ಭಾನುವಾರ, ಫೆಬ್ರವರಿ 23, 2020
19 °C

ಕೋಡಂಬಹಳ್ಳಿ: ಬಿಡಿಸಿಸಿ ಬ್ಯಾಂಕ್ ಶಾಖೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನಪಟ್ಟಣ: ಬ್ಯಾಂಕುಗಳು ರೈತರ ಹಾಗೂ ಹಿಂದುಳಿದ ವರ್ಗಗಳ ಏಳಿಗೆಗೆ ಶ್ರಮಿಸಬೇಕು ಎಂದು ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ (ಬಿಡಿಸಿಸಿ ಬ್ಯಾಂಕ್) ಎಸ್.ರವಿ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಕೋಡಂಬಹಳ್ಳಿ ಗ್ರಾಮದಲ್ಲಿ ನೂತನವಾಗಿ ಆರಂಭವಾದ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗೆ ಪೂಜೆ ಸಲ್ಲಿಸಿ ಶನಿವಾರ ಚಾಲನೆ ನೀಡಿ ಮಾತನಾಡಿ, ಬಿಡಿಸಿಸಿ ಬ್ಯಾಂಕ್ ವತಿಯಿಂದ ರೈತರಿಗೆ, ಮಹಿಳೆಯರಿಗೆ ಹಲವಾರು ರೀತಿಯ ಸಾಲವನ್ನು ನೀಡಿದ್ದು, ಅವರ ಏಳಿಗೆಗೆ ಶ್ರಮಿಸಲಾಗುತ್ತಿದೆ ಎಂದರು.

ಗ್ರಾಮೀಣ ಭಾಗದಲ್ಲಿ ಬಿಡಿಸಿಸಿ ಬ್ಯಾಂಕ್ ಘಟಕ ಸ್ಥಾಪಿಸಿ ಗ್ರಾಮೀಣ ಭಾಗದ ಅಭಿವೃದ್ಧಿಗೆ ಶ್ರಮಿಸುವ ಉದ್ದೇಶದಿಂದ ಕೋಡಂಬಹಳ್ಳಿ ಗ್ರಾಮದಲ್ಲಿ ಬ್ಯಾಂಕ್ ಸ್ಥಾಪನೆ ಮಾಡಲಾಗಿದೆ. ರೈತರು, ಮಹಿಳೆಯರು, ಹಿಂದುಳಿದ ವರ್ಗದ ಜನತೆ, ವರ್ತಕರು ಬ್ಯಾಂಕ್ ನ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್. ಲಿಂಗೇಶ್ ಕುಮಾರ್ ಮಾತನಾಡಿ, ಈ ಭಾಗದಲ್ಲಿ ಗ್ರಾಹಕರ ಒತ್ತಡ ಹೆಚ್ಚಾಗಿತ್ತು. ಬಿಡಿಸಿಸಿ ಬ್ಯಾಂಕ್ ಸ್ಥಾಪನೆ ಮಾಡುವಂತೆ ಬಹುದಿನಗಳಿಂದ ಬೇಡಿಕೆ ಇತ್ತು. ಗ್ರಾಮದಲ್ಲಿ ಕೆನರಾ ಬ್ಯಾಂಕ್ ಶಾಖೆ ಒಂದೇ ಇದ್ದು, ಅದರ ಜೊತೆಗೆ ಮತ್ತೊಂದು ಬ್ಯಾಂಕಿನ ಅವಶ್ಯಕತೆ ಇದ್ದುದ್ದನ್ನು ಮನಗಂಡು ಬಿಡಿಸಿಸಿ ಬ್ಯಾಂಕ್ ಶಾಖೆ ಆರಂಭಿಸಲಾಗಿದೆ. ಇದರ ಜೊತೆಗೆ ಎಟಿಎಂ ಸಹ ತೆರೆಯಲಾಗಿದೆ. ಗ್ರಾಹಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಮಾದು ಮಾತನಾಡಿ, ಈ ಬ್ಯಾಂಕಿನ ಅಡಿಯಲ್ಲಿ ಸುತ್ತಲಿನ ಗ್ರಾಮಗಳ 8 ವ್ಯವಸಾಯ ಸೇವಾ ಸಹಕಾರ ಸಂಘಗಳ ಕಾರ್ಯಚಟುವಟಿಕೆ ನಡೆಯಲಿದೆ. ಹಿಂದೆ ಈ ಭಾಗದ ರೈತರು ಸಾಲದ ಹಣ ಪಡೆಯಲು ಚನ್ನಪಟ್ಟಣದ ಬಿಡಿಸಿಸಿ ಬ್ಯಾಂಕಿಗೆ ತೆರಳಬೇಕಾಗಿತ್ತು. ಈಗ ಕೋಡಂಬಹಳ್ಳಿ ಗ್ರಾಮದಲ್ಲಿಯೆ ಬಿಡಿಸಿಸಿ ಬ್ಯಾಂಕ್ ಶಾಖೆ ಸ್ಥಾಪನೆಯಾಗಿದೆ. ಇದರಿಂದ ಈ ಭಾಗದ ಹತ್ತಾರು ಹಳ್ಳಿಗಳ ರೈತರಿಗೆ ಅನುಕೂಲವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಮದ್ದೂರಯ್ಯ, ಮುಖಂಡರಾದ ಮಂಗಾಡಹಳ್ಳಿ ರಾಜಣ್ಣ, ಎಲೆತೋಟದಹಳ್ಳಿ ಬಸವರಾಜು, ಪಟೇಲ್ ಶ್ರೀನಿವಾಸ್ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)