗರ ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪಾಷಾ ವಿರುದ್ಧ ಪ್ರಕರಣ ದಾಖಲಾಗಿತ್ತು. ವಕೀಲರ ಸಂಘ ಪಾಷಾ ವಿರುದ್ಧ ಕ್ರಮ ಕೈಗೊಳ್ಳಲು ಫೆ. 6ರಂದು ಸಂಜೆ ಸರ್ವ ಸದಸ್ಯರ ಸಭೆ ಕರೆದಿತ್ತು. ಆಗ ದಲಿತ ಮತ್ತು ಪ್ರಗತಿಪರ ಮುಖಂಡರ ನಿಯೋಗವು ವಕೀಲರ ಸಂಘದ ಕಾರ್ಯದರ್ಶಿಯನ್ನು ಭೇಟಿ ಮಾಡಿ ಪ್ರಕರಣವನ್ನು ಸೌಹಾರ್ದವಾಗಿ ಪರಿಹರಿಸಿಕೊಳ್ಳುವಂತೆ ಮನವಿ ಸಲ್ಲಿಸಿತ್ತು. ಈ ವೇಳೆ ಕೆಲ ವಕೀಲರು ಮತ್ತು ಮುಖಂಡರ ನಡುವೆ ವಾಗ್ವಾದ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ವಕೀಲರ ಸಂಘದ ಅಧ್ಯಕ್ಷ ಅದೇ ದಿನ ರಾತ್ರಿ ದೂರು ನೀಡಿದ್ದರು. ಈ ದೂರಿನ ಮೇರೆಗೆ ಪಾಷಾ ಸೇರಿ 40 ಮುಖಂಡರ ವಿರುದ್ಧ ಐಜೂರು ಠಾಣೆ ಪಿಎಸ್‌ಐ ತನ್ವೀರ್ ಹುಸೇನ್ ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಅದರ ಮಾರನೇಯ ದಿನ ರಫೀಕ್ ಖಾನ್ ಎಂಬುವರು ವಕೀಲರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ದೂರು ನೀಡಿದರು. ಐಜೂರು ಠಾಣೆಯ ಪಿಎಸ್‌ಐ 40 ವಕೀಲರ ವಿರುದ್ಧ ಪ್ರಕರಣ ದಾಖಲಿಸಿಕೊಂಡರು. ಇದರಿಂದ ಕೆರಳಿದ ವಕೀಲರು ಪಿಎಸ್‌ಐ ಅಮಾನತಿಗೆ ಆಗ್ರಹಿಸಿ ಧರಣಿ ಆರಂಭಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT