ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿ.ಪಿ. ಯೋಗೇಶ್ವರ್‌ಗೆ ಬಿಜೆಪಿ ಹೈಕಮಾಂಡ್‌ ಬುಲಾವ್: ಸಮಾನ ಮನಸ್ಕರ ಸಮಾವೇಶ ರದ್ದು

Published : 10 ಆಗಸ್ಟ್ 2024, 23:40 IST
Last Updated : 10 ಆಗಸ್ಟ್ 2024, 23:40 IST
ಫಾಲೋ ಮಾಡಿ
Comments

ಚನ್ನಪಟ್ಟಣ (ರಾಮನಗರ): ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ತಯಾರಿ ನಡೆಸಿದ್ದ ವಿಧಾನ ಪರಿಷತ್‌ ಸದಸ್ಯ ಸಿ.ಪಿ. ಯೋಗೇಶ್ವರ್‌ ಅವರ ಬೆಂಬಲಿಗರು ಭಾನುವಾರ (ಆ.11) ಆಯೋಜಿಸಿದ್ದ ಸಮಾನ ಮನಸ್ಕರ ಸಮಾವೇಶ ಅಂತಿಮ ಕ್ಷಣದಲ್ಲಿ ರದ್ದಾಗಿದೆ.

ಯೋಗೇಶ್ವರ್ ಅಭಿಮಾನಿ ಬಳಗ ಮತ್ತು ಸಮಾನ ಮನಸ್ಕರ ವೇದಿಕೆ ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ‘ನಮ್ಮ ಶಾಸಕ ನಮ್ಮ ಹಕ್ಕು’ ಹೆಸರಿನಲ್ಲಿ ಸಮಾವೇಶ ಹಮ್ಮಿಕೊಂಡಿತ್ತು.

ಭಾನುವಾರವೇ ದೆಹಲಿಗೆ ಬರುವಂತೆ ಬಿಜೆಪಿ ಹೈಕಮಾಂಡ್‌ನಿಂದ ಯೋಗೇಶ್ವರ್ ಅವರಿಗೆ ಬುಲಾವ್ ಬಂದ ಹಿನ್ನೆಲೆಯಲ್ಲಿ ಸಮಾವೇಶವನ್ನು ರದ್ದು ಮಾಡಲಾಗಿದೆ. ಈ ವಿಚಾರವನ್ನು ಸ್ವತಃ ಯೋಗೇಶ್ವರ್ ಅವರೇ ಖಚಿತ ಪಡಿಸಿದ್ದು, ದೆಹಲಿಗೆ ತೆರಳಿ ಪಕ್ಷದ ಮುಖಂಡರನ್ನು ಭೇಟಿ ಮಾಡುವುದಾಗಿ ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದಲ್ಲಿ ಸೋಮವಾರ ದೆಹಲಿಯಲ್ಲಿ ನಡೆಯಲಿರುವ ಸಭೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 

ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮೈತ್ರಿ ಪಕ್ಷದಿಂದ ಕಣಕ್ಕಿಳಿಯಲು ಬಯಸಿದ್ದ ಯೋಗೇಶ್ವರ್ ಅವರಿಗೆ ಮೈತ್ರಿ ನಾಯಕರಿಂದ ಸೂಕ್ತ ಸ್ಪಂದನೆ ಸಿಕ್ಕಿರಲಿಲ್ಲ. ಪಕ್ಷೇತರರಾಗಿ ಕಣಕ್ಕಿಳಿಯುವ ಉದ್ದೇಶದಿಂದ ಬೃಹತ್ ಸಮಾವೇಶ ನಡೆಸಿ ಶಕ್ತಿ ಪ್ರದರ್ಶಿಸಲು ಮುಂದಾಗಿದ್ದರು.

‘ಹೈಕಮಾಂಡ್‌ನಿಂದ ಬುಲಾವ್‌ ಬಂದ ಹಿನ್ನೆಲೆಯಲ್ಲಿ ಯೋಗೇಶ್ವರ್ ದೆಹಲಿಗೆ ತೆರಳಿ ಬಿಜೆಪಿ ಮುಖಂಡರನ್ನು ಭೇಟಿ ಮಾಡಲಿದ್ದಾರೆ.  ಸಮಾನ ಮನಸ್ಕರ ವೇದಿಕೆಯ ಸಂಚಾಲಕರೊಬ್ಬರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾಗಾಗಿ ಅನಿವಾರ್ಯವಾಗಿ ಸಮಾವೇಶವನ್ನು ಮುಂದೂಡಲಾಗಿದೆ’ ಎಂದು ವೇದಿಕೆಯ ಡಾ.ಲೋಕಾನಂದ್ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT