ಚನ್ನಪಟ್ಟಣ (ರಾಮನಗರ): ‘ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ. ಮಾತೃ ಪಕ್ಷ ಬಿಜೆಪಿಯಿಂದ ಸ್ಪರ್ಧಿಸುವುದು ನನ್ನ ಮೊದಲ ಆದ್ಯತೆಯಾಗಿದೆ. ಮುಂದಿನ ವಾರ ಟಿಕೆಟ್ ಗೊಂದಲಕ್ಕೆ ತೆರೆ ಬೀಳಲಿದೆ’ ಎಂದು ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿ, ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.
ಪಟ್ಟಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು ಟಿಕೆಟ್ ಭರವಸೆ ನೀಡಿದ್ದಾರೆ ಎಂದರು.
‘ಬಿಜೆಪಿ ಮತ್ತು ಜೆಡಿಎಸ್ ನಾಯಕರು ಜವಾಬ್ದಾರಿ ವಹಿಸಿಕೊಂಡು ಉಪ ಚುನಾವಣೆ ಮಾಡಬೇಕು. ಈ ಕುರಿತು ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಎರಡೂ ಪಕ್ಷದ ನಾಯಕರ ಸಮನ್ವಯ ಸಭೆ ಆಗಬೇಕು. ಪಕ್ಷದ ವರಿಷ್ಠರ ಭೇಟಿಗಾಗಿ ಬುಧವಾರ ದೆಹಲಿಗೆ ಹೋಗಬೇಕಿತ್ತು. ಆದರೆ, ಕೆಲ ರಾಜಕೀಯ ವಿದ್ಯಮಾನಗಳಿಂದ ಪ್ರವಾಸ ಮುಂದೂಡಿರುವೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು