ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ; ಕನಕಪುರದ ಹರ್ಷಿತಾ ದ್ವಿತೀಯ ಸ್ಥಾನ

ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ; ಮುಖ್ಯಮಂತ್ರಿಯಿಂದ ಪ್ರಶಸ್ತಿ ಪ್ರದಾನ
Published 7 ಫೆಬ್ರುವರಿ 2024, 7:54 IST
Last Updated 7 ಫೆಬ್ರುವರಿ 2024, 7:54 IST
ಅಕ್ಷರ ಗಾತ್ರ

ರಾಮನಗರ: ಮಹಾತ್ಮ ಗಾಂಧೀಜಿ ಅವರ ಜನ್ಮದಿನದ ಪ್ರಯುಕ್ತ ಅವರ ಬದುಕು, ಸ್ವಾತಂತ್ರ್ಯ ಹೋರಾಟ, ಸರಳತೆ, ಆಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆ ಪ್ರಯತ್ನ ಸೇರಿದಂತೆ ವಿವಿಧ ವಿಷಯಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆಯೋಜಿಸಿದ್ದ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಪ್ರೌಢಶಾಲಾ ವಿಭಾಗದಲ್ಲಿ ಜಿಲ್ಲೆಯ ಹರ್ಷಿತಾ ಎನ್. ದ್ವಿತೀಯ ಸ್ಥಾನ ಪಡೆದಿದ್ದಾರೆ.

ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿರುವ ಹರ್ಷಿತಾ, ಕನಕಪುರ ತಾಲ್ಲೂಕಿನ ತುಂಗಣಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿದ್ದಾರೆ. ಬೆಂಗಳೂರಿನ ಮುಖ್ಯಮಂತ್ರಿ ನಿವಾಸ ಕಾವೇರಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಿ.ಎಂ  ಸಿದ್ದರಾಮಯ್ಯ ಅವರು ಹರ್ಷಿತಾ ಅವರಿಗೆ ₹21 ಸಾವಿರ ನಗದು ಬಹುಮಾನ, ಪ್ರಶಸ್ತಿ ಪತ್ರ, ಸ್ಮರಣಿಕೆ ಹಾಗೂ ಗಾಂಧೀಜಿ ಕುರಿತ ಪುಸ್ತಕಗಳನ್ನು ವಿತರಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರೌಢಶಾಲಾ ವಿಭಾಗದಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆಯ ಸಂತ ಅನ್ನಮ್ಮ ಪ್ರೌಢಶಾಲೆಯ ಅನಿರುದ್ಧ ಮನೋಜ್ ಪ್ರಥಮ ಸ್ಥಾನ ಹಾಗೂ ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ತಿಳವಳ್ಳಿಯ ಗೈಡ್ ಆಂಗ್ಲ ಮಾಧ್ಯಮ ಶಾಲೆಯ ತೋಹಿದ್ ಅಹ್ಮದ್ ಲಾಡಜಿ ತೃತೀಯ ಸ್ಥಾನ ಪಡೆದಿದ್ದಾರೆ.

ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಸೇರಿ ಮೂರು ವಿಭಾಗದಡಿ ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆ ಆಯೋಜಿಸಲಾಗಿತ್ತು. ಇಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳ ಪ್ರಬಂಧಗಳನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ಪರಿಗಣಿಸಲಾಗಿತ್ತು.

ಬಹುಮಾನ ವಿತರಣೆ ಸಮಾರಂಭದಲ್ಲಿ ಮುಖ್ಯಮಂತ್ರಿಯವರ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ, ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್, ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ, ಸಿದ್ದೇಶ್ವರಪ್ಪ ಜಿ.ಬಿ, ಉಪನಿರ್ದೆಶಕ ರಾಮಲಿಂಗಪ್ಪ ಬಿ.ಕೆ. ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT