ಸೋಮವಾರ, ಜೂನ್ 14, 2021
28 °C
ರಾಮನಗರ–ಚನ್ನಪಟ್ಟಣದ ಐದು ಕಡೆ ಪರೀಕ್ಷಾ ಕೇಂದ್ರಗಳ ಸ್ಥಾಪನೆ

ಸಿಇಟಿ ಪರೀಕ್ಷೆ: ಸಿದ್ಧತೆ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ‘ಜಿಲ್ಲೆಯ 5 ಕೇಂದ್ರಗಳಲ್ಲಿ ಇದೇ29 ಹಾಗೂ 30ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ಅದಕ್ಕಾಗಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಕೆ. ರಾಜೇಂದ್ರ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಬಾರಿ 1892 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎಂದು ಹೇಳಿದರು.

ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ ಸುತ್ತಳತೆಯಲ್ಲಿ 144ನೇ ಕಲಂ ಜಾರಿಗೊಳಿಸಲು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರಿಗೆ ಆದೇಶಿಸಿದರು.
ಪ್ರತಿ ಪರೀಕ್ಷಾ ಕೇಂದ್ರಕ್ಕೂ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಸಮೀಪದ ಪೊಲೀಸ್ ಸರ್ಕಲ್‌ ಇನ್‌ಸ್ಪೆಕ್ಟರ್‌ ಜೊತೆ ಸಂಪರ್ಕದಲ್ಲಿ ಇದ್ದು ಯಾವುದೇ ಅವ್ಯವಹಾರ ನಡೆಯದಂತೆ ನಿಗಾ ವಹಿಸುವಂತೆ ತಿಳಿಸಿದರು.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಶೌಚಾಲಯ ಮುಂತಾದ ಅಗತ್ಯ ವ್ಯವಸ್ಥೆ ಹಾಗೂ ತುರ್ತು ಸಂದರ್ಭದಲ್ಲಿ ಪ್ರಾಥಮಿಕ ಚಿಕಿತ್ಸೆ ಸೌಲಭ್ಯ ಸಿಗಬೇಕು. ಇದಕ್ಕಾಗಿ ಪ್ರತಿ ಪರೀಕ್ಷಾ ಕೇಂದ್ರಕ್ಕೂ ಆರೋಗ್ಯ ಸಹಾಯಕಿಯರನ್ನು ನಿಯೋಜಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚಿಸಿದರು.

ಪ್ರತಿ ಪರೀಕ್ಷಾ ಕೇಂದ್ರಕ್ಕೂ ಸಹಾಯಕ ಆಯುಕ್ತರ ಗ್ರೇಡ್ ಅಧಿಕಾರಿಯನ್ನು ವೀಕ್ಷಕರನ್ನಾಗಿ ನೇಮಿಸಿ, ಪ್ರತಿ ತಾಲ್ಲೂಕಿಗೂ ಮೂರು ಬಿ- ಗ್ರೇಡ್ ದರ್ಜೆಯ ಅಧಿಕಾರಿಗಳನ್ನು ಪರೀಕ್ಷಾ ಕಾರ್ಯದ ನಿಮಿತ್ತ ನಿಯೋಜಿಸಬೇಕು. ಪ್ರಶ್ನೆಪತ್ರಿಕೆಗಳನ್ನು ಮಾರ್ಗಧಿಕಾರಿಗಳಿಂದ ಪಡೆದು ಖಜಾನೆಯಲ್ಲಿ ಠೇವಣಿ ಇರಿಸಬೇಕು ಎಂದರು.

ಪ್ರಶ್ನೆ ಪತ್ರಿಕೆಗಳನ್ನು ಮತ್ತು ಉತ್ತರ ಪತ್ರಿಕೆಗಳನ್ನು ಖಜಾನೆಯಿಂದ ಪರೀಕ್ಷಾ ಕೇಂದ್ರಕ್ಕೆ, ಪರೀಕ್ಷಾ ಕೇಂದ್ರದಿಂದ ಖಜಾನೆಗೆ ಕೊಂಡೊಯ್ಯುವಾಗ ಪೋಲಿಸ್ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಪಿ ವಿಜಯ್, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು, ರಾಮನಗರ ಹಾಗೂ ಚನ್ನಪಟ್ಟಣ ತಹಶೀಲ್ದಾರರು, ಪರೀಕ್ಷಾ ಕೇಂದ್ರದ ಉಪಮುಖ್ಯ ಅಧೀಕ್ಷಕರು, ಪ್ರಶ್ನೆ ಪತ್ರಿಕಾ ಪಾಲಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು