ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ | ವಿದ್ಯಾರ್ಥಿಗಳ ಮೇಲೆ ಪ್ರಾಚಾರ್ಯೆ ಪತಿ ಹಲ್ಲೆ; ದೂರು ದಾಖಲು

Published 20 ಜುಲೈ 2023, 6:30 IST
Last Updated 20 ಜುಲೈ 2023, 6:30 IST
ಅಕ್ಷರ ಗಾತ್ರ

ರಾಮನಗರ: ತಾಲ್ಲೂಕಿನ ಕೈಲಾಂಚ ಹೋಬಳಿಯ ಗುನ್ನೂರಿನ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲೆಯ ಪತಿ ಸುರೇಶ್ ಎಂಬುವರು ಶಾಲೆಯ ವಿದ್ಯಾರ್ಥಿಗಳ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ. 

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಯೋಗೇಶ್ ಎಸ್.ಬಿ ಅವರು ಸುರೇಶ್‌ ವಿರುದ್ಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. 

ಜಯಲಕ್ಷ್ಮಿ ಅವರು ಶಾಲೆಯಲ್ಲಿ ಪ್ರಾಂಶುಪಾಲರಾಗಿ ಕೆಲಸ ಮಾಡುತ್ತಿದ್ದಾರೆ. ಚನ್ನಪಟ್ಟಣ ಅಂಚೆ ಕಚೇರಿಯಲ್ಲಿ ಉದ್ಯೋಗಿಯಾಗಿರುವ ಜಯಲಕ್ಷ್ಮಿ ಅವರ ಪತಿ ಕೈಲಾಂಚದ ಸುರೇಶ್ ಆಗಾಗ ಶಾಲೆಗೆ ಭೇಟಿ ನೀಡುತ್ತಾರೆ. 

ಈ ಸಂದರ್ಭದಲ್ಲಿ ಮಕ್ಕಳನ್ನು ಅವಾಚ್ಯವಾಗಿ ನಿಂದಿಸುತ್ತಿದ್ದರು. ಇತ್ತೀಚೆಗೆ 9ನೇ ತರಗತಿ ವಿದ್ಯಾರ್ಥಿ ಸೇರಿದಂತೆ ಇತರ ಮಕ್ಕಳ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಆರೋಪಿ ಸುರೇಶ್ ಆರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಮಕ್ಕಳ ಕೈ–ಕಾಲುಗಳಿಗೆ ಗಾಯವಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಸುರೇಶ್‌ ತಲೆ ಮರೆಸಿಕೊಂಡಿದ್ದು, ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ’ ಎಂದು ರಾಮನಗರ ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಗಿರಿರಾಜ್ ತಿಳಿಸಿದ್ದಾರೆ. 

‘ಪತಿಯ ಹೀನ ಕೃತ್ಯದ ಕುರಿತು ಜಯಲಕ್ಷ್ಮಿ ಅವರು ಸಂಬಂಧಪಟ್ಟವರ ಗಮನಕ್ಕೆ ತಂದಿಲ್ಲ. ಈ ಕುರಿತು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದ್ದು, ಘಟನೆ ಬಳಿಕ ಅವರು ಸಹ ತಲೆ ಮರೆಸಿಕೊಂಡಿದ್ದಾರೆ’ ಎಂದು ಹೇಳಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT